- ಹೆಸರು ಸೇರ್ಪಡೆಗೆ ಇನ್ನೂ ಇದೆ ಅವಕಾಶ
- ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮಾಹಿತಿ
ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿ ಅಂತಿಮ ಮತದಾರರ ಪಟ್ಟಿ ಬಿಡುಗಡೆಯಾಗಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ 18,496 ಮತದಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾ ಚುನಾವಣಾಧಿಕಾರಿಯೂ ಆದ ಎಂ. ಮಹೇಶ್ವರ್ ರಾವ್, ಮತದಾರರಾಗಲು ಕಳೆದ ನವೆಂಬರ್‌ನಲ್ಲಿ ಕಾಲಾವಕಾಶ ನೀಡಿ ಕರಡು ಪಟ್ಟಿ ಪ್ರಕಟಿಸಲಾಗಿತ್ತು. ಇದಕ್ಕೆ ಸಂಬಂಧಿಸಿ ಹಕ್ಕು ಹಾಗೂ ಆಕ್ಷೇಪಣೆಗಳನ್ನು ಪರಿಶೀಲಿಸಿ ಈಗ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗಿದೆ ಎಂದರು.
ಜಿಬಿಎ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ವಾಸವಿರುವ ಶಿಕ್ಷಕರಿಗೆ ಹೆಸರು ನೋಂದಾಯಿಸಲು ಅವಕಾಶ ಮಾಡಿಕೊಡಲಾಗಿತ್ತು. ಇವರಲ್ಲಿ ಅರ್ಹತೆ ಹೊಂದಿದವರಿಗೆ ಮಾತ್ರ ಹೆಸರು ಸೇರ್ಪಡೆಗೆ ಅವಕಾಶ ಇದ್ದರೂ, ಕೆಲವರು ನೋಂದಣಿ ಮಾಡಿಕೊಂಡಿಲ್ಲ. ಈ ಬಗ್ಗೆ ಆಯಾ ವಿಧಾನಸಭಾ ಕ್ಷೇತ್ರ ಹಾಗೂ ತಾಲೂಕುಗಳಲ್ಲಿ ಸಮಸ್ಯೆ ಇದ್ದಲ್ಲಿ ಅಂತಹವುಗಳನ್ನು ಪರಿಹರಿಸಿಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಹೆಸರು ಸೇರ್ಪಡೆಗೆ ಅವಕಾಶ:
ಚುನಾವಣೆ ವಿಭಾಗದ ವಿಶೇಷ ಆಯುಕ್ತ ಆರ್. ರಾಮಚಂದ್ರನ್ ಮಾತನಾಡಿ, ಅಂತಿಮ ಪರಿಷ್ಕರಣೆಯಲ್ಲಿ ತಪ್ಪಿಹೋದ ಅರ್ಹ ಶಿಕ್ಷಕರು ಅಭ್ಯರ್ಥಿಗಳ ನಾಮನಿರ್ದೇಶನದ ಕೊನೆಯ ದಿನಾಂಕದವರೆಗೆ ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮತದಾರರ ನೋಂದಣಿ ಹಾಗೂ ನವೀಕರಣ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತದೆ ಎಂದರು.
ಸುದ್ದಿಗೋಷ್ಠಿಗೂ ಮುನ್ನ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಮುಖ್ಯ ಆಯುಕ್ತರು ಹಾಗೂ ವಿಶೇಷ ಆಯುಕ್ತರು, ಮತದಾರರ ಯಾದಿ ಸೇರಿ ಇನ್ನಿತರ ವಿಷಯಗಳ ಬಗ್ಗೆ ಕೆಲ ಅಂಶಗಳ ಬಗ್ಗೆ ಮಾಹಿತಿ ನೀಡಿದರು.
ಈ ವೇಳೆ ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ಸೇರಿ ಬೆಂಗಳೂರು ಕೇಂದ್ರ/ದಕ್ಷಿಣ/ಉತ್ತರ/ನಗರ ವಿಭಾಗಗಳ ಅಪರ ಜಿಲ್ಲಾ ಚುನಾವಣಾಧಿಕಾರಿಗಳು ಹಾಜರಿದ್ದರು.