district hospital 
ಬೆಂಗಳೂರು ಗ್ರಾಮಾಂತರ

ಜಿಲ್ಲಾಸ್ಪತ್ರೆ ಕಾಮಗಾರಿ ಪುನಾರಂಭ ?

ಶಿವರಾಜ.ಎಂ
ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಗ್ರಾಮಾಂತರ ಜಿಲ್ಲೆಯಲ್ಲಿ ಜಿಲ್ಲಾಸ್ಪತ್ರೆ ನಿರ್ಮಾಣದ ಕನಸಿಗೆ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹಸಿರು ನಿಶಾನೆ ತೋರಿಸಿದ್ದು ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಬಾಕಿ ಹಣ ಬಿಡುಗಡೆ ಬಗ್ಗೆ ಪ್ರಸ್ತಾಪಿಸುವುದಾಗಿ ಭರವಸೆ ನೀಡಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕು ಸಿದ್ದನಾಯಕನಹಳ್ಳಿ ಬಳಿ 6 ಎಕರೆ ವಿಸ್ತೀರ್ಣದಲ್ಲಿ ಒಂದೂವರೆ ವರ್ಷದ ಹಿಂದೆ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಅರೋಗ್ಯ ಸಚಿವ ದಿನೇಶ್‌ಗುಂಡೂರಾವ್ ಹಾಗೂ ಶಾಸಕ ಧೀರಜ್‌ಮುನಿರಾಜು ನೇತೃತ್ವದಲ್ಲಿ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಲಾಯಿತು. ಪ್ರಾಥಮಿಕ ಹಂತದಲ್ಲಿ ಸುಮಾರು 10 ಕೋಟಿ ರೂ.ವೆಚ್ಚದಲ್ಲಿ ಕಾಮಗಾರಿ ನಡೆದರೂ ನಂತರದಲ್ಲಿ ನಾನಾ ಕಾರಣಗಳಿಂದ ಕಾಮಗಾರಿ ಸ್ಥಗಿತಗೊಂಡಿರುವುದು ಜಿಲ್ಲೆಯ ಜನರ ಬಹುದಿನಗಳ ಆಸೆಗಣ್ಣಿಗೆ ಮಣ್ಣೆರೆರಚಿದಂತಾಗಿದೆ. ಈ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ಜಿಲ್ಲಾ ಆಸ್ಪತ್ರೆ ಹೋರಾಟ ಸಮಿತಿ ಸದಸ್ಯರು ಮುಖ್ಯಮಂತ್ರಿಯಾದಿಯಾಗಿ ಸಚಿವರು ಸೇರಿ ಸಂಬಂಧಪಟ್ಟ ಎಲ್ಲ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸುತ್ತಾ ಬಂದಿದ್ದಾರೆ. ಇದೇ ಹಿನ್ನೆಲೆಯಲ್ಲಿ ಸೋಮವಾರ ದೇವನಹಳ್ಳಿಗೆ ಆಗಮಿಸಲಿದ್ದ ಉಸ್ತುವಾರಿ ಸಚಿವರ ಮಾಹಿತಿ ಪಡೆದ ಹೋರಾಟ ಸಮಿತಿ ಸದಸ್ಯರು ಮತ್ತೆ ಸಚಿವರಲ್ಲಿ ಜಿಲ್ಲಾಸ್ಪತ್ರೆ ಕಾಮಗಾರಿ ಪುನಾರಂಭದ ಬಗ್ಗೆ ಒತ್ತಾಯಿಸಿದ್ದು, ಸಚಿವರು ಶೀಘ್ರದಲ್ಲೇ ಹಣ ಬಿಡುಗಡೆ ಮಾಡಿ ಕಾಮಗಾರಿ ಆರಂಭಿಸುವ ಭರವಸೆ ನೀಡಿದ್ದಾರೆ.
