ಜಿಲ್ಲೆ

ಮೂರ್ನಾಲ್ಕು ಜನ ಕಾಂಗ್ರೆಸ್ಸಿಗರು ಬಿಜೆಪಿಗೆ, ಸೋಮಶೇಖರರೆಡ್ಡಿ ಹೊಸ ಬಾಂಬ್

ಬಳ್ಳಾರಿ: ಬಳ್ಳಾರಿಯ ಮೂರ್ನಾಲ್ಕು ಜನ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರುತ್ತಾರೆ ಎಂದು ನಗರ ಶಾಸಕ ಜಿ.ಸೋಮಶೇಖರರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಇಲ್ಲಿನ ಕಾಂಗ್ರೆಸ್ ನಾಯಕರ ಜತೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಬಿಜೆಪಿಯ ಶಾಸಕರು ಕಾಂಗ್ರೆಸ್‌ಗೆ ಬರಲಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದರು. ಈಗ ಸಿನಿಮಾ ಆರಂಭವಾಗಿದೆ. ಮುಂದೆ ಬಹಳ ಇದೆ. ಯಾರು ಎಲ್ಲಿ ಹೋಗುತ್ತಾರೆ ಎಂಬುದು ಮುಂದೆ ತಿಳಿಯಲಿದೆ. ಕಾಂಗ್ರೆಸ್ ಪಕ್ಷ ಮುಳುಗುವ ಹಡಗು, ಆ ಪಕ್ಷಕ್ಕೆ ಯಾರು ಹೋಗುವುದಿಲ್ಲ. ಆದರೆ, ಕಾಂಗ್ರೆಸ್‌ನ ಮಾಜಿ ಶಾಸಕರೇ ಬಿಜೆಪಿಗೆ ಬರುತ್ತವೆ ಎಂದು ಬಿಜೆಪಿಯ ಕೆಲ ಶಾಸಕರನ್ನು ಸಂಪರ್ಕಿಸಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್‌ಗೆ ವಲಸೆ ಹೋದ ಗ್ರಾಮೀಣ ಶಾಸಕ ಬಿ.ನಾಗೇಂದ್ರರವರಿಗೆ ವಲಸೆ ಹೋಗುವುದರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನವೇ ಶಾಸಕ ನಾಗೇಂದ್ರ ಬಿಜೆಪಿಗೆ ಸೇರಲಿದ್ದಾರೆ ಎಂದರು.

ರಾಹುಲ್ ಕಾಲಿಟ್ಟರೆ ಬಿಜೆಪಿ ಜಯಭೇರಿ: ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆಯು ಜಿಲ್ಲೆಗೆ ಆಗಮಿಸುವುದರಿಂದ ಜಿಲ್ಲೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ. ಏಕೆಂದರೆ ರಾಹುಲ್ ಗಾಂಧಿರವರದು ಐರನ್ ಲೆಗ್ ಇದ್ದಂತೆ. ಇಲ್ಲಿ ಭಾರತ್ ಜೋಡೋ ಯಾತ್ರೆ ನಡೆಯುತ್ತಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ತೋಡೊ ಯಾತ್ರೆ ನಡೆಯುತ್ತಿದೆ ಎಂದು ವ್ಯಂಗವಾಡಿದರು.

ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಮತ್ತು ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಸರ್ಕಾರ ವಿವಿಧ ಅಭಿವೃದ್ಧಿ ಕಾರ್ಯ ಮಾಡುತ್ತಿದೆ. ಕಾಂಗ್ರೆಸ್ ಮುಖಂಡರು ಸಹಿಸಿಕೊಳ್ಳದೇ ಪೇಸಿಎಂ ಅಭಿಯಾನ ಮಾಡಿ, ರಾಜ್ಯಕ್ಕೆ ಅಪಮಾನ ಮಾಡುವ ಕೆಲಸ ಮಾಡುತ್ತಿದ್ದಾರೆ. ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅವರ ಅವಧಿಯಲ್ಲಿ ಎಷ್ಟೋಂದು ಸ್ಕ್ಯಾಮ್ ಮಾಡಿದ್ದಾರೆ. ಬೊಮ್ಮಾಯಿ ಅವರನ್ನು ಹೀಗೆ ಬಿಟ್ಟರೆ, ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ ಎಂಬ ಭಯದಿಂದ ಇಂತಹ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.