ಬೆಂಗಳೂರು:ರಾಜಧಾನಿಯ ಕೆರೆಗಳ ಸಂರಕ್ಷಣೆ ಹಾಗೂ ಮಾಲಿನ್ಯ ನಿಯಂತ್ರಣದ ವಿಚಾರದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ, ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗಾಂಧಿನಗರದ ವಳಗೇರಹಳ್ಳಿ ಕೆರೆ ಕಲುಷಿತಗೊಂಡಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಲೋಕಾಯುಕ್ತರು, ಕೆರೆಗೆ ಕೊಳಚೆ ನೀರು ಹರಿಯುವುದನ್ನು ತಕ್ಷಣ ತಡೆಗಟ್ಟುವುದು ಸೇರಿ ಕೆರೆಯ ಪುನಶ್ಚೇತನಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಸ್ಥಳೀಯ ನಿವಾಸಿಗಳು ಸಲ್ಲಿಸಿದ್ದ ದೂರಿನ ವಿಚಾರಣೆ ನಡೆಸಿದ ಲೋಕಾಯುಕ್ತರು, ಕೆರೆಯ ಮಾಲಿನ್ಯದಿಂದ ಸುತ್ತಮುತ್ತಲಿನ ನಿವಾಸಿಗಳಿಗೆ, ವಿಶೇಷವಾಗಿ ಹಿರಿಯ ನಾಗರಿಕರಿಗೆ ಆರೋಗ್ಯದ ಅಪಾಯ ಎದುರಾಗುತ್ತಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಕೆರೆಯ ದುಸ್ಥಿತಿಯನ್ನು ಸರಿಪಡಿಸುವಂತೆ ಹಲವು ಬಾರಿ ಸೂಚನೆ ನೀಡಿದ್ದರೂ ಅಧಿಕಾರಿಗಳು ಪರಿಣಾಮಕಾರಿ ಕ್ರಮ ಕೈಗೊಳ್ಳದಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.
ಸ್ಥಳೀಯ ನಿವಾಸಿಗಳ ಅಹವಾಲು ಹಾಗೂ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಕೆರೆ ವಿಭಾಗದ ಕಾರ್ಯಪಾಲಕ ಅಭಿಯಂತರರು ಸಲ್ಲಿಸಿದ ವರದಿಯನ್ನು ಪರಿಶೀಲಿಸಿದಾಗ, ಮಳೆಯ ನೀರಿನ ಜತೆಗೆ ಕೊಳಚೆ ನೀರೂ ಕೆರೆಗೆ ಸೇರುತ್ತಿರುವುದು ಗಮನಕ್ಕೆ ಬಂದಿದೆ. ಇದರಿಂದ ಕೆರೆಯ ನೀರು ಮತ್ತಷ್ಟು ಕಲುಷಿತಗೊಳ್ಳುತ್ತಿದೆ.
ಇನ್ನೊಂದೆಡೆ, ಹಿಂದಿನ ನಿರ್ದೇಶನಗಳಿದ್ದರೂ ಕೆರೆಯ ಸರ್ವೇ ಕಾರ್ಯವನ್ನೇ ಕೈಗೊಂಡಿಲ್ಲ. ಕೆರೆಯ ಗಡಿ ಗುರುತಿಸುವಿಕೆ, ಒತ್ತುವರಿ ಅಥವಾ ಇತರೆ ಸಮಸ್ಯೆಗಳ ಪರಿಶೀಲನೆಗೆ ಅಗತ್ಯ ಸರ್ವೇ ನಡೆಸದಿರುವ ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆಯೂ ಲೋಕಾಯುಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಕರಣದ ಗಂಭೀರತೆಯನ್ನು ಗಮನಿಸಿದ ಲೋಕಾಯುಕ್ತ ಬಿ.ಎಸ್.ಪಾಟೀಲ್ ಅವರು ಮುಖ್ಯ ಅಭಿಯಂತರರು, ಲೋಕಾಯುಕ್ತ ಪೊಲೀಸ್ ಅಧೀಕ್ಷಕರು-1 ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಂಬಂಧಪಟ್ಟ ಅಧಿಕಾರಿಗಳನ್ನು ಒಳಗೊಂಡ ಜಂಟಿ ಪರಿಶೀಲನಾ ಸಮಿತಿ ರಚಿಸಲು ಆದೇಶಿಸಿದ್ದಾರೆ. ಸಮೀತಿ ಸೂಕ್ತ ಶಿಫಾರಸುಗಳೊಂದಿಗೆ ನ.30ರ ಒಳಗೆ ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿದ್ದಾರೆ.