197 ಕೋಟಿ ರೂ.ಅಂದಾಜು:
ಗ್ರಾಮಾಂತರ ಜಿಲ್ಲೆಯಲ್ಲಿ ಜಿಲ್ಲಾ ಕೇಂದ್ರವೂ ಇಲ್ಲ ಜಿಲ್ಲಾಸ್ಪತ್ರೆಯೂ ಇಲ್ಲ ಎಂಬ ಕೊರಗು ಈ ಹಿಂದಿನಿಂದಲೂ ಜಿಲ್ಲೆಯ ಜನರ ಅಸಮಾಧಾನಕ್ಕೆ ಕಾರಣವಾಗಿದೆ. ಬೆಂಗಳೂರಿನ ಗಡಿ ಹಂಚಿಕೊಂಡಿರುವ ಜಿಲ್ಲೆಯಾದರೂ ಸುಸಜ್ಜಿತ ಆಸ್ಪತ್ರೆ ಇಲ್ಲದೆ ನೆರೆಹೊರೆ ಜಿಲ್ಲೆಗಳಿಗೆ ಹೋಗಬೇಕಾದ ಪರಿಸ್ಥಿತಿ ಇದೆ. ಈ ಹಿನ್ನೆಲೆಯಲ್ಲಿ ಹೋರಾಟ ಸಮಿತಿ ಸಾಕಷ್ಟು ಹೋರಾಟಗಳನ್ನು ನಡೆಸುತ್ತಾ ಬಂದಿದ್ದು ಕಳೆದ ಎರಡು ವರ್ಷದ ಹಿಂದಿನ ಬಜೆಟ್‌ನಲ್ಲಿ ಜಿಲ್ಲಾಸ್ಪತ್ರೆ ೋಷಣೆಯಾಗಿತ್ತು. 197 ಕೋಟಿ ರೂ.ಅಂದಾಜು ವೆಚ್ಚದಲ್ಲಿ ನಿರ್ಮಾಣಕ್ಕೆ ಸರ್ಕಾರ ಗ್ರೀನ್‌ಸಿಗ್ನಲ್ ನೀಡಿತ್ತು. ಆದಾದ ಬಳಿಕ ನಾನಾ ಕಾರಣಗಳನ್ನು ನೀಡುತ್ತಾ ಬಂದಿದ್ದು ಕಾಮಗಾರಿ ನನೆಗುದಿಗೆ ಬಿದ್ದಿದೆ.
ಆತಂಕ ಬೇಡ:
ಜಿಲ್ಲಾಸ್ಪತ್ರೆ ಕಾಮಗಾರಿ ಅರಂಭವಾದ ಬಳಿಕ ಜಿಲ್ಲಾಸ್ಪತ್ರೆಯನ್ನು ದೇವನಹಳ್ಳಿಯಲ್ಲಿ ನಿರ್ಮಾಣ ಮಾಡಬೇಕು ಎಂಬ ಕೂಗು ಕೇಳಿಬಂದಿತ್ತು. ಉಸ್ತುವಾರಿ ಸಚಿವರು ಪ್ರತಿನಿಧಿಸುವ ಕ್ಷೇತ್ರವಾಗಿರುವುದರಿಂದ ಜಿಲ್ಲಾಸ್ಪತ್ರೆ ದೇವನಹಳ್ಳಿಗೆ ವರ್ಗಾವಣೆಯಾಗಲಿದೆ ಎಂಬ ಮಾತು ಹರಿದಾಡುತ್ತಿತ್ತು ಈ ಹಿನ್ನೆಲೆಯಲ್ಲಿ ದೊಡ್ಡಬಳ್ಳಾುರ ಜಿಲ್ಲಾಸ್ಪತ್ರೆ ಹೋರಾಟ ಸಮಿತಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ ಸಚಿವರ ಮೊರೆ ಹೋಗಿದ್ದರು. ಈ ಬಗ್ಗೆ ಯಾವುದೇ ಗೊಂದಲ ಬೇಡ ಜಿಲ್ಲಾಸ್ಪತ್ರೆ ದೊಡ್ಡಬಳ್ಳಾಪುರದಲ್ಲಿಯೇ ನಿರ್ಮಾಣಗೊಳ್ಳಲಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ ಎಂದು ಹೋರಾಟ ಸಮಿತಿಯ ಮುಖಂಡರು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರದ ಸಿದ್ದನಾಯಕನಹಳ್ಳಿ ಬಳಿ 6 ಎಕರೆ ವಿಸ್ತೀರ್ಣದಲ್ಲಿ ಒಂದೂವರೆ ವರ್ಷದ ಹಿಂದೆ ಜಿಲ್ಲಾಸ್ಪತ್ರೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿ ಆರಂಭಿಸಿದ್ದರು. ಆದರೆ ಇದ್ದಕ್ಕಿದ್ದಂತೆ ಕಾಮಗಾರಿ ನನೆಗುದಿಗೆ ಬಿದ್ದಿತ್ತು. ಜತೆಗೆ ಜಿಲ್ಲಾಸ್ಪತ್ರೆ ಬೇರೆಡೆ ಸ್ಥಳಾಂತರಗೊಳ್ಳಲಿದೆ ಎಂಬ ಸುದ್ದಿ ಹರಿದಾಡಿತ್ತು. ಈ ಹಿನ್ನೆಲೆಯಲ್ಲಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಶೀಘ್ರ ಜಿಲ್ಲಾಸ್ಪತ್ರೆ ಕಾಮಗಾರಿ ಆರಂಭಿಸುವುದರ ಜತೆಗೆ ಬೇರಡೆ ಸ್ಥಳಾಂತರ ಸಾಧ್ಯವಿಲ್ಲ ಎಂಬ ಭರವಸೆ ನೀಡಿದ್ದಾರೆ.
ಜನಪರ ಮಂಜು, ಜಿಲ್ಲಾಸ್ಪತ್ರೆ ಹೋರಾಟ ಸಮಿತಿ ದೊಡ್ಡಬಳ್ಳಾಪುರ