ಸಿಇಒ ಡಾ.ವಾಸಂತಿ ಅಮರ್ ತಾಕೀತು 
ಬೆಂಗಳೂರು ಗ್ರಾಮಾಂತರ

ಕರ್ತವ್ಯಕ್ಕೆ ಸರಿಯಾಗಿ ಹಾಜರಾಗಬೇಕು

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಪಂ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಬೇಕು ಜತೆಗೆ ಸಾರ್ವಜನಿಕರೊಂದಿಗೆ ಜನಸ್ನೇಹಿಯಾಗಿ ವರ್ತಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ.ವಾಸಂತಿ ಅಮರ್ ಸೂಚನೆ ನೀಡಿದರು.
ದೊಡ್ಡಬಳ್ಳಾಪುರ ತಾಲೂಕು ಹಾಡೋನಹಳ್ಳಿ ಗ್ರಾಮ ಪಂಚಾಯಿತಿಗೆ ಮಂಗಳವಾರ ದಿಢೀರ್ ಭೇಟಿ ನೀಡಿದ ಅವರು ಪಂಚಾಯಿತಿ ವ್ಯಾಪ್ತಿಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಪಂಚಾಯಿತಿ ಕಡತಗಳನ್ನು ಪರಿಶೀಲನೆ ನಡೆಸಿ ಮಾತನಾಡಿದರು. ಸಾರ್ವಜನಿಕ ಕೆಲಸಗಳನ್ನು ವಿನಾಕಾರಣ ವಿಳಂಭ ಮಾಡಬಾರದು, ಸಾರ್ವಜನಿಕರನ್ನು ಕಾಯಿಸುವುದು, ಮತ್ತೆ ಮತ್ತೆ ಪಂಚಾಯಿತಿ ಬರುವಂತ ಅನಿವಾರ್ಯತೆ ಸೃಷ್ಟಿಸುವುದು ಕಂಡುಬಂದರೆ ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚನೆ:
ಹಾಡೋನಹಳ್ಳಿ ಗ್ರಾಮದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗುಲಾಬಿ ತೋಟಕ್ಕೆ ಭೇಟಿ ನೀಡಿ ರೈತರೊಂದಿಗೆ ಸಮಾಲೋಚನೆ ನಡೆಸಿದರು. ನರೇಗಾ ಸಂಬಂಧಿಸಿದ ಕಡತಗಳನ್ನು ಪರಿಶೀಲಿಸಿ ಯೋಜನೆಯ ಮಾರ್ಗಸೂಚಿಗಳು ಹಾಗೂ ಚೆಕ್‌ಲಿಸ್ಟ್ ಪ್ರಕಾರ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಳಿಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೆರಮಗೊಂಡನಹಳ್ಳಿ ಶಾಲೆಗೆ ಭೇಟಿ ನೀಡಿ ಶಾಲೆಯಲ್ಲಿ ಶೌಚಗೃಹ ವ್ಯವಸ್ಥೆ, ತಡೆಗೋಡೆ ಮತ್ತಿತರ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.ನರೇಗಾ ಯೋಜನೆಯ ಕಾಮಗಾರಿಗಳನ್ನು ಪರಿಶೀಲನೆ ನಡೆಸಿ ಕಾಮಗಾರಿಗಳನ್ನು ನಿಯಮಾನುಸಾರ ಅನುಷ್ಠಾನಗೊಳಿಸಿ ಗುಣಮಟ್ಟ ಕಾಪಾಡಿಕೊಳ್ಳುವಂತೆ ನಿರ್ದೇಶನ ನೀಡಿದರು.
ಕಂದಾಯ ಪ್ರಗತಿ ಪರಿಶೀಲನೆ:
ಇದೇ ವೇಳೆ ಗ್ರಾಮ ಪಂಚಾಯಿತಿಯಲ್ಲಿ ಕಂದಾಯ ವಸೂಲಾತಿ ಪ್ರಗತಿ ಕುರಿತು ಮಾಹಿತಿ ಪಡೆದ ಸಿಇಒ ಸಿಬ್ಬಂದಿ ಹಾಜರಾತಿ ಪರಿಶೀಲಿಸಿದರು. ಪಿಡಿಒ ಹಾಗೂ ಸಿಬ್ಬಂದಿ ಸಾರ್ವಜನಿಕರೊಂದಿಗೆ ಉತ್ತಮ ಒಡನಾಟ ಹೊಂದಿರಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು. ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸುವಂತೆ ಸಿಬ್ಬಂದಿಗೆ ತಾಕೀತು ಮಾಡಿದರು. ಕುಡಿಯುವ ನೀರು, ರಸ್ತೆ, ವಸತಿ ಯೋಜನೆ, ಪಿಂಚಣಿ, ಉದ್ಯೋಗ ಖಾತ್ರಿ ಹಾಗೂ ಮೂಲಸೌಕರ್ಯಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಸ್ವೀಕರಿಸಿದರು. ಗ್ರಾಮ ಪಂಚಾಯಿತಿಯಲ್ಲಿ ಜಲ ಜೀವನ್ ಮೀಷನ್ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಿ ಎಂದು ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.