ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಈ ವೇಳೆ ಕೈಯಲ್ಲಿ ಭಾರತದ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡಿದ್ದು ಎಲ್ಲರ ಗಮನ ಸೆಳೆಯಿತು.
ಬೆಂಗಳೂರಿನ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ಸಂಜೆ ನಡೆದ ಸಮಾರಂಭದಲ್ಲಿ ರಾಜ್ಯಪಾಲರು ಡಿಕೆಶಿ ಅವರಿಗೆ ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು. ಈ ಪ್ರಮಾಣವಚನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ರಾಷ್ಟ್ರೀಯ ನಾಯಕರು, ಅನೇಕ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಹಲವು ಗಣ್ಯರು ಸಾಕ್ಷಿಯಾದರು. ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಸಿಎಂ ಪಟ್ಟದ ಕುರಿತಾದ ಊಹಾಪೋಹಗಳಿಗೆ ತೆರೆ ಬಿದ್ದಂತಾಗಿದ್ದು, ರಾಜ್ಯವನ್ನು ಮುನ್ನಡೆಸಬೇಕೆಂಬ ಡಿ.ಕೆ. ಶಿವಕುಮಾರ್ ಅವರ ಸುದೀರ್ಘ ದಿನಗಳ ಕನಸು ಈಡೇರಿದಂತಾಗಿದೆ.