dc-meeting 
ಬೆಂಗಳೂರು ಗ್ರಾಮಾಂತರ

ದೌರ್ಜನ್ಯ ಪ್ರಕರಣಗಳಿಗೆ ತ್ವರಿತ ಕ್ರಮ ಬೇಕು

ಶಿವರಾಜ.ಎಂ
ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಮೇಲಿನ ಶೋಷಣೆ ಹಾಗೂ ದೌರ್ಜನ್ಯ ಪ್ರಕರಣಗಳು ನಡೆಯದಂತೆ ಕಾಲ ಕಾಲಕ್ಕೆ ತಾಲೂಕು ಮಟ್ಟದಲ್ಲಿ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಗಳನ್ನು ಕಡ್ಡಾಯವಾಗಿ ನಡೆಸಬೇಕು ಹಾಗೂ ದೌರ್ಜನ್ಯ ಪ್ರಕರಣಗಳ ತಪ್ಪಿತಸ್ಥರ ವಿರುದ್ಧ ತ್ವರಿತ ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧಾ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ತಾಲೂಕು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ 2ನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ, ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಸಭೆಯಲ್ಲಿ ಮಾತನಾಡಿದರು. ದೌರ್ಜನ್ಯ ಕಾಯ್ದೆಯಡಿಯಲ್ಲಿ ದಾಖಲಾಗುವ ಪ್ರಕರಣಗಳಿಗೆ ತ್ವರಿತವಾಗಿ ಸ್ಪಂದಿಸಿ, ಸೂಕ್ತ ನ್ಯಾಯ ದೊರಕಿಸಿಕೊಡುವುದರ ಜತೆಗೆ ನೊಂದವರಿಗೆ ವಿಳಂಬವಿಲ್ಲದೆ ಪರಿಹಾರಧನ ಮಂಜೂರಾತಿಗೆ ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು. ಗ್ರಾಮೀಣ ಪ್ರದೇಶಗಳ ಜನರಲ್ಲಿ ಪೊಲೀಸಸರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಾನೂನಿನ ಅರಿವು ಮೂಡಿಸುವ ಮೂಲಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಕಡಿಮೆ ಮಾಡುವಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು ಎಂದರು.
ಅನುದಾನ ಅರ್ಹರಿಗೆ ತಲುಪಿಸಿ:
ಸರ್ಕಾರವು ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಅಭಿವೃದ್ಧಿಗೆ ಇಲಾಖೆಗಳಿಗೆ ಒದಗಿಸಿದ ಅನುದಾನವನ್ನು ಸಂಪೂರ್ಣವಾಗಿ ಅರ್ಹರಿಗೆ ತಲುಪಿಸುವ ಮೂಲಕ ಅನುದಾನ ಪರಿಶಿಷ್ಟರ ಅಭಿವೃದ್ಧಿಗೆ ಸಮರ್ಪಕವಾಗಿ ಸದ್ಬಳಕೆ ಆಗಬೇಕು. ಸುಳ್ಳು ದೌರ್ಜನ್ಯ ಪ್ರಕರಣ ದಾಖಲಿಸುವ ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಡಿಸಿ ನಿರ್ದೇಶನ ನೀಡಿದರು. ಜಿಲ್ಲೆಯ ನಾಲ್ಕು ತಾಲೂಕು ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಆಸ್ಪತ್ರೆ ಬಂದ ರೋಗಿಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಆರೋಗ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು. ಹೊರಗುತ್ತಿಗೆ ಪೌರ ಕಾರ್ಮಿಕರಿಗೆ ಸರಿಯಾದ ಸಮಯಕ್ಕೆ ವೇತನವನ್ನು ಪಾವತಿಸಬೇಕು. ಕಸ ವಿಂಗಡಣೆ ಮಾಡಲು ಸುರಕ್ಷಿತ ಪರಿಕರಗಳನ್ನು ಒದಗಿಸಬೇಕು ಎಂದು ನಗರಾಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ವ್ಯಾಪ್ತಿಯ ವಿದ್ಯಾರ್ಥಿನಿಲಯ ಹಾಗೂ ಹಾಸ್ಟೆಲ್ಗಳಲ್ಲಿ 15 ದಿನಕ್ಕೊಮ್ಮೆ ಜಿಲ್ಲಾ ಮಟ್ಟದ ನೂಡಲ್ ಅಧಿಕಾರಿಗಳು ವಾಸ್ತವ್ಯ ಇದ್ದು, ಅಲ್ಲಿನ ಸ್ಥಿತಿಗತಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಕುರಿತು ವರದಿ ನೀಡಲು ತಿಳಿಸಿದರು. ಹಾಸ್ಟೆಲ್‌ಗಳಲ್ಲಿ ಮಕ್ಕಳಿಗೆ ನೀಡುವ ಆಹಾರ, ಕುಡಿಯಲು ಶುದ್ಧ ನೀರು ಪೂರೈಕೆ ವಿಷಯದಲ್ಲಿ ಅಧಿಕಾರಿಗಳು ನಿಗಾ ಇಡಬೇಕು. ಹಾಸ್ಟೆಲ್‌ಗಳಲ್ಲಿ ಎಲ್ಲ ಮೂಲಸೌಕರ್ಯಗಳನ್ನು ಪರಿಶೀಲಿಸಿ ಅಗತ್ಯವಿದ್ದರೆ ತಕ್ಷಣ ಸೌಲಭ್ಯ ಕಲ್ಪಿಸುವ ಕೆಲಸ ಮಾಡಬೇಕು. ಮಕ್ಕಳಿಗೆ ಹಾಸ್ಟೆಲ್‌ಗಳಲ್ಲಿ ವಿದ್ಯಾಭ್ಯಾಸ ಮಾಡುವಂತ ಉತ್ತಮ ವಾತಾವರಣ ನಿರ್ಮಿಸಿಕೊಡುವುದು ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ತಿಳಿಸಿದರು.
9 ದೌರ್ಜನ್ಯ ಪ್ರಕರಣ ದಾಖಲು:
ಜಿಲ್ಲೆಯಲ್ಲಿ ಏ.1 ರಿಂದ ಇಲ್ಲಿಯವರೆಗೂ 9 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಪರಿಹಾರ ಧನದ ಮಂಜೂರಾತಿ ವಿವರಗಳ ಪರಿಶೀಲನೆ ನಡೆಸಿ 9 ಪ್ರಕರಣಗಳಲ್ಲಿ ನೊಂದ ಸಂತ್ರಸ್ತರಿಗೆ 2.50 ಲಕ್ಷ ರೂ.ಗಳ ಪರಿಹಾರ ಧನವನ್ನು ಬಿಡುಗಡೆ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.