ಬಳ್ಳಾರಿ ; ಬೇಸಿಗೆಯಲ್ಲಿ ಜಿಲ್ಲೆಯ ಗ್ರಾಪಂ ವ್ಯಾಪ್ತಿಯ ಹಳ್ಳಿಗಳಲ್ಲಿ ಸಮರ್ಪಕವಾಗಿ ಕ್ಲೋರಿನೇಷನ್‌ನೊಂದಿಗೆ ಶುದ್ಧೀಕರಣಗೊಳಿಸಿದ ನೀರು ಪೂರೈಕೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಕೆ.ವಿ. ತ್ರಿಲೋಕಚಂದ್ರ ಹೇಳಿದರು.
ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮದ (20 ಅಂಶ ಸೇರಿದಂತೆ) ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಬೇಸಿಗೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿಗೆ ವ್ಯತ್ಯಯಗಬಾರದು. ಯಾವುದೇ ಕಾರಣಕ್ಕೂ ಕಲುಷಿತ ನೀರು ಪೂರೈಕೆಯಾಗಬಾರದು. ನಿರಂತರವಾಗಿ ನೀರಿನ ಮೂಲಗಳನ್ನು ಪರಿಶೀಲನೆ ನಡೆಸುತ್ತಿರಬೇಕು. ನೀರಿನ ಸಂಗ್ರಹಾಗಾರಗಳನ್ನು ಶುಚಿಗೊಳಿಸುತ್ತಿರಬೇಕು. ನೀರಿನ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದ ನಂತರವೇ ಸರಬರಾಜು ಮಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಜಿಲ್ಲೆಯಲ್ಲಿ ಕುಡಿವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಬಹುದಾದಂತಹ 82 ಹಳ್ಳಿಗಳನ್ನು ಗುರುತಿಸಿದ್ದು, ಈಗಾಗಲೇ ಕುಡಿವ ನೀರು ಪೂರೈಕೆಗೆ ಟ್ಯಾಂಕರ್‌ಗಳನ್ನು ಸಿದ್ಧತೆಯಲ್ಲಿಟ್ಟುಕೊಳ್ಳಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಇಂದುಧರ್ ಸಭೆಗೆ ತಿಳಿಸಿದರು.
ಶುದ್ಧ ಕುಡಿವ ನೀರು ಸೇವನೆ ಕುರಿತು ಸಾರ್ವಜನಿಕರಿಗೆ ಜನಸಂದಣಿ ಇರುವ ಸ್ಥಳ, ಜಾತ್ರಾ ಸಂದರ್ಭಗಳಲ್ಲಿ ಅರಿವು ಮೂಡಿಸುವ ಕಾರ್ಯ ಕೈಗೊಳ್ಳಬೇಕು. ಗ್ರಾಮಗಳಲ್ಲಿ ತುರ್ತು ಆರೋಗ್ಯ ಸೇವೆಗಳಿಗಾಗಿ ಬರುವ ರೋಗಿಗಳನ್ನು ಪ್ರತಿ ಬಾರಿಯೂ ಜಿಲ್ಲಾ ಕೇಂದ್ರಗಳಿಗೆ ತೆರಳುವಂತೆ ಶಿಫಾರಸ್ಸು ಮಾಡುವುದು ಸಮಂಜಸವಲ್ಲ. ಸಾರ್ವಜನಿಕರಿಗಾಗಿ ತಾವಿರುವಲ್ಲಿಯೇ ಆರೋಗ್ಯ ಸೇವೆ ನೀಡಬೇಕು. ಇದಕ್ಕೆ ಸಾಕಷ್ಟು ಮಾನವ ಸಂಪನ್ಮೂಲಗಳನ್ನು ಒದಗಿಸಲಾಗುತ್ತಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಗರ್ಭಿಣಿ ಮಹಿಳೆಯರಲ್ಲಿ ಅಧಿಕ ರಕ್ತದೊತ್ತಡ, ಅನೀಮಿಯಾ ತಡೆಗಟ್ಟಲು ಸೂಕ್ತ ಕಾರ್ಯಯೋಜನೆ ರೂಪಿಸಬೇಕು. ಗರ್ಭಿಣಿ ಮಹಿಳೆಯರಿಗೆ ಸೇವಿಸಲು ಆರೋಗ್ಯ ಇಲಾಖೆಯಿಂದ ನೀಡಲಾಗುವ ಕಬ್ಬಿಣಾಂಶ ಮಾತ್ರೆಗಳ ಸೇವನೆ ಕುರಿತು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನೆ ಭೇಟಿ ನಡೆಸಿ ಖಚಿತಪಡಿಸಿಕೊಳ್ಳಬೇಕು. ಇದರಿಂದ ಸುಲಭ ಮತ್ತು ಸಾಮಾನ್ಯ ಹೆರಿಗೆಗೆ ಸಹಾಯಕವಾಗಲಿದೆ ಎಂದರು.
