- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಸೂಚನೆ
- ಮತ್ತೆ ಒತ್ತುವರಿ ಮಾಡಿದರೆ ದುಪ್ಪಟ್ಟು ದಂಡ
ವಿಜಯವಾಣಿ ಸುದ್ದಿಜಾಲ ಬೆಂಗಳೂರು
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಈವರೆಗೆ 964 ಕಿ.ಮೀ. ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸಲಾಗಿದ್ದು, ಬಾಕಿ ಇರುವ ಒತ್ತುವರಿಗಳನ್ನು ಮಾಸಾಂತ್ಯದೊಳಗೆ ತೆರವುಗೊಳಿಸುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ, ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಬಿಎ ವ್ಯಾಪ್ತಿಯಲ್ಲಿ "ಪಾದಚಾರಿ ಮಾರ್ಗಗಳ ಒತ್ತುವರಿ ತೆರವು', ತ್ಯಾಜ್ಯದಿಂದ ಸ್ವಾತಂತ್ರ್ಯ ಹಾಗೂ ಅನಾಥ ವಾಹನಗಳ ತೆರವು ಕಾರ್ಯಾಚರಣೆ ಕುರಿತು ಬುಧವಾರ ನಡೆದ ವರ್ಚುವಲ್ ಸಭೆಯಲ್ಲಿ ಮಾತನಾಡಿದರು. ನಗರದಲ್ಲಿ ಸುಮಾರು 1,500 ಕಿ.ಮೀ. ಉದ್ದದ ಆರ್ಟಿರಿಯಲ್ ಹಾಗೂ ಸಬ್-ಆರ್ಟಿರಿಯಲ್ ಪ್ರಮುಖ ರಸ್ತೆಗಳಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಬಾಕಿ ಇರುವ ಪಾದಚಾರಿ ಮಾರ್ಗಗಳ ಒತ್ತುವರಿಯನ್ನು ಇದೇ ತಿಂಗಳೊಳಗಾಗಿ ತೆರವುಗೊಳಿಸುವಂತೆ ನಿರ್ದೇಶನ ನೀಡಿದರು.
ಪಾದಚಾರಿ ಮಾರ್ಗದಲ್ಲಿ ಕಾರ್ಯಾಚರಣೆ ಪ್ರಾರಂಭವಾಗಿ 50 ದಿನಗಳಾಗಿದ್ದು, ಒತ್ತುವರಿ ತೆರವುಗೊಳಿಸಿರುವ ಸ್ಥಳಗಳಲ್ಲಿಯೇ ಬೀದಿಬದಿ ವ್ಯಾಪಾರಿಗಳು ಪುನ@ ಬಂದು ವ್ಯಾಪಾರ ಮುಂದುವರಿಸುತ್ತಿರುವುದು ಕಂಡುಬರುತ್ತಿದೆ. ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಂಡು, ಮತ್ತೆ ಒತ್ತುವರಿ ಮಾಡಿಕೊಂಡು ವ್ಯಾಪಾರ ನಡೆಸುವವರ ಸಾಮಗ್ರಿಗಳನ್ನು ಜಪ್ತಿ ಮಾಡಿ, ಅವರಿಗೆ ದುಪ್ಪಟ್ಟು ದಂಡ ವಿಧಿಸುವಂತೆ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಭೆಯಲ್ಲಿ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್, ಬಿಡಿಎ ಆಯುಕ್ತ ಮಣಿವಣ್ಣನ್, ಜಲಮಂಡಳಿ ಅಧ್ಯೆ ಡಾ.ಎನ್. ಮಂಜುಳಾ, ಪಾಲಿಕೆ ಆಯುಕ್ತರಾದ ಡಿ.ಎಸ್. ರಮೇಶ್, ಪಿ. ಸುನೀಲ್ ಕುಮಾರ್, ಕೆ.ಎನ್. ರಮೇಶ್ , ಜಿ. ಜಗದೀಶ್, ಡಾ.ಕೆ.ವಿ. ರಾಜೇಂದ್ರ, ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಸಿಇಒ ಕರೀಗೌಡ, ಬೆಂಗಳೂರು ನಗರ ಜಂಟಿ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ ಇದ್ದರು.
ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಯಾನ
ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ಇದುವರೆಗೆ 4,483 ಸ್ಥಳಗಳಲ್ಲಿ 1,02,002 ಮೆಟ್ರಿಕ್ ಟನ್ ಸಿ ಆ್ಯಂಡ್ ಡಿ ತ್ಯಾಜ್ಯವನ್ನು ಗುರುತಿಸಲಾಗಿದ್ದು, ಈವರೆಗೆ 1,810 ಸ್ಥಳಗಳಿಂದ 43,492 ಮೆಟ್ರಿಕ್ ಟನ್ ಸಿ ಆ್ಯಂಡ್ ಡಿ ತ್ಯಾಜ್ಯವನ್ನು ತೆರವುಗೊಳಿಸಲಾಗಿದೆ. ಈ ಕಾರ್ಯಾಚರಣೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಕೈಗೊಳ್ಳಬೇಕು. ಅಧಿಕಾರಿಗಳು ಸಮರ್ಪಕವಾಗಿ ಮೇಲ್ವಿಚಾರಣೆ ನಡೆಸಿ ಅಭಿಯಾನ ಯಶಸ್ವಿಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು.
ಅನಾಥ ವಾಹನಗಳ ತೆರವು ಕಾರ್ಯಾಚರಣೆ ಸಕ್ರಿಯವಾಗಿ ನಡೆಯಬೇಕು. ಆಯಾ ನಗರ ಪಾಲಿಕೆಗಳಲ್ಲಿ ಕಿರಿಯ ಆರೋಗ್ಯ ಪರಿವೀಕ್ಷಕರು, ಪೌರಕಾರ್ಮಿಕರ ಮೇಲ್ವಿಚಾರಕರು ಹಾಗೂ ಮಾರ್ಷಲ್ಗಳಿಗೆ ಅನಾಥ ವಾಹನಗಳಿಗೆ ನೋಟಿಸ್ ಅಂಟಿಸುವ ಜವಾಬ್ದಾರಿ ನೀಡಬೇಕು. ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೃಷ್ಣ ಬೈರೇಗೌಡ ಸೂಚಿಸಿದರು. ಸಮರ್ಪಕವಾಗಿ ನಿರ್ವಹಿಸದ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂಬುದಾಗಿ ಪಾಲಿಕೆಗಳಿಗೆ ಪತ್ರ ಬರೆಯುವಂತೆ ಮುಖ್ಯ ಆಯುಕ್ತರಿಗೆ ಸೂಚಿಸಿದ್ದಾರೆ.
ಆ.30 ಒಳಗಾಗಿ ಮೂರು ಕಾರ್ಯಾಚರಣೆಯನ್ನು ಪೂರ್ಣಗೊಳಿಸಬೇಕು. ಅದಾದ ಬಳಿಕ ನಾಗರಿಕರಿಗೆ ದೂರು ಸಲ್ಲಿಸಲು ಅವಕಾಶ ಕಲ್ಪಿಸಬೇಕು. ಕಾರ್ಯಗಳು ಸಮರ್ಪಕವಾಗಿ ನಡೆಯದಿರುವುದು ಗಮನಕ್ಕೆ ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು.