ಜಿಲ್ಲೆ

ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಒತ್ತಾಯ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಗುತ್ತಿಗೆದಾರ ಸಚಿನ್ ಪಾಂಚಾಳ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಇಲ್ಲಿನ ಗಡಗಿ ಚೆನ್ನಪ್ಪ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಘಟಕದಿಂದ ಶನಿವಾರ ಪ್ರತಿಭಟಿಸಲಾಯಿತು.

ನಗರದ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಡಿಸಿ ಕಚೇರಿಯವರೆಗೆ ರ‌್ಯಾಲಿ ನಡೆಸಿದರು. ರಸ್ತೆಯುದ್ದಕ್ಕೂ ಬಸ್ ದರ ಏರಿಕೆಯನ್ನು ಖಂಡಿಸಿ ಸಚಿನ್ ಪಾಂಚಾಳ್ ಆತ್ಮಹತ್ಯೆಗೆ ಕಾರಣರಾದ ಎನ್ನಲಾಗಿರುವ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ಅಧಿಕಾರಾವಧಿಯಲ್ಲಿ ಸರ್ಕಾರಿ ಪ್ರಾಯೋಜಿತ ಆತ್ಮಹತ್ಯೆಗಳು, ರಾಜ್ಯ ಸರ್ಕಾರಿ ಕುಮ್ಮಕ್ಕಿನ ಆತ್ಮಹತ್ಯೆ ಪ್ರಕರಣಗಳು ದಿನೇ ದಿನೆ ಹೆಚ್ಚುತ್ತಿವೆ. ಸರ್ಕಾರ, ಸಚಿವರು, ಆಡಳಿತ ಪಕ್ಷದ ಶಾಸಕರ ಕುಮ್ಮಕ್ಕಿನಿಂದ ಹಿಂದೆಂದೂ ಕಂಡರಿಯದಂತಹ ಸರಣಿ ಆತ್ಮಹತ್ಯೆ ಪ್ರಕರಣಗಳು ರಾಜ್ಯದಲ್ಲಿ ಇದೀಗ ನಡೆಯುತ್ತಿವೆ. ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಅಧಿಕಾರದ ಚುಕ್ಕಾಣಿ ಹೊಡಿದ ಬಳಿಕ ರಾಜ್ಯಕ್ಕೆ ಆತ್ಮಹತ್ಯೆ ಭಾಗ್ಯವನ್ನು ದಯಪಾಲಿಸಿದ್ದಾರೆ. ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ ಆತ್ಮಹತ್ಯೆ ಮಾಡಿಕೊಂಡ ಬಳಿಕ ನಿಗಮದ ಅಕ್ರಮ ಬಹಿರಂಗವಾಗಿ ಮೊದಲ ಆತ್ಮಹತ್ಯೆ ನಡೆಯಿತು. ಬಿಜೆಪಿ ಹೋರಾಟದಿಂದ ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ಸಲ್ಲಿಸಿದರು. ಬಳಿಕ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಹೆಸರನ್ನು ಬರೆದಿಟ್ಟು ರುದ್ರಣ್ಣ ಯಡವಣ್ಣವರ್ ಎನ್ನುವವರು ಆತ್ಮಹತ್ಯೆ ಮಾಡಿಕೊಂಡಿದ್ದರು. ದಾವಣಗೆರೆಯಲ್ಲಿ ಬಾಕಿ ಹಣ ಸಿಗದೆ ಗುತ್ತಿಗೆದಾರರು ಅತ್ಮಹತ್ಯೆ ಮಾಡಿಕೊಂಡಿದ್ದರು. ಯಾದಗಿರಿಯಲ್ಲಿ ಸ್ಥಳೀಯ ಶಾಸಕನ ಪುತ್ರನ ಒತ್ತಡಕ್ಕೆ ಅಲ್ಲಿನ ಪಿಎಸ್‌ಐ ಪರಶುರಾಮ್ ಎನ್ನುವವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅಲ್ಲದೇ, ಸಿದ್ದಲಿಂಗ ಸ್ವಾಮೀಜಿ, ಶಾಸಕ ಬಸವರಾಜ ಮತ್ತಿಮೂಡ್, ಮಣಿಕಂಠ ರಾಠೋಡ್ ಸೇರಿ ಹಲವರ ಕೊಲೆಗೂ ಸಂಚು ರೂಪಿಸಿದ್ದಾಗಿ ಡೆತ್ ನೋಟ್ ನಲ್ಲಿ ಪ್ರಸ್ತಾಪಿಸಲಾಗಿದೆ. ಹಾಗಾಗಿ ಸಚಿನ್ ಪಾಂಚಾಳ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಬಿಐ ತನಿಖೆಗೆ ವಹಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.