ಜಿಲ್ಲೆ

ನಿರಂತರ ಪರಿಶ್ರಮದಿಂದ ಯಶಸ್ಸು

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಉದ್ಯೋಗಾಕಾಂಕ್ಷಿಗಳಲ್ಲಿ ಕ್ರಿಯಾಶೀಲ ಮನೋಭಾವ, ಸ್ಪರ್ಧಾತ್ಮಕ ಮನಸ್ಸು ಹಾಗೂ ನಿರಂತರ ಪ್ರಯತ್ನ ಇದ್ದಲ್ಲಿ ಉದ್ಯೋಗ ಪಡೆದುಕೊಳ್ಳುವುದರ ಮೂಲಕ ಬದುಕು ರೂಪಿಸಿಕೊಳ್ಳಬಹುದು ಎಂದು ಡಿಸಿ ಪ್ರಶಾಂತ ಕುಮಾರ ಮಿಶ್ರಾ ಹೇಳಿದರು.

ಇಲ್ಲಿನ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ (ಸ್ವಾಯತ್ತ) ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಷನ್ ಸಹಯೋಗದೊಂದಿಗೆ ಸಂಜೀವಿನಿ-ಕೆಎಸ್‌ಆರ್‌ಎಲ್‌ಪಿಎಸ್ ಹಾಗೂ ಡಿಡಿಯುಜಿಕೆವೈ ಯೋಜನೆಯಡಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದರು. ಯುವ ಪೀಳಿಗೆಯು ಉದ್ಯೋಗ ಪಡೆದುಕೊಳ್ಳುವುದಷ್ಟೇ ಅಲ್ಲದೇ ಉದ್ಯಮ ಸ್ಥಾಪನೆಗೂ ಅಡಿಪಾಯ ಹಾಕಬೇಕು. ಈ ಮೂಲಕ ಇತರರಿಗೂ ಉದ್ಯೋಗ ನೀಡುವಂತವರಾಗಬೇಕು ಎಂದು ಆಶಿಸಿದರು.

ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್ ಮಾತನಾಡಿ, ಬದುಕಿನಲ್ಲಿ ಉತ್ತಮ ಸಾಧಕರಾಗಲು ಕಠಿಣ ಪರಿಶ್ರಮ, ಸಂವಹನ ಕಲೆ, ಭಾಷೆಯ ಮೇಲೆ ಉತ್ತಮ ಹಿಡಿತ ಸಾಧಿಸುವ ಗುಣ ಮೈಗೂಡಿಸಿಕೊಳ್ಳುವುದು ಅವಶ್ಯಕ. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸ್ಕಿಲ್ ಕನೆಕ್ಟ್ ಕುರಿತ ವ್ಯಾಪಕ ಪ್ರಚಾರ ಕೈಗೊಂಡು, ಅರಿವು ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಉದ್ಯೋಗ ಮೇಳದಲ್ಲಿ ಒಟ್ಟು 48 ಕಂಪನಿಗಳು ಭಾಗವಹಿಸಿದ್ದವು. ಮೇಳದಲ್ಲಿ ಒಟ್ಟು 2,749 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಅದರಲ್ಲಿ 1,146 ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದು, 281 ಅಭ್ಯರ್ಥಿಗಳು ಆಯ್ಕೆಗೊಂಡಿದ್ದಾರೆ. 551 ಅಭ್ಯರ್ಥಿಗಳನ್ನು ಕಾಯ್ದಿರಿಸಲಾಗಿದೆ.