ಜಿಲ್ಲೆ

ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಜಿಲ್ಲೆಯ ಎಲ್ಲ ಅಧಿಕಾರಿಗಳ ಸಮನ್ವಯತೆಯಿಂದ ಬಾಲ್ಯ ವಿವಾಹ ಪ್ರಕರಣಗಳು ಶೂನ್ಯಕ್ಕೆ ತರಲು ಸಾಧ್ಯವಾಗಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ ಹೇಳಿದರು.

ನಗರದ ತಾಪಂ ಸಭಾಂಗಣದಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಹಯೋಗದೊಂದಿಗೆ ಬಾಲ್ಯವಿವಾಹ ನಿಷೇಧ ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆ ಅನುಷ್ಠಾನ ಕುರಿತು ಸರ್ಕಾರಿ ಮತ್ತು ಸರ್ಕಾರೇತರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಿಗೆ ಬುಧವಾರ ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಆದ್ದರಿಂದ ಎಲ್ಲ ಇಲಾಖೆಯ ಅಧಿಕಾರಿಗಳು ಒಗ್ಗೂಡಿ ಶ್ರಮಿಸಬೇಕಿದೆ. ಬಾಲ್ಯವಿವಾಹ ನಿಷೇಧಾಧಿಕಾರಿಗಳಾಗಿ ನಿಯೋಜನೆಗೊಂಡಿರುವ ಪ್ರಾಂಶುಪಾಲರು ತಮ್ಮ ವ್ಯಾಪ್ತಿಯಲ್ಲಿ ಇಲಾಖೆಗಳೊಂದಿಗೆ ಸಕ್ರಿಯವಾಗಿ ಭಾಗವಹಿಸಿ ಬಾಲ್ಯವಿವಾಹ ತಡೆಯಲು ಕ್ರಮವಹಿಸಬೇಕು. ಈ ಮೂಲಕ ಮಕ್ಕಳ ಹಕ್ಕುಗಳ ರಕ್ಷಣೆ, ಸಾಮಾಜಿಕ ನ್ಯಾಯಕ್ಕೆ ಮುಂದಾಗಬೇಕು ಎಂದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಾಲ್ಯವಿವಾಹಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಕಾಲೇಜು ವಿದ್ಯಾರ್ಥಿಗಳಿಗೆ ಬಾಲ್ಯವಿವಾಹ, ಪೋಕ್ಸೋ ಕಾಯ್ದೆ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ನಿರಂತರ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ರಮೇಶ್ ಕುಲಕರ್ಣಿ ಮಾತನಾಡಿ, ಮಕ್ಕಳ ಮೇಲಿನ ದೌರ್ಜನ್ಯ ತಡೆಯುವಲ್ಲಿ ಪ್ರಾಂಶುಪಾಲರ ಪಾತ್ರವಿದೆ. ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡುಬಂದರೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಹಾಗೂ ಪೊಲೀಸ್ ತುರ್ತು ಸಹಾಯವಾಣಿ 112ಗೆ ಕರೆ ಮಾಡಬೇಕು ಎಂದರು.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಸದಸ್ಯ ಡಾ.ಎಚ್.ಸಿ.ರಾಘವೇಂದ್ರ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಬಾಲ್ಯವಿವಾಹ ಮತ್ತು ಪೋಕ್ಸೋ ಕಾಯ್ದೆ ಅನುಷ್ಠಾನ ಕುರಿತು ಸವಿವರ ಮಾಹಿತಿ ಮಂಡಿಸಿದರು. ಕಾರ್ಯಾಗಾರದಲ್ಲಿ ಜಿಲ್ಲೆಯ ಆರವತ್ತು ಅಧಿಕ ಪ್ರಾಂಶುಪಾಲರು ಭಾಗವಹಿಸಿದ್ದರು.