ಶಿವರಾಜ ಎಂ. ಬೆಂಗಳೂರು ಗ್ರಾಮಾಂತರ
ಎಚ್‌ಐವಿ ಸೋಂಕಿತ ಸಂಖ್ಯೆ ತಗ್ಗಿಸಲು ಜಿಲ್ಲಾ ಆರೋಗ್ಯ ಇಲಾಖೆ ಸಾಕಷ್ಟು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಇತ್ತೀಚಿನ ಅಂಕಿ ಅಂಶಗಳ ಪ್ರಕಾರ ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣ ಇಳಿಮುಖವಾಗಿದೆ ಎನ್ನಲಾಗಿದೆ. ಲೈಂಗಿಕ ಸುರಕ್ಷತೆಯ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಾಗಿರುವ ಜಾಗೃತಿಯೂ ಜಿಲ್ಲೆಯಲ್ಲಿ ಎಚ್‌ಐವಿ ಸೋಂಕಿತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಇಳಿಮುಖವಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ.
ಎಚ್‌ಐವಿ ಸೋಂಕಿನ ಬಗ್ಗೆ ಜಾಗೃತಿ ಮೂಡಿಸಲು ಕರಪತ್ರ ಹಂಚಿಕೆ, ಆಟೋ ಪ್ರಚಾರ, ಬೀದಿನಾಟಕಗಳು ಸೇರಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಜಿಲ್ಲೆಯಲ್ಲಿ ಎಲ್ಲ ಸಾರ್ವಜನಿಕ ಆಸ್ಪತ್ರೆ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಪ್ತ ಸಮಾಲೋಚನೆ ಹಾಗೂ ಪರೀಕ್ಷಾ ಸೌಲಭ್ಯ ಉಚಿತವಾಗಿದೆ.
ಜಿಲ್ಲೆಯಲ್ಲಿ 2007ರಿಂದ 2025ರ ಅಕ್ಟೋಬರ್‌ವರೆಗೆ 4659 ಪ್ರಕರಣಗಳು ಕಂಡುಬಂದಿವೆ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಈ ಪ್ರಕರಣಗಳನ್ನು ಶೂನ್ಯಕ್ಕೀಳಿಸುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದೆ. ಎಚ್‌ಐವಿ/ಏಡ್ಸ್ ಬಗ್ಗೆ ಮಾಹಿತಿಗಾಗಿ ಸಹಾಯವಾಣಿ 1097 ಕ್ಕೆ ಕರೆ ಮಾಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಪ್ರಮುಖ ಮುಂಜಾಗ್ರತಾ ಕ್ರಮಗಳೇನು:
ಅನೇಕರೊಂದಿಗೆ ಲೈಂಗಿಕ ಸಂಬಂಧ ಹೊಂದಬಾರದು, ಅಸುರಕ್ಷಿತ ಲೈಂಗಿಕ ಸಂಬಂಧದಿಂದ ದೂರವಿರಬೇಕು, ರಕ್ತದಾನ, ರಕ್ತ ಪಡೆಯುವಾಗ ಎಚ್‌ಐವಿ ಸೇರಿ ವಿವಿಧ ಸೋಂಕುಗಳು ಇಲ್ಲವೆಂಬುದನ್ನು ಖಚಿತಪಡಿಸಿಕೊಳ್ಳಬೇಕು, ಸಿರಂಜುಗಳು, ಸೂಜಿಗಳು, ಬ್ಲೆಡ್‌ಗಳನ್ನು ಮರುಬಳಕೆ ಮಾಡಬಾರದು ಎಂಬುದು ಆರೋಗ್ಯಾಧಿಕಾರಿಗಳ ಸಲಹೆಯಾಗಿದೆ. ಇನ್ನು ಎಚ್‌ಐವಿ ಸೋಂಕಿತರನ್ನು ಮುಟ್ಟುವುದರಿಂದ ಜತೆಯಲ್ಲಿ ಕುಳಿತುಕೊಳ್ಳುವುದರಿಂದ, ಶೌಚಗೃಹ ಬಳಸುವುದರಿಂದ ಸೋಂಕು ಹರಡುವುದಿಲ್ಲ ಎಂಬುದು ವೈದ್ಯರ ಮಾಹಿತಿಯಾಗಿದೆ.
