- ಆರೋಗ್ಯ ಸಚಿವ ಯು.ಟಿ. ಖಾದರ್ ಭರವಸೆ
- ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ
ಬೆಂಗಳೂರು: ಬೇಕರಿ, ಕಾಂಡಿಮೆಂಟ್ಸ್ ಮತ್ತಿತರೆ ಅಂಗಡಿ ಮುಂಗಟ್ಟುಗಳಿಗೆ ಜಿಬಿಎ, ಆರೋಗ್ಯ ಮತ್ತು ಪೊಲೀಸ್ ಇಲಾಖೆಯಿಂದ ನೀಡುತ್ತಿರುವ ಕಿರುಕುಳ ತಪ್ಪಿಸಲು ಶೀಘ್ರದಲ್ಲೇ ಸಭೆ ಕರೆಯುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಭರವಸೆ ನೀಡಿದ್ದಾರೆ.
ಪ್ರತಿನಿತ್ಯ ಕಿರುಕುಳ ನೀಡುತ್ತಿರುವುದನ್ನು ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಆರೋಗ್ಯ ಮತ್ತು ಪೊಲೀಸ್ ಅಧಿಕಾರಿಗಳ ಕಿರುಕುಳ ಕುರಿತು ಸಭೆ ಕರೆದು ಚರ್ಚಿಸಿ ಸೂಕ್ತ ಪರಿಹಾರ ರೂಪಿಸುವುದಾಗಿ ಹೇಳಿದರು.
ರಾಜ್ಯ ಕಾರ್ಮಿಕ ಪರಿಷತ್ತಿನ ಅಧ್ಯಕ್ಷ ರವಿಶೆಟ್ಟಿ ಬೈಂದೂರ್ ಮಾತನಾಡಿ, ಸಣ್ಣ ಉದ್ದಿಮೆದಾರರ 27 ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಕಿರುಕುಳ ಮುಂದುವರಿದರೆ ಹೋರಾಟ ತೀವ್ರಗೊಳಿಸುತ್ತೇವೆ. ನಮ್ಮ ಸಮಸ್ಯೆಗಳಿಗೆ ಸರ್ಕಾರ ಕೂಡಲೇ ಸ್ಪಂದಿಸಬೇಕು ಎಂದರು.
ಸಣ್ಣ ವ್ಯಾಪಾರಿಗಳ ಮೇಲೆ ನಡೆಯುತ್ತಿರುವ ದಂಡದ ಹಾವಳಿ, ಅಧಿಕಾರಿಗಳ ಕಿರುಕುಳ, ಪರವಾನಗಿ ಸಮಸ್ಯೆಗಳು ಹಾಗೂ ಜೀವನೋಪಾಯಕ್ಕೆ ಧಕ್ಕೆಯಾಗುತ್ತಿದೆ. ವ್ಯಾಪಾರಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ನಿಮಾರ್ಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಬೇಕರಿ ಮಾಲೀಕರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.