ಬೆಂಗಳೂರು: ಪ್ರತಿಯೊಬ್ಬರಿಗೂ ಸಕಾಲದಲ್ಲಿ ಗುಣಮಟ್ಟದ ಚಿಕಿತ್ಸೆ ಲಭ್ಯವಾಗಬೇಕು. ಇಲಾಖೆಯ ಕಾರ್ಯಕ್ರಮಗಳು ಜನಸಾಮಾನ್ಯರಿಗೆ ಯಾವುದೇ ಅಡೆತಡೆಯಿಲ್ಲದೆ ತಲುಪಬೇಕು. ಮುಂದಿನ ದಿನಗಳಲ್ಲಿ ಎಲ್ಲ ಕಾರ್ಯಕ್ರಮಗಳನ್ನು ನಿಗದಿತ ಸಮಯದೊಳಗೆ ಜಾರಿಗೊಳಿಸಬೇಕು. ಜಿಲ್ಲೆಗಳಲ್ಲಿ ಯಾವುದೇ ಕೊರತೆಗಳಿದ್ದರೆ ತಕ್ಷಣ ಗಮನಕ್ಕೆ ತಂದು ಸರಿಪಡಿಸಿಕೊಳ್ಳಬೇಕು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಆರೋಗ್ಯ ಸೌಧದಲ್ಲಿ ಮಂಗಳವಾರ ರಾಜ್ಯದ ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳು (ಡಿಎಚ್ಒ), ಜಿಲ್ಲಾ ಶಸ್ತ್ರಚಿಕಿತ್ಸಕರು ಹಾಗೂ ವಿವಿಧ ಕಾರ್ಯಕ್ರಮಗಳ ಉಪನಿರ್ದೇಶಕರೊಂದಿಗೆ (ಡಿಡಿ) ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಇಲಾಖೆಯ ಕಾರ್ಯವೈಖರಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಆರೋಗ್ಯ ಇಲಾಖೆಯ ವಿವಿಧ ಯೋಜನೆಗಳ ಅನುಷ್ಠಾನ ಹಾಗೂ ಜಿಲ್ಲಾ ಮಟ್ಟದಲ್ಲಿ ಜನರಿಗೆ ಸಿಗುತ್ತಿರುವ ವೈದ್ಯಕೀಯ ಸೇವೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಆರೋಗ್ಯ ಕಾರ್ಯಕ್ರಮಗಳು ಯಾವ ಜಿಲ್ಲೆಯಲ್ಲಿ ಎಷ್ಟು ಪರಿಣಾಮಕಾರಿಯಾಗಿ ಜಾರಿಯಾಗಿದೆ ಎಂಬ ಬಗ್ಗೆ ಜಿಲ್ಲಾವಾರು ಮಾಹಿತಿ ಪಡೆದುಕೊಂಡರು. ಉತ್ತಮ ಕೆಲಸ ಮಾಡಿರುವ ಜಿಲ್ಲೆಗಳ ಮಾದರಿಗಳನ್ನು ಇತರ ಜಿಲ್ಲೆಗಳಲ್ಲೂ ಅಳವಡಿಸುವ ಬಗ್ಗೆ ಸಚಿವರು ಸೂಚನೆ ನೀಡಿದರು.
ಜಿಲ್ಲಾ ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು, ಬಹಳಷ್ಟು ಜನರ ಹಾಜರಾತಿ ಸರಿಯಾಗಿ ಆಗುತ್ತಿಲ್ಲ. ಕೆಲವೊಂದು ಕಡೆ ನಿಯಮ ಮತ್ತು ಸೇವೆಯಲ್ಲಿ ಸಮಸ್ಯೆ ಆಗುತ್ತಿದೆ. ಎಲ್ಲವನ್ನೂ ಒಂದು ವಾರದಲ್ಲಿ ಸರಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಇಲಾಖೆ ಸಿಬ್ಬಂದಿಯ ಸಮಯ ಪಾಲನೆಗೆ ಆ್ಯಪ್ ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿಗೊಳಿಸಲಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. - ಆರೋಗ್ಯ ಸಚಿವ ಯು.ಟಿ.ಖಾದರ್