ಜಿಬಿಎ ಕೇಂದ್ರ ಕಚೇರಿಯಲ್ಲಿ ಎನ್.ಡಿ.ಎಂ.ಎಫ್. ಹಾಗೂ ವರ್ಲ್ಡ್ ಬ್ಯಾಂಕ್ ಅನುದಾನದಡಿ ಕೈಗೆತ್ತಿಕೊಂಡಿರುವ ಕಾಮಗಾರಿಗಳು, ವೈಟ್ ಟಾಪಿಂಗ್ ಮತ್ತು "ಬಫರ್ ರಸ್ತೆ' ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸೋಮವಾರ ನಡೆದ ವರ್ಚುವಲ್ ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್, ಜಿಬಿಎ ವಿಶೇಷ ಆಯುಕ್ತ ನಿತೀಶ್, ನಗರ ಪಾಲಿಕೆ ಆಯುಕ್ತ ಜಿ. ಜಗದೀಶ್ ಇದ್ದರು.
- ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಸೂಚನೆ
- 1,700 ಕೋಟಿ ವೆಚ್ಚದ ವೈಟ್ ಟಾಪಿಂಗ್ ಕಾಮಗಾರಿ ಶೇ.51 ಪೂರ್ಣ
ವಿಜಯವಾಣಿ ಸುದ್ದಿಜಾಲ ಬೆಂಗಳೂರು
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ರಾಷ್ಟ್ರೀಯ ವಿಪತ್ತು ನಿಧಿ (ಎನ್.ಡಿ.ಎಂ.ಎಫ್.) ಅನುದಾನದಡಿ ನಡೆಯುತ್ತಿರುವ ಕಾಮಗಾರಿಗಳನ್ನು ಡಿಸೆಂಬರ್ ವೇಳೆಗೆ ಪೂರ್ಣಗೊಳಿಸುವಂತೆ ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಬಿಎ ವ್ಯಾಪ್ತಿಯಲ್ಲಿ ಎನ್.ಡಿ.ಎಂ.ಎಫ್. ಹಾಗೂ ವರ್ಲ್ಡ್ ಬ್ಯಾಂಕ್ ಅನುದಾನದಡಿ ಕೈಗೆತ್ತಿಕೊಂಡಿರುವ ಕಾಮಗಾರಿಗಳು, ವೈಟ್ ಟಾಪಿಂಗ್ ಮತ್ತು "ಬಫರ್ ರಸ್ತೆ' ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸೋಮವಾರ ನಡೆದ ವರ್ಚುವಲ್ ಸಭೆಯಲ್ಲಿ ಮಾತನಾಡಿದರು.
ಎನ್.ಡಿ.ಎಂ.ಎಫ್. ಅಡಿ 237.25 ಕೋಟಿ ರೂ. ವೆಚ್ಚದಲ್ಲಿ ಒಟ್ಟು 20 ಪ್ಯಾಕೇಜ್ಗಳಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಈ ಪೈಕಿ ಶೇ.55 ಕಾಮಗಾರಿ ಪೂರ್ಣಗೊಂಡಿದೆ. ಬಾಕಿ ಇರುವ ಕಾಮಗಾರಿಗಳನ್ನು ಇದೇ ಡಿಸೆಂಬರ್ ಒಳಗಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವರ್ಲ್ಡ್ ಬ್ಯಾಂಕ್ ಅನುದಾನದ ಕಾಮಗಾರಿ:
ನಗರದಲ್ಲಿ 2,000 ಕೋಟಿ ರೂ. ವರ್ಲ್ಡ್ ಬ್ಯಾಂಕ್ ಅನುದಾನದಲ್ಲಿ ಒಟ್ಟು 16 ಪ್ಯಾಕೇಜ್ಗಳಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಪೈಕಿ 15 ಪ್ಯಾಕೇಜ್ಗಳಲ್ಲಿ ರಾಜಕಾಲುವೆಗಳ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಇದುವರೆಗೆ ಶೇ. 13 ಕಾಮಗಾರಿ ಪೂರ್ಣಗೊಂಡಿದೆ. ಬಾಕಿ ಇರುವ ಕಾಮಗಾರಿಗಳಿಗೆ ಮತ್ತಷ್ಟು ವೇಗ ನೀಡಿ, ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದರು.
ನಗರದಲ್ಲಿ 800 ಕೋಟಿ ರೂ. ಹಾಗೂ 900 ಕೋಟಿ ರೂ. ಸೇರಿ ಒಟ್ಟು 1,700 ಕೋಟಿ ರೂ. ವೆಚ್ಚದಲ್ಲಿ 120.69 ಕಿ.ಮೀ. ಉದ್ದದ ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಪ್ರಗತಿಯಲ್ಲಿದೆ. ಈ ಪೈಕಿ ಇದುವರೆಗೆ 61.43 ಕಿ.ಮೀ. ಉದ್ದದ ರಸ್ತೆಗಳಲ್ಲಿ, ಅಂದರೆ ಶೇ. 51 ಕಾಮಗಾರಿ ಪೂರ್ಣಗೊಂಡಿದೆ. ಬಾಕಿ ಇರುವ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ಬಿ.ಎಸ್. ಪ್ರಹ್ಲಾದ್, ಮುಖ್ಯ ಅಭಿಯಂತರರಾದ ಮಾದೇಶ್, ರಾಜೇಶ್ ಉಪಸ್ಥಿತರಿದ್ದರು.
ಬಫರ್ ರಸ್ತೆ ಕಾಮಗಾರಿಗೆ ವೇಗ ನೀಡಿ
ನಗರದಲ್ಲಿ ಬಫರ್ ರಸ್ತೆ ನಿಮಾರ್ಣ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಭೂಸ್ವಾಧಿನ ಸಮಸ್ಯೆ ಇರುವ ಕಡೆಗಳಲ್ಲಿ ಆಯಾ ನಗರ ಪಾಲಿಕೆಗಳ ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು. ಅಲ್ಲದೆ, ಅಗತ್ಯವಿರುವ ಜಾಗದ ಮಾಹಿತಿಯ ಪಟ್ಟಿಯನ್ನು ಕೂಡಲೇ ಸಲ್ಲಿಸುವಂತೆ ಅಧಿಕಾರಿಗಳಿಗೆ ಮಹೇಶ್ವರ ರಾವ್ ನಿರ್ದೇಶನ ನೀಡಿದರು.