ಬಳ್ಳಾರಿ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಬಿಡಿಎಎ ಮೈದಾನದ ವೇದಿಕೆ ಸಭಾಂಗಣದಲ್ಲಿ ಬುಧವಾರ ಶ್ರೀ ಕೃಷ್ಣ ಜಯಂತ್ಯುತ್ಸವ ಆಚರಿಸಲಾಯಿತು. ಪಾಲಿಕೆ ಮೇಯರ್ ಡಿ.ತ್ರಿವೇಣಿ, ಉಪ ಮೇಯರ್ ಜಾನಕಿ, ಜಿಲ್ಲಾ ಗೊಲ್ಲರ ಸಂಘದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ ಯಾದವ್ ಮತ್ತಿತರಿದ್ದರು.  
ಜಿಲ್ಲೆ

ಬಳ್ಳಾರಿ : ಜಿಲ್ಲಾಡಳಿತದಿಂದ ಸಂಭ್ರಮದ ಶ್ರೀಕೃಷ್ಣ ಜಯಂತಿ

Bellari - Heera Nayak

ಬಳ್ಳಾರಿ : ಮಹಾಭಾರತ ಯುದ್ಧದಲ್ಲಿ ಅರ್ಜುನನಿಗೆ ದಾರಿ ತೋರಿಸಿದಂತೆ ನಿಮ್ಮ ಜೀವನದಲ್ಲಿಯೂ ಶ್ರೀಕೃಷ್ಣನು ದಾರಿ ತೋರಲಿ, ನಿಮ್ಮ ಬದುಕನ್ನು ಸುಖಮಯವನ್ನಾಗಿಸಲಿ ಎಂದು ಪಾಲಿಕೆ ಮೇಯರ್ ಡಿ.ತ್ರಿವೇಣಿ ಹೇಳಿದರು.

ನಗರದ ಡಾ.ರಾಜ್‌ಕುಮಾರ್ ರಸ್ತೆಯ ಬಿಡಿಎಎ ಮೈದಾನದ ವೇದಿಕೆ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಬುಧವಾರ ಏರ್ಪಡಿಸಿದ್ದ ಶ್ರೀ ಕೃಷ್ಣ ಜಯಂತ್ಯುತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪಾಲಿಕೆ ಉಪ ಮೇಯರ್ ಜಾನಕಿ ಮಾತನಾಡಿ, ಶ್ರೀಕೃಷ್ಣ ಜನ್ಮಾಷ್ಟಮಿಯು ಭಾರತ ಹಾಗೂ ಇತರ ವಿದೇಶಿಗಳಲ್ಲಿಯೂ ಅತ್ಯಂತ ವಿಜೃಂಭಣೆಯಿಂದ ಆಚರಿಸಲ್ಪಡುವ ಹಬ್ಬಗಳಲ್ಲಿ ಒಂದು. ಅತ್ಯಂತ ಶ್ರದ್ಧಾ ಭಕ್ತಿಯಿಂದ ಬಾಲಕೃಷ್ಣನ ಜನ್ಮದಿನವನ್ನು ಆಚರಿಸಿ ಖುಷಿಪಡುತ್ತಾರೆ. ಈ ಹಬ್ಬವನ್ನು ಗೋಕುಲಾಷ್ಟಮಿ ಎಂದು ಕರೆಯಲಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಗೊಲ್ಲರ ಸಂಘದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ ಯಾದವ್ ವಿಶೇಷ ಉಪನ್ಯಾಸ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್, ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಟಿ.ಹೊನ್ನೂರಪ್ಪ ಸೇರಿದಂತೆ ಯಾದವ ಸಮಾಜದ ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಾಯಿ ಶೃತಿ ಮತ್ತು ಅವರ ತಂಡದಿಂದ ಭಕ್ತಿಗೀತೆಗಳನ್ನು ಪ್ರಸ್ತುತ ಪಡಿಸಿದರು.

ಶ್ರೀ ಕೃಷ್ಣ ಜಯಂತ್ಯುತ್ಸವದ ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಕಂಸಾಳೆ ಕುಣಿತ ಹಾಗೂ ತಾಷೆ ರಂಡೋಲ್ ಸೇರಿದಂತೆ ಸಾಂಸ್ಕೃತಿಕ ಕಲಾ ತಂಡಗಳು ನೋಡುಗರನ್ನು ಗಮನಸೆಳೆದವು.

ಪಾಲಿಕೆ ಮೇಯರ್ ಡಿ.ತ್ರಿವೇಣಿ ಅವರು ಚಾಲನೆ ನೀಡಿದರು. ಮೆರವಣಿಗೆಯು ಕನಕ ದುರ್ಗಮ್ಮ ದೇವಸ್ಥಾನದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಡಾ.ರಾಜ್‌ಕುಮಾರ್ ರಸ್ತೆಯ ಬಿಡಿಎಎ ಮೈದಾನದ ವೇದಿಕೆ ಸಭಾಂಗಣದವರೆಗೆ ತಲುಪಿ ಸಂಪನ್ನಗೊಂಡಿತು.