ಜಿಲ್ಲೆ

ದ್ವಿತೀಯ ಪಿಯುಸಿ ಪರೀಕ್ಷೆ ಪಾರದರ್ಶಕವಾಗಿರಲಿ, ಅಧಿಕಾರಿಗಳಿಗೆ ಬಳ್ಳಾರಿ ಡಿಸಿ ನಕುಲ್ ಸೂಚನೆ

ಬಳ್ಳಾರಿ: ಜಿಲ್ಲೆಯ 32 ಪರೀಕ್ಷಾ ಕೇಂದ್ರಗಳಲ್ಲಿ ಮಾ.4 ರಿಂದ 23ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು, ಗೊಂದಲಗಳಿಗೆ ಅವಕಾಶ ನೀಡದೆ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಸಂಜೆ ಆಯೋಜಿಸಿದ್ದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪರೀಕ್ಷಾ ಕೇಂದ್ರಕ್ಕೆ ನಿಯೋಜಿಸಿದ ಸಿಬ್ಬಂದಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಸ್ಟಾಫ್ ನರ್ಸ್ ನಿಯೋಜಿಸಬೇಕು. ವಿದ್ಯಾರ್ಥಿಗಳಿಗೆ ಆಸನ, ಕುಡಿವ ನೀರು, ಪೀಠೋಪಕರಣ, ಗಾಳಿ, ಬೆಳಕಿನ ವ್ಯವಸ್ಥೆ ಸೇರಿ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದರು.

ಈ ಬಾರಿ 15906 ಬಾಲಕರು, 14993 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ. 40 ಪುಟಗಳ (38+2) ಉತ್ತರ ಪತ್ರಿಕೆಯಲ್ಲೇ ಎಲ್ಲ ಪ್ರಶ್ನೆಗಳಿಗೆ ಉತ್ತರ ಬರೆಯಬೇಕು. ಹೆಚ್ಚುವರಿ ಉತ್ತರ ಪತ್ರಿಕೆ ನೀಡುವುದಿಲ್ಲ. ಉತ್ತರ ಪತ್ರಿಕೆಗಳ ಮೇಲೆ ಮೇಲ್ವಿಚಾರಕರು ರಬ್ಬರ್ ಸೀಲ್ ಹಾಕಿ ಸಹಿ ಮಾಡಬೇಕು. ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಬಂದೋಬಸ್ತ್ ಒದಗಿಸಲಾಗುವುದು. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗುತ್ತದೆ. ಜೆರಾಕ್ಸ್ ಸೆಂಟರ್ ಮತ್ತು ಸೈಬರ್ ಕೆಫೆ ಮುಚ್ಚಿಸುವುದಕ್ಕೆ ಆದೇಶಿಸಲಾಗಿದೆ ಎಂದರು. ಅಪರ ಜಿಲ್ಲಾಧಿಕಾರಿ ಮಂಜುನಾಥ, ಸಹಾಯಕ ಆಯುಕ್ತ ಶೇಕ್ ತನ್ವೀರ್ ಆಸೀಫ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ನಾಗರಾಜಪ್ಪ , ಡಿಡಿಪಿಐ ರಾಮಪ್ಪ, 32 ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಇದ್ದರು.