CC road work begins 
ಬೆಂಗಳೂರು ಗ್ರಾಮಾಂತರ

ಜಿಲ್ಲೆಯ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಬದ್ಧ

ಶಿವರಾಜ.ಎಂ
ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ ಒತ್ತು ನೀಡಲು ಬದ್ಧನಿದ್ದೇನೆ ಎಂದು ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಮತ್ತು ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಭರವಸೆ ನೀಡಿದರು.
ದೊಡ್ಡಬಳ್ಳಾಪುರ ತಾಲೂಕು ಶಿರವಾರ ಗ್ರಾಮದಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ದೊಡ್ಡಬಳ್ಳಾಪುರ ತಾಲೂಕು ವ್ಯಾಪ್ತಿಯಲ್ಲಿ ನಿವೇಶನ ರಹಿತ ಬಡ ಕುಟುಂಬಗಳಿಗೆ 500 ನಿವೇಶನ ಹಂಚಿಕೆ ಸಂಬಂಧ ಕಾರ್ಯ ಪ್ರಗತಿಯಲ್ಲಿದ್ದು, ಇದೇ ತಿಂಗಳ ಅಂತ್ಯ ಅಥವಾ ಜೂನ್ ತಿಂಗಳಲ್ಲಿ ನಿವೇಶನ ವಿತರಣೆ ಮಾಡಲಾಗುವುದು ಎಂದರು. ನಮ್ಮ ಸರ್ಕಾರ ಹಸಿವಿನಿಂದ ಯಾರೊಬ್ಬರು ಮಲಗಬಾರದು ಎಂದು ಅನ್ನಭಾಗ್ಯ ಯೋಜನೆಯಡಿ ಪಡಿತರ ಅಕ್ಕಿ ವಿತರಿಸಿ ಹಸಿವು ನೀಗಿಸುವ ಕೆಲಸ ಮಾಡುತ್ತಿದೆ. ಪಂಚ ಗ್ಯಾರಂಟಿಗಳ ಮೂಲಕ ಸರ್ಕಾರ ಮಹತ್ತರ ಬದಲಾವಣೆಗೆ ಹೆಜ್ಜೆ ಇಟ್ಟಿದೆ ಎಂದು ಹೇಳಿದರು.
2028 ಕ್ಕೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ:
ಮುಂಬರುವ 2028 ರ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್‌ಗೆ ಬಹುಮತ ನೀಡಿ, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರಕ್ಕೆ ಅವಕಾಶ ನೀಡಲಿದ್ದಾರೆ ಎಂಬ ಭರವಸೆ ಇದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಮೂರು ವರ್ಷ ಪೂರೈಸಿದೆ ಇದು ಯಾವುದೇ ಅಡೆತಡೆಯಿಲ್ಲದೆ ಮುಂದುವರೆಯಲಿದೆ ಎಂದು ಹೇಳಿದರು. ರಾಜ್ಯ ಸರ್ಕಾರದ ಈ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಕಂಡು ಇನ್ನಿತರ ರಾಜ್ಯಗಳು ಇದನ್ನು ಮಾದರಿಯಾಗಿ ತೆಗೆದುಕೊಳ್ಳುತ್ತಿವೆ ಎಂದು ಹರ್ಷ ವ್ಯಕ್ತಪಡಿಸಿದರು. ಗ್ಯಾರಂಟಿ ಯೋಜನೆಯಡಿ ಅರ್ಹ ಲಾನುಭವಿಗಳಿಗೆ ಸಕಾಲದಲ್ಲಿ ಯೋಜನೆ ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ತಾಕೀತು ಮಾಡಿದರು. ಶಿರವಾರ ಗ್ರಾಮದಲ್ಲಿನ ಇನ್ನುಳಿದ ರಸ್ತೆ, ಚರಂಡಿ, ನಿವೇಶನ ಹಕ್ಕು ಪತ್ರ ಸಮಸ್ಯೆ, ಕನಕ ಭವನ ನಿರ್ಮಾಣ ಸೇರಿದಂತೆ ಸಾರ್ವಜನಿಕರ ಸಮಸ್ಯೆಗಳಿಗೆ ಹಂತ ಹಂತವಾಗಿ ಪರಿಹರಿಸಲಾಗುವುದು ಎಂದರು.
ಅದೇ ಗ್ರಾಮದಲ್ಲಿ ಪಡಿತರ ವಿತರಣೆ:
ಶಿರವಾರ ಗ್ರಾಮಸ್ಥರಿಗೆ ಅದೇ ಗ್ರಾಮದಲ್ಲಿ ಪಡಿತರ ಅಕ್ಕಿ ವಿತರಿಸಲಾಗುವುದು ಎಂದು ಸಚಿವರು ತಿಳಿಸಿದರು. ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸುವ ಜತೆಗೆ ಅವರ ಕೆಲಸ ಕಾರ್ಯಗಳು ಮಾಡಿಕೊಡಲು ಅಧಿಕಾರಿಗಳಿಗೆ ಸಚಿವರು ಸೂಚಿಸಿದರಲ್ಲದೇ, ತಮ್ಮ ಜಿಲ್ಲಾ ಪ್ರವಾಸದ ವೇಳೆ ಎಲ್ಲ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಉಪಸ್ಥಿತರಿರಬೇಕು. ಆಗ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಅನುಕೂಲವಾಗುತ್ತದೆ ಎಂದು ತಹಸೀಲ್ದಾರ್ ಅವರಿಗೆ ಸೂಚಿಸಿದರು.
ಗ್ಯಾರಂಟಿಗಳಿಂದ ಜನರ ಕಲ್ಯಾಣ:
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ರಾಜಣ್ಣ ಮಾತನಾಡಿ, ರಾಜ್ಯ ಸರ್ಕಾರ ಪಂಚ ಗ್ಯಾರಂಟಿಗಳ ಮೂಲಕ ಜನರ ಅಭಿವೃದ್ಧಿ ಹಾಗೂ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ ಎಂದು ಹೇಳಿದರು. ಜಿಲ್ಲೆಯ ತೂಬಗೆರೆ ಹೋಬಳಿ ವ್ಯಾಪ್ತಿಯಲ್ಲಿ ಸಚಿವರು 25 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿ ಅಷ್ಟೇ ಅಲ್ಲದೇ ಈ ಭಾಗಕ್ಕೆ ವೃಷಭಾವತಿ ನೀರು ತರಲಾಗುತ್ತಿದ್ದು, ಇದರಿಂದ ಜಮೀನುಗಳಲ್ಲಿನ ಕೊಳವೆಬಾವಿಗಳ ಅಂತರ್ಜಲ ಮಟ್ಟವನ್ನು ವೃದ್ಧಿಯಾಗಲು ಶ್ರಮಿಸುತ್ತಿದ್ದಾರೆ ಎಂದರು.