white-topping-works 
ಬೆಂಗಳೂರು

ವೈಟ್ ಟಾಪಿಂಗ್ ಕಾಮಗಾರಿಗಳಿಗೆ ವೇಗ ನೀಡಲು ಸೂಚನೆ

ಆರ್.ತುಳಸಿಕುಮಾರ್

ಪ್ರಮುಖ ಮುಖ್ಯಾಂಶಗಳು

  • ಬೆಂಗಳೂರು ನಗರದಲ್ಲಿ ಸದ್ಯ ಶೇ.51 ಕೆಲಸ ಪೂರ್ಣ
  • ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಮಾಹಿತಿ
ಬೆಂಗಳೂರು: ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ವೈಟ್ ಟಾಪಿಂಗ್ ಕಾಮಗಾರಿಗಳಿಗೆ ವೇಗ ನೀಡಲು ಜಿಬಿಎ ಮುಖ್ಯ ಆಯುಕ್ತ ಎಂ.ಮಹೇಶ್ವರ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬೆಂಗಳೂರು ಸ್ಮಾರ್ಟ್ ಇನ್ಪ್ರಾಸ್ಟ್ರಕ್ಚರ್ ಲಿಮಿಟೆಡ್ (ಬಿ-ಸ್ಮೈಲ್) ಕೈಗೆತ್ತಿಕೊಂಡಿರುವ ವೈಟ್ ಟಾಪಿಂಗ್ ಹಾಗೂ ಬಫರ್ ರಸ್ತೆ ಕಾಮಗಾರಿಗಳಿಗೆ ಸಂಬಂಧಿಸಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸದ್ಯ ನಗರದಲ್ಲಿ 1,700 ಕೋಟಿ ರೂ. ವೆಚ್ಚದಲ್ಲಿ ವೈಟ್ ಟಾಪಿಂಗ್ ಕೆಲಸ ಕೈಗೆತ್ತಿಕೊಳ್ಳಲಾಗಿದೆ. ಈ ಎಲ್ಲ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು. ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಎದುರಾಗಿರುವ ಸಮಸ್ಯೆಗಳನ್ನು ಪರಿಶೀಲಿಸಿ, ಅವುಗಳನ್ನು ಪರಿಹರಿಸಿಕೊಂಡು ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಅರ್ಧದಷ್ಟು ಕಾಮಗಾರಿ ಪೂರ್ಣ:

ಪ್ರಸ್ತುತ 800 ಕೋಟಿ ರೂ. ವೆಚ್ಚದಲ್ಲಿ 58.60 ಕಿ.ಮೀ. ಉದ್ದದ ವೈಟ್ ಟಾಪಿಂಗ್ ರಸ್ತೆ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದು, ಇದರಲ್ಲಿ 28.18 ಕಿ.ಮೀ. ಉದ್ದದಷ್ಟು ಕಾಮಗಾರಿ ಪೂರ್ಣಗೊಂಡಿದೆ. ಈವರೆಗೆ ಶೇ. 56.1 ಪ್ರಗತಿ ಸಾಧಿಸಲಾಗಿದೆ. ಅಲ್ಲದೆ, 900 ಕೋಟಿ ರೂ. ವೆಚ್ಚದಲ್ಲಿ 66.28 ಕಿ.ಮೀ. ಉದ್ದದ ರಸ್ತೆಗೆ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಈ ಪೈಕಿ 26.40 ಕಿ.ಮೀ. ಕಾಮಗಾರಿ ಮುಗಿದಿದ್ದು, ಶೇ.46.43 ಪ್ರಗತಿ ಸಾಧಿಸಲಾಗಿದೆ. ಒಟ್ಟು 1,700 ಕೋಟಿ ರೂ. ವೆಚ್ವದ ಕಾಮಗಾರಿ ಪೈಕಿ ಶೇ.51 ಪ್ರಗತಿ ಸಾಧಿಸಿದ್ದು, ಬಾಕಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಮುಖ್ಯ ಆಯುಕ್ತರು ಸೂಚಿಸಿದರು.

ರಸ್ತೆಗಳ ಅಗಲೀಕರಣಕ್ಕೆ ಕ್ರಮವಹಿಸಿ:

ನಾಗವಾರ, ಟ್ಯಾನರಿ ರಸ್ತೆ, ದಿಣ್ಣೂರು ಹಾಗೂ ಹಾಲಿಡೇ ವಿಲೇಜ್ ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳುವ ಮುನ್ನ ರಸ್ತೆ ಅಗಲೀಕರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ಆಯಾ ಪಾಲಿಕೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಅಗಲೀಕರಣಕ್ಕೆ ಅಗತ್ಯವಿರುವ ಜಾಗಕ್ಕೆ ಟಿಡಿಆರ್ ನೀಡುವ ಮೂಲಕ ತ್ವರಿತಗತಿಯಲ್ಲಿ ರಸ್ತೆ ಅಗಲೀಕರಣ ಕಾರ್ಯವನ್ನು ಪೂರ್ಣಗೊಳಿಸಿ ಬಳಿಕ ಕಾಮಗಾರಿ ಕೈಗೊಳ್ಳುವಂತೆ ಮಹೇಶ್ವರ ರಾವ್ ಸೂಚಿಸಿದರು.
ಸಭೆಯಲ್ಲಿ ಮುಖ್ಯ ಅಭಿಯಂತರರಾದ ಮಾಲತಿ, ಮಾದೇಶ್, ಕಾರ್ಯಪಾಲಕ ಅಭಿಯಂತರರು ಸೇರಿ ಇತರ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಬಫರ್ ರಸ್ತೆ ಕಾಮಗಾರಿಗಳಿಗೆ ವೇಗ ನೀಡಿ:

ಜಿಬಿಎ ವ್ಯಾಪ್ತಿಯಲ್ಲಿ 68 ಕಿ.ಮೀ. ಉದ್ದದ ಬಫರ್ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಈ ಸಂಬಂಧ ನಡೆಯುತ್ತಿರುವ ಕಾಮಗಾರಿಗಳಿಗೆ ವೇಗ ನೀಡಿ, ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ರಸ್ತೆ ಗುಂಡಿಗಳನ್ನು ಮುಚ್ಚಿ:

ನಗರದಲ್ಲಿ ಎಲ್ಲೆಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಪ್ರಗತಿಯಲ್ಲಿದೆಯೋ, ಆ ರಸ್ತೆಗಳಲ್ಲಿ ಯಾವುದೇ ಗುಂಡಿಗಳು ಇಲ್ಲದಂತೆ ನಿಗಾ ವಹಿಸಬೇಕು. ಇನ್ನೂ ಕಾಮಗಾರಿ ಆರಂಭವಾಗದ ರಸ್ತೆಗಳಲ್ಲಿ ಗುಂಡಿಗಳನ್ನು ತಕ್ಷಣ ಮುಚ್ಚಿ, ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.