- ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ
- ಪ್ರಮುಖ ರಸ್ತೆಗಳ ಫುಟ್ಪಾತ್ ಒತ್ತುವರಿಮುಕ್ತಕ್ಕೆ ಕ್ರಮ
ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುತ್ತಿಲ್ಲ, ಬದಲಾಗಿ ಮುಖ್ಯರಸ್ತೆಗಳಿಂದ ಒಳರಸ್ತೆಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಈ ಪ್ರಕ್ರಿಯೆನ್ನು ವ್ಯಾಪಾರಿಗಳನ್ನು ಹೊರಹಾಕಲಾಗುತ್ತಿದೆ ಎಂದು ಭಾವಿಸಬಾರದು ಎಂದು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದ್ದಾರೆ.
ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ಕುರಿತು ಅಧಿಕಾರಿಗಳೊಂದಿಗೆ ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಫುಟ್‌ಪಾತ್‌ಗಳಿಂದ ಬೀದಿ ಬದಿ ವ್ಯಾಪಾರಿಗಳಷ್ಟೇ ಅಲ್ಲದೆ, ವಿವಿಧ ಅಡೆತಡೆಗಳು, ಅಕ್ರಮವಾಗಿ ನಿಲ್ಲಿಸಿರುವ ಪಾರ್ಕಿಂಗ್ ವಾಹನಗಳನ್ನೂ ತೆರವುಗೊಳಿಸಿ ನಾಗರಿಕರಿಗೆ ಸುಗಮ ಹಾಗೂ ವ್ಯವಸ್ಥಿತ ಪಾದಚಾರಿ ಮಾರ್ಗಗಳನ್ನು ನಿರ್ಮಿಸಬೇಕು ಎಂದು ಸೂಚಿಸಿದರು.
ನಗರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆಗೆ ನಾಗರಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಪ್ರಮುಖ ಆರ್ಟಿರಿಯಲ್/ಸಬ್ ಆರ್ಟಿರಿಯಲ್ ರಸ್ತೆಗಳನ್ನು ಹೊರತುಪಡಿಸಿ, ಉಳಿದ ವಾರ್ಡ್ ರಸ್ತೆಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಬೀದಿಬದಿ ವ್ಯಾಪಾರಿಗಳು ವ್ಯಾಪಾರ ನಡೆಸಲು ಅವಕಾಶ ಕಲ್ಪಿಸುವ ಕುರಿತು ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
"
ನಾವು ನಗರದ ಶೇ.20 ಪ್ರಮುಖ ರಸ್ತೆಗಳ ಫುಟ್‌ಪಾತ್‌ಗಳಲ್ಲಿನ ಒತ್ತುವರಿಯನ್ನು ಮಾತ್ರ ತೆರವುಗೊಳಿಸುತ್ತಿದ್ದೇವೆ. ಉಳಿದ ಶೇ.80 ರಸ್ತೆಗಳಲ್ಲಿ ವ್ಯಾಪಾರ ನಡೆಸಲು ಅವಕಾಶ ಇದೆ. ಆದರೆ, ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಂಚರಿಸುವ ಪ್ರಮುಖ ಪಾದಚಾರಿ ಮಾರ್ಗಗಳ ಮೇಲೆ ವ್ಯಾಪಾರ ನಡೆಸುವುದು ಸಾರ್ವಜನಿಕರ ಮೂಲಭೂತ ಹಕ್ಕಿಗೆ ಧಕ್ಕೆಯಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದ್ದು, ಆ ಹಕ್ಕನ್ನು ಸರ್ಕಾರವೂ ಉಲ್ಲಂಘಿಸಲು ಸಾಧ್ಯವಿಲ್ಲ.
- ಕೃಷ್ಣ ಬೈರೇಗೌಡ, ಸಚಿವ