ಸಾರ್ವಜನಿಕ ಆಸ್ಪತ್ರೆಗಳಲ್ಲಿ ಪರೀಕ್ಷೆ:
ಜಿಲ್ಲೆಯ ನಾಲ್ಕು ತಾಲೂಕುಗಳ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಎಚ್‌ಐವಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಅಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬಹುದು. ಬಹುತೇಕರಿಗೆ ಚಿಕಿತ್ಸೆ ಮುಂದುವರೆಸಿದ್ದು, ಆರೋಗ್ಯ ಇಲಾಖೆ ಸೋಂಕಿತರಿಗೆ ವಿವಿಧ ಕಾರ್ಯಕ್ರಮಗಳ ಮೂಲಕ ವೈದ್ಯಕೀಯ ಚಿಕಿತ್ಸೆ ಜತೆಗೆ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸವನ್ನು ಮಾಡುತ್ತಿದೆ.
ಜಿಲ್ಲೆಯಲ್ಲಿ ಎಚ್‌ಐವಿ ಸೋಂಕಿತರ ಸಂಖ್ಯೆ
(2007 ರಿಂದ 2025 ಅಕ್ಟೋಬರ್‌ವರೆಗೆ)
ತಾಲೂಕು ಪುರುಷರು ಸ್ತ್ರಿಯರು ಟಿಜಿ ಒಟ್ಟು
ದೊಡ್ಡಬಳ್ಳಾಪುರ 638 484 3 1125
ಎಚ್‌ಐವಿಯಿಂದ ದೂರವಿರಲು ತೆಗೆದುಕೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಬೀದಿ ನಾಟಕಗಳು, ಅರಿವು ಜಾಥಾ ಸೇರಿ ವಿವಿಧ ಾರ್ಯಕ್ರಮಗಳನ್ನು ರೂಪಿಸಿ ಏಡ್ಸ್ ಬಗ್ಗೆ ಜನರಲ್ಲಿ ಹೆಚ್ಚಿನ ಮಟ್ಟದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಜನರು ಸ್ಮಯಂ ಪ್ರೇರಿತರಾಗಿ ಎಚ್ಚರಿಕೆ ವಹಿಸಬೇಕು. ಜಿಲ್ಲೆಯಲ್ಲಿ ಪ್ರಕರಣಗಳನ್ನು ಶೂನ್ಯಕ್ಕಿಳಿಸಲು ಶ್ರಮಿಸಲಾಗುತ್ತಿದೆ.
ಲಕ್ಕ ಕೃಷ್ಣಾರೆಡ್ಡಿ ಡಿಎಚ್‌ಒ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಎಚ್‌ಐವಿ ಬಗ್ಗೆ ಜಾಗೃತಿ ಇರಬೇಕು, ಸೋಂಕು ತಗುಲದಂತೆ ಎಚ್ಚರಿಕೆ ವಹಿಸಬೇಕು, ಸೋಂಕಿತರು ಸಮರ್ಪಕ ಚಿಕಿತ್ಸೆ ಪಡೆಯುವುದರ ಜತೆಗೆ ಸಮಾಜದ ಮುಖ್ಯವಾಹಿನಿಯಲ್ಲಿ ಸಹಜ ಜೀವನ ನಡೆಸಬೇಕು. ಜಿಲ್ಲೆಯಲ್ಲಿ ಎಲ್ಲ ಸಾರ್ವಜನಿಕ ಆಸ್ಪತ್ರೆ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಪ್ತ ಸಮಾಲೋಚನೆ ಹಾಗೂ ಪರೀಕ್ಷಾ ಸೌಲಭ್ಯವಿದೆ.
ಡಾ.ನಾಗೇಶ್, ಜಿಲ್ಲಾ ಕ್ಷಯರೋಗ ಅಧಿಕಾರಿ.