ಜಿಲ್ಲೆಯಲ್ಲಿ ಕಳಪೆ ಗುಣಮಟ್ಟದ ಬಿತ್ತನೆ ಬೀಜ ವಿತರಣೆಯಾಗಿರುವ ಬಗ್ಗೆ ಹಾಗೂ ರೈತರ ಫಸಲಿನಲ್ಲಿ ಇಳುವರಿ ಬಾರದೇ ಇರುವ ಬಗ್ಗೆ ದೂರುಗಳು ಕೇಳಿಬರುತ್ತಿದೆ. ಈ ಕುರಿತು ಕೃಷಿ ಅಧಿಕಾರಿಗಳು ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳ ಪೂರೈಕೆ ಮಾಡುತ್ತಿರುವ ಅನಧಿಕೃತ ರಸಗೊಬ್ಬರದ ಅಂಗಡಿಗಳ ಮೇಲೆ ದಾಳಿ ನಡೆಸಿ ಕಾನೂನಿನ್ವಯ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಕುರಿತು ರೈತರಿಗೆ ಗುಣಮಟ್ಟದ ಬೀಜ ಮತ್ತು ರಸಗೊಬ್ಬರಗಳ ಕುರಿತು ಅರಿವು ಮೂಡಿಸಬೇಕು. ಜಾನುವಾರುಗಳಿಗೆ ಮೇವಿನ ಕೊರತೆಯಾಗಬಾರದು. ಈಗಾಗಲೇ ಇರುವ ಮೇವಿನ ಬ್ಯಾಂಕ್‌ಗಳಲ್ಲಿ ಮೇವು ದಾಸ್ತಾನು ಇಟ್ಟುಕೊಳ್ಳಬೇಕು ಎಂದು ಸೂಚಿಸಿದರು.
ಸಂಡೂರು ತಾಲೂಕು ವ್ಯಾಪ್ತಿಯಲ್ಲಿ ಕಳೆದ ವಾರ ಅಕಾಲಿಕ ಗಾಳಿ-ಮಳೆಯಿಂದಾಗಿ ಬಾಳೆ ಬೆಳೆಯು ನೆಲಕ್ಕುರುಳಿರುವ ಕುರಿತು ವರದಿಯಾದ ಬಗ್ಗೆ ಅಧಿಕಾರಿಗಳ ಕ್ರಮ ಏನು ಎಂದು ಪ್ರಶ್ನಿಸಿದರು ?. ಈ ಕುರಿತು ನಿಯಮಾನುಸಾರ ಬೆಳೆ ಪರಿಹಾರ ಒದಗಿಸಲು ಕ್ರಮ ವಹಿಸುವಂತೆ ತಾಲೂಕು ತಹಸೀಲ್ದಾರರಿಗೆ ನಿರ್ದೇಶನ ನೀಡಲಾಗಿದೆ ಎಂದು ತೋಟಗಾರಿಕೆ ಉಪನಿರ್ದೇಶಕರು ಸಭೆಗೆ ತಿಳಿಸಿದರು.
ಜಿಲ್ಲೆಯಲ್ಲಿ ಹೈನುಗಾರಿಕೆಗೆ ಉತ್ತೇಜನ ನೀಡಬೇಕು. ಸಾಮಾಜಿಕ ಅರಣ್ಯ ಬೆಳವಣಿಗೆಗೆ ಆದ್ಯತೆ ನೀಡಬೇಕು. ಜಿಲ್ಲೆಯಲ್ಲಿ ರಸ್ತೆಗಳು ನಿರ್ಮಾಣ ಕಾಮಗಾರಿಗಳು ಗುಣಮಟ್ಟದ್ದಾಗಿರಬೇಕು.ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿಗಳಿಗೆ ಚುರುಕು ನೀಡಿ, ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಬರುವ ವಸತಿ ನಿಲಯಗಳ ಕಟ್ಟಡ, ನಿರ್ವಹಣೆ, ಕುಡಿವ ನೀರು, ಶೌಚಾಲಯ ವ್ಯವಸ್ಥೆ ಮತ್ತು ಇತರೆ ವ್ಯವಸ್ಥೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ಸೂಕ್ತ ಸಲಹೆ-ಸೂಚನೆ ನೀಡಿದರು.