ಪ್ರಮುಖ ಮುಖ್ಯಾಂಶಗಳು
ರಾಮನಗರ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಡಾ. ಮಹಾಂತ ಶಿವಯೋಗಿ ಸ್ವಾಮೀಜಿಯವರು ಅತ್ಯಂತ ಮಹತ್ವದ ಕೊಡುಗೆ ನೀಡಿದ್ದು, ನಾಗರೀಕರು ಯಾವುದೇ ರೀತಿಯ ದುಶ್ಚಟಗಳು ಮತ್ತು ವ್ಯಸನಗಳಿಗೆ ದಾಸರಾಗಬಾರದೆಂಬುದರ ಕುರಿತು ಜಾಗೃತಿ ಮೂಡಿಸುವ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದರು ಎಂದು ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಬಣ್ಣಿಸಿದರು.
ಶನಿವಾರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ರಾಮನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಸಂಯುಕ್ತಾಶ್ರಯದಲ್ಲಿ ಡಾ. ಮಹಾಂತ ಶಿವಯೋಗಿ ಸ್ವಾಮೀಜಿ ಜಯಂತಿ ಅಂಗವಾಗಿ ಆಯೋಜಿಸಲಾಗಿದ್ದ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಿವಿಧ ಮಠಗಳ ಸ್ವಾಮೀಜಿಗಳು ಪೂಜೆ, ಪುನಸ್ಕಾರ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಸಮಾಜದ ಆಧ್ಯಾತ್ಮಿಕ ಬೆಳವಣಿಗೆಗೆ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಡಾ. ಮಹಾಂತ ಶಿವಯೋಗಿ ಸ್ವಾಮೀಜಿಯವರು ವ್ಯಸನಮುಕ್ತ ಸಮಾಜ ನಿರ್ಮಾಣದ ಗುರಿಯನ್ನು ಹೊಂದಿದ್ದರು. ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸಿದರು, ಸಮಾಜದಲ್ಲಿನ ದುಶ್ಚಟಗಳನ್ನು ತ್ಯಜಿಸುವಂತೆ ಅವರು ಪ್ರೇರೇಪಿಸಲು ತಮ್ಮ ಜೋಳಿಗೆಯನ್ನೇ ಒಡ್ಡಿ, ಅದರಲ್ಲಿ ಅಮಲು ಪದಾರ್ಥಗಳನ್ನು ಹಾಕಿಸಿಕೊಂಡು ಮತ್ತೆಂದೂ ದುಶ್ಚಟಗಳಿಗೆ ಬಲಿಯಾಗದಂತೆ ನಾಗರೀಕರಲ್ಲಿ ಮನವಿ ಮಾಡುತ್ತಿದ್ದರು ಎಂದು ಹೇಳಿದರು.
ಇತ್ತೀಚಿನ ದಿನಗಳಲ್ಲಿ ವಿವಿಧ ರೀತಿಯ ಮಾದಕ ಪದಾರ್ಥಗಳು ಲಭ್ಯವಾಗುತ್ತಿದ್ದು, ಅವು ಆರೋಗ್ಯದ ಜೊತೆಗೆ ವ್ಯಕ್ತಿಯ ಭವಿಷ್ಯವನ್ನೂ ಹಾಳುಮಾಡುತ್ತಿವೆ, ಅವುಗಳಿಂದ ದೂರವಿರಬೇಕು, ರಾಜ್ಯ ಸರ್ಕಾರ ಇದೀಗ ವಿವಿಧ ಇಲಾಖೆಗಳ ಸುಮಾರು 72 ಸಾವಿರಕ್ಕೂ ಹೆಚ್ಚಿನ ಹುದ್ದೆಗಳ ಭರ್ತಿಗೆ ಕ್ರಮವಹಿಸಿದೆ, ಆ ನೇಮಕಾತಿಗಳಿಗೆ ನಡೆಯುವ ವಿವಿಧ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳು ಸೇರಿದಂತೆ ಐಎಎಸ್, ಕೆಎಎಸ್ ಪರೀಕ್ಷೆಗಳಿಗೆ ಶ್ರಮವಹಿಸಿ ಓದುವ ಮೂಲಕ ನೇಮಕಾತಿ ಹೊಂದಿ ಉತ್ತಮ ಜೀವನ ನಡೆಸುವಂತೆ ಅವರು ತಿಳಿ ಹೇಳಿದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಶೇಖರ್ ಮಾತನಾಡಿ, ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಉತ್ತಮ ಅಭ್ಯಾಸಗಳನ್ನು ಬೆಳೆಸಿಕೊಳ್ಳುವುದು ಅಗತ್ಯವಾಗಿದೆ, ಇತ್ತೀಚಿನ ದಿನಗಳಲ್ಲಿ ಮೊಬೈಲ್‌ನ ಅತಿಯಾದ ಬಳಕೆ ಅಮೂಲ್ಯ ಸಮಯವನ್ನು ವ್ಯರ್ಥ ಮಾಡುತ್ತಿದೆ. ವಿದ್ಯಾರ್ಥಿಗಳು ತಮ್ಮ ಸಮಯವನ್ನು ಶಿಕ್ಷಣ, ಕ್ರೀಡೆ ಹಾಗೂ ಉತ್ತಮ ಚಟುವಟಿಕೆಗಳಿಗೆ ಮೀಸಲಿಡಬೇಕು ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಡಾ.ಕುಮಾರ್, ವ್ಯಸನಗಳ ದುಷ್ಪರಿಣಾಮಗಳಿಂದ ಎಚ್‌ಐವಿ, ಕ್ಯಾನ್ಸರ್ ಸೇರಿದಂತೆ ಹಲವು ರೀತಿಯ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ, ವ್ಯಸನದಿಂದ ಮುಕ್ತರಾಗಲು ಹಾಗೂ ಆರೋಗ್ಯ ಸಂಬAಧಿತ ಸಲಹೆಗಳನ್ನು ಪಡೆಯಲು ಇ-ಸಂಜೀವಿನಿ ಆಪ್ ಅನ್ನು ಡೌನ್‌ಲೋಡ್ ಮಾಡಿಕೊಂಡು ವೈದ್ಯರೊಂದಿಗೆ ನೇರವಾಗಿ ಸಂಪರ್ಕಿಸಬಹುದು, ಅಲ್ಲದೆ, 14416 ಸಹಾಯವಾಣಿಗೆ ಕರೆ ಮಾಡಿ ತಮ್ಮ ಸಮಸ್ಯೆಗಳನ್ನು ವೈದ್ಯರಿಗೆ ತಿಳಿಸುವ ಮೂಲಕ ಸೂಕ್ತ ಮಾರ್ಗದರ್ಶನ ಹಾಗೂ ಔಷಧಗಳನ್ನು ಪಡೆಯುವ ಅವಕಾಶವೂ ಇದೆ ಎಂದು ಹೇಳಿದರು.
ಮನೋವೈದ್ಯಕೀಯ ಸಾಮಾಜಿಕ ಕಾರ್ಯಕರ್ತೆ ಪದ್ಮರೇಖಾ ಎಸ್.,,
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಸಾವಿತ್ರಮ್ಮ ಎ.ಎಸ್. ಮಾತನಾಡಿದರು. ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.
ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ರವಿರಾಜ್ ಎಚ್. ಜಿ., ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ಶಿವಲಿಂಗೇಗೌಡ, ಕಲಾವಿದ ಶ್ರೀನಿವಾಸ್, ಸಹಾಯಕ ನಿರ್ದೇಶಕಿ ಹೇಮಾವತಿ ಜೆ. ಮುಂತಾದವರು ಇದ್ದರು.