ಜಿಲ್ಲೆ

ಫೋಕ್ಸೋ ಕುರಿತು ಜಾಗೃತಿ ಮೂಡಿಸಿ

ಎಸ್.ಎರ್ರಿಸ್ವಾಮಿ

ಬಳ್ಳಾರಿ ; ಜಿಲ್ಲೆಯಲ್ಲಿ ಬಾಲ್ಯ ವಿವಾಹ ನಿಷೇಧ ಹಾಗೂ ಪೋಕ್ಸೋ ಕಾಯ್ದೆಯ ಕುರಿತು ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದು ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದರು.

ಇಲ್ಲಿನ ಡಿಸಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಹಾಗೂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಪೊಲೀಸ್ ಇಲಾಖೆಯಿಂದ ಗ್ರಾಮ ಸಭೆಗಳಲ್ಲಿ, ಶಿಕ್ಷಣ ಇಲಾಖೆ ವತಿಯಿಂದ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಗಳಲ್ಲಿ ಬಾಲ್ಯವಿವಾಹದ ಕುರಿತು ಮನವರಿಕೆ ಮಾಡಬೇಕು

ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಇತರೆ ಇಲಾಖೆಗಳ ವಸತಿ ನಿಲಯಗಳಲ್ಲಿ ಮಕ್ಕಳಿಗೆ ಬಾಲ್ಯವಿವಾಹ ಹಾಗೂ ಪೋಕ್ಸೋ ಕಾಯ್ದೆ ಕುರಿತು ಕಾರ್ಯಾಗಾರ ಹಮ್ಮಿಕೊಳ್ಳಬೇಕು. ಇಲಾಖೆಗಳು ಮತ್ತು ವಿವಿಧ ಸಂಘ-ಸಂಸ್ಥೆಗಳ ಸಹಕಾರ ಪಡೆದುಕೊಳ್ಳಬೇಕು ಎಂದು ನಿರ್ದೇಶಿಸಿದರು.

ಜಿಲ್ಲೆಯಲ್ಲಿ ಬೇಟಿ ಬಚಾವೋ-ಬೇಟಿ ಪಡಾವೋ ಯೋಜನೆ ಇನ್ನೂ ಹೆಚ್ಚು ಪರಿಣಾಮಕಾರಿಯಾಗುವ ದಿಸೆಯಲ್ಲಿ ಲಿಂಗಾನುಪಾತ ಕಡಿಮೆ ಇರುವ ತಾಲೂಕು ಹಾಗೂ ಗ್ರಾಪಂ ಗಳಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದರು.

ಕುಟುಂಬಗಳಲ್ಲಿ ಯಾವುದೇ ಬಗೆಯ ಸಮಸ್ಯೆಗಳಲ್ಲಿ ಹಿಂಸೆಗೊಳಗಾದ ಮಹಿಳೆಯರಿಗೆ ಸಂಬಂಧಿಸಿದಂತೆ ದೌಜನ್ಯಕ್ಕೊಳಗಾದ ಮಹಿಳೆಯರನ್ನು ರಕ್ಷಿಸಲು ಜಿಲ್ಲಾಮಟ್ಟದಲ್ಲಿ ಸಂರಕ್ಷಣಾಧಿಕಾರಿಯನ್ನು ನೇಮಿಸಲಾಗಿದ್ದು, ಮಹಿಳೆಯರ ಉಚಿತ ಸಹಾಯವಾಣಿ ಸಂಖ್ಯೆ 181ಯ ಬಗ್ಗೆ ಗ್ರಾಮ ಹಾಗೂ ಪೊಲೀಸ್ ಠಾಣೆಗಳಲ್ಲಿ ಹೆಚ್ಚಾಗಿ ಪ್ರಚಾರ ನೀಡಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ದೌರ್ಜನ್ಯ, ಮಹಿಳೆಯರ ಮತ್ತು ಮಕ್ಕಳ ಸಾಗಾಟ, ಕೌಟುಂಬಿಕ ದೌರ್ಜನ್ಯ, ಬಾಲ್ಯವಿವಾಹ ಸೇರಿದಂತೆ ವಿವಿಧ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಸಖಿ ಒನ್ ಸ್ಟಾಪ್ ಸೆಂಟರ್, ಬಾಲಕಿಯರ ವಸತಿ ನಿಲಯ, ದಮನಿತ ಮಹಿಳೆಯರ, ಟ್ರಾನ್ಸ್ ಜೆಂಡರ್ಸ್, ಸಾಂತ್ವನ ಕೇಂದ್ರಗಳು ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಜರುಗಿತು.