ಜಿಲ್ಲೆ

ಸಮಾಜದಲ್ಲಿ ಮಹಿಳೆಯರ ಕೊಡುಗೆ ಅನನ್ಯ

ಬಳ್ಳಾರಿ : ಸಮಾಜದ ಬೆಳವಣಿಗೆ ಹಾಗೂ ಅಭಿವೃದ್ಧಿಗೆ ಮಹಿಳೆಯರ ಕೊಡುಗೆ ಅನನ್ಯವಾಗಿದೆ ಎಂದು ಕಾಲೇಜು ಪ್ರಾಚಾರ್ಯ ಡಾ.ಮಲ್ಲಿಕಾರ್ಜುನ ಮೋಕ ಹೇಳಿದರು.

ತಾಲೂಕಿನ ತೆಕ್ಕಲಕೋಟೆ ಶ್ರೀಮತಿ ಹೊನ್ನೂರಮ್ಮ ದಿ.ಸಿದ್ದಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸ್ ಹಾಗೂ ಮಹಿಳಾ ಕುಂದು ಕೊರತೆ ಕೋಶದ ಸಹಯೋಗದೊಂದಿಗೆ ಶನಿವಾರ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದರು. ಕುಟುಂಬ ನಿರ್ವಹಣೆಯಲ್ಲಿಮಹಿಳೆಯರ ಪಾತ್ರ ದೊಡ್ಡದಿದೆ. ಹೀಗಾಗಿ ಮಹಿಳೆಯರು ಸಮಾಜ ಹಾಗೂ ಕುಟುಂಬದ ಕಣ್ಣಾಗಿದ್ದಾರೆ. ಪ್ರತಿಯೊಬ್ಬರೂ ಮಹಿಳೆಯರಿಗೆ ಗೌರವ ನೀಡಬೇಕು ಎಂದು ಹೇಳಿದರು.

ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಮಹೇಶ್ವರಿ ಮಾತನಾಡಿ, ಪ್ರತಿಯೊಬ್ಬ ಮಹಿಳೆಯರು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು. ಶಿಕ್ಷಣದಿಂದಲೇ ದೇಶದ ಅಭಿವೃದ್ಧಿ ಸಾಧ್ಯ. ಹೀಗಾಗಿ ಮಹಿಳೆಯರು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಹೇಳಿದರು.

ವಾಣಿಜ್ಯ ಶಾಸ್ತ್ರ ವಿಭಾಗ ಪ್ರಾಧ್ಯಾಪಕಿ ಆಶಾಲತಾ ಮಾತನಾಡಿ, ವಿದ್ಯಾರ್ಥಿನಿಯರು ಜೀವನದಲ್ಲಿ ಗುರಿ ಇಟ್ಟುಕೊಳ್ಳಬೇಕು.

ಗುರಿ ಸಾಧನೆಗೆ ಸತತ ಪ್ರಯತ್ನ ಮಾಡಬೇಕು. ಜೀವನದಲ್ಲಿ ಎದುರಾಗುವ ಕಷ್ಟಗಳನ್ನು ಪ್ರತಿಯೊಬ್ಬ ಮಹಿಳೆಯರು ಮೆಟ್ಟಿ ನಿಲ್ಲಬೇಕು. ಕಷ್ಟ ಬಂದಾಗ ಕುಗ್ಗಬಾರದು. ಸಂತೋಷ ಬಂದಾಗ ಹಿಗ್ಗಬಾರದು. ಸುಂದರ ಜೀವನ ನಡೆಸಬೇಕು ಎಂದು ಹೇಳಿದರು.

ಬಳಿಕ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಹೊರ ತಂದ ಪ್ರಾಯೋಗಿಕ ಪತ್ರಿಕೆಯನ್ನು ಸಹನಾ ಮಲ್ಲಿಕಾರ್ಜುನ ಮೋಕ ಬಿಡುಗಡೆಗೊಳಿಸಿದರು. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಾಧಕ ಮಹಿಳೆಯರನ್ನು ಸನ್ಮಾನಿಸಲಾಯಿತು. ಮಹಿಳಾ ದಿನಾಚರಣೆ ನಿಮಿತ್ತ ಕಾಲೇಜು ಆವರಣದಲ್ಲಿ ಸಸಿಗಳನ್ನು ನಡೆಸಲಾಯಿತು.