ಬಾಕಿ ಉಳಿದಿರುವ ಕೆರೆಯ ಸರ್ವೇ ಕಾರ್ಯವನ್ನು ತಕ್ಷಣ ಕೈಗೊಂಡು ಪೂರ್ಣಗೊಳಿಸಬೇಕು.
ಕೆರೆಗೆ ಹರಿದುಬರುತ್ತಿರುವ ಕೊಳಚೆ ನೀರನ್ನು ಸಂಪೂರ್ಣವಾಗಿ ತಡೆಗಟ್ಟಲು ಅಗತ್ಯ ವ್ಯವಸ್ಥೆ ಮಾಡಬೇಕು.
ಕೆರೆಯಲ್ಲಿ ಸಂಗ್ರಹವಾಗಿರುವ ತ್ಯಾಜ್ಯವನ್ನು ತೆರವುಗೊಳಿಸಿ ಸ್ವಚ್ಛಗೊಳಿಸಬೇಕು.
ಕೆರೆಯ ಮೂಲ ಸ್ವರೂಪ ಮತ್ತು ಪರಿಸರ ಸಮತೋಲನವನ್ನು ಮರಳಿ ಸ್ಥಾಪಿಸಲು ಅಗತ್ಯ ಪುನಶ್ಚೇತನ ಕಾರ್ಯಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಹಾಗೂ ಕಂದಾಯ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳು ಮುಂದಿನ ವಿಚಾರಣೆಗೆ ಖುದ್ದಾಗಿ ಹಾಜರಾಗಬೇಕು. ಕೈಗೊಂಡಿರುವ ಕ್ರಮಗಳ ಕುರಿತು ಅನುಪಾಲನಾ ವರದಿಗಳನ್ನು ಸಲ್ಲಿಸಬೇಕು ಎಂದು ಲೋಕಾಯುಕ್ತರು ಸೂಚಿಸಿದ್ದಾರೆ. ಅಲ್ಲದೆ, ಕರ್ನಾಟಕ ಉಚ್ಚ ನ್ಯಾಯಾಲಯ ಈ ಹಿಂದೆ ನೀಡಿದ್ದ ನಿರ್ದೇಶನಗಳಿದ್ದರೂ ಕಾಲಮಿತಿಯಲ್ಲಿ ಕ್ರಮ ಕೈಗೊಳ್ಳದಿರುವುದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಲಿಖಿತ ವಿವರಣೆ ಸಲ್ಲಿಸಬೇಕು ಎಂದು ಆದೇಶಿಸಿದ್ದಾರೆ. ಕೆರೆಯ ಮಾಲಿನ್ಯ ತಡೆಗಟ್ಟುವಲ್ಲಿ ಹಾಗೂ ಪುನಶ್ಚೇತನ ಕಾರ್ಯದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮತ್ತಷ್ಟು ನಿರ್ಲಕ್ಷ್ಯ ವಹಿಸಿದರೆ ಸುಮ್ಮನಿರುವುದಿಲ್ಲ ಎಂದು ಲೋಕಾಯುಕ್ತರು ಎಚ್ಚರಿಕೆ ನೀಡಿದ್ದಾರೆ. ಸಮಸ್ಯೆ ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳದ ಅಧಿಕಾರಿಗಳ ಕರ್ತವ್ಯಲೋಪಕ್ಕೆ ಜವಾಬ್ದಾರಿ ನಿಗದಿಪಡಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಡಿಸೆಂಬರ್ 22 ನಿಗದಿಪಡಿಸಲಾಗಿದ್ದು, ಅಷ್ಟರೊಳಗೆ ಸಂಬಂಧಪಟ್ಟ ಇಲಾಖೆಗಳು ಕೈಗೊಂಡ ಕ್ರಮಗಳ ಬಗ್ಗೆ ಸ್ಪಷ್ಟ ವರದಿ ಸಲ್ಲಿಸಬೇಕಿದೆ ಎಂದು ತಿಳಿಸಿದ್ದಾರೆ.