ಜಿಲ್ಲೆ

ಕ್ರೀಡೆ ಆರೋಗ್ಯದ ಅವಿಭಾಜ್ಯ ಅಂಗ

ಬಳ್ಳಾರಿ ; ದೈನಂದಿನ ಜೀವನದಲ್ಲಿ ಪ್ರತಿಯೊಬ್ಬರ ದೈಹಿಕ ಮತ್ತು ಮಾನಸಿಕ ಸದೃಢ ಆರೋಗ್ಯಕ್ಕೆ ಕ್ರೀಡೆಗಳು ಅವಿಭಾಜ್ಯ ಅಂಗವಾಗಿದ್ದು, ಪ್ರತಿದಿನ ಸಮಯಕ್ಕನುಗುಣವಾಗಿ ಕ್ರೀಡೆ ಹಾಗೂ ವ್ಯಾಯಾಮಗಳಿಗೆ ಮೀಸಲಿಡಬೇಕು ಎಂದು ಮೇಯರ್ ಮುಲ್ಲಂಗಿ ನಂದೀಶ್ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದೊಂದಿಗೆ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದರು. ಪ್ರಸ್ತುತದಲ್ಲಿ ಎಲ್ಲರೂ ಮೊಬೈಲ್ ಗೀಳಿಗೆ ದಾಸರಾಗುತ್ತಿದ್ದು, ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡುವಲ್ಲಿ ಸೋಮಾರಿತನ ಹಿಂಬಾಲಿಸುತ್ತಿದೆ. ಹಾಗಾಗಿ ಎಲ್ಲರೂ ತಪ್ಪದೇ ಸಿಗುವ ಸಮಯದಲ್ಲಿಯೇ ನಿಯಮಿತ ವ್ಯಾಯಾಮ ಮತ್ತು ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳೋಣ ಎಂದು ಕರೆ ನೀಡಿದರು.

ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್ ಮಾತನಾಡಿ, ದೈಹಿಕ ಹಾಗೂ ಮಾನಸಿಕ ನೆಮ್ಮದಿಗೆ ಕ್ರೀಡಾಕೂಟಗಳು ಹೆಚ್ಚು ಸಹಕಾರಿಯಾಗಿದ್ದು, ಸರ್ಕಾರಿ ನೌಕರರು ಉತ್ಸಾಹದಿಂದ ಭಾಗವಹಿಸಬೇಕು. ಕ್ರೀಡಾ ಚಟುವಟಿಕೆಗಳು ಕೇವಲ ಒಂದು ದಿನಕ್ಕೆ ಸೀಮಿತವಾಗದೇ ಹೆಚ್ಚಾಗಿ ಆಯೋಜಿಸಬೇಕು ಎಂದರು.

ಸರ್ಕಾರಿ ನೌಕರರು ದಿನನಿತ್ಯದ ಒತ್ತಡ ನಿವಾರಣೆಗೆ ತಮ್ಮ ಆರೋಗ್ಯಕ್ಕೆ ಹೆಚ್ಚಿನ ಗಮನ ನೀಡಬೇಕು. ತಮ್ಮಿಷ್ಟದ ಕ್ರೀಡೆಗಳಲ್ಲಿ ದಿನಂಪ್ರತಿ ಭಾಗವಹಿಸುವ ಮೂಲಕ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಲಹೆ ನೀಡಿದರು.

ಎಡಿಸಿ ಮಹಮ್ಮದ್ ಎನ್. ಜುಬೇರ್ ಮಾತನಾಡಿ, ಹಣದಿಂದ ಆರೋಗ್ಯ ಸಿಗುವುದಿಲ್ಲ, ಬದಲಾಗಿ ದೈನಂದಿನ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಾಗ ಮಾತ್ರ ಆರೋಗ್ಯವನ್ನು ಸದೃಢವಾಗಿಟ್ಟುಕೊಳ್ಳಬಹುದು ಎಂದು ಕಿವಿಮಾತು ಹೇಳಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಕಾರ್ಯದರ್ಶಿ ಜಿ.ವೈ.ತಿಪ್ಪಾರೆಡ್ಡಿ ಮಾತನಾಡಿದರು.

ಆಕರ್ಷಕ ಪಥಸಂಚಲನ: ಉದ್ಘಾಟನೆಗೂ ಮುನ್ನ ಸಂಡೂರು, ಸಿರುಗುಪ್ಪ, ಕುರುಗೋಡು, ಕಂಪ್ಲಿ ಮತ್ತು ಬಳ್ಳಾರಿ ತಾಲೂಕುಗಳಿಂದ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ನೋಂದಾಯಿಸಿಕೊಂಡಿದ್ದ ನೌಕರರಿಂದ ಕ್ರೀಡಾಧ್ವಜದೊಂದಿಗೆ ಆಕರ್ಷಕ ಪಥಸಂಚಲನ ನಡೆಯಿತು. ಇದೇ ವೇಳೆ ಗಣ್ಯರು ಪಥಸಂಚಲನದಿಂದ ಗೌರವ ವಂದನೆ ಸ್ವೀಕರಿಸಿದರು.

ಬಳಿಕ ಕ್ರೀಡಾ ಧ್ವಜಾರೋಹಣಾ ನೆರವೇರಿಸಿದರು. ಸಮಾರಂಭದಲ್ಲಿ ಭಾರತದ ಮಾಜಿ ಉಪ ಪ್ರಧಾನಮಂತ್ರಿ ಡಾ.ಬಾಬು ಜಗಜೀವನ್‌ರಾಮ್ ಅವರ 118 ನೇ ಜನ್ಮ ದಿನೋತ್ಸವದ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು.