kempegowda jayanti 
ಬೆಂಗಳೂರು ಗ್ರಾಮಾಂತರ

28 ಕ್ಷೇತ್ರಗಳಲ್ಲಿ ರಾಜ್ಯ ಮಟ್ಟದ ಕೆಂಪೇಗೌಡ ಜಯಂತಿ

ಶಿವರಾಜ.ಎಂ
ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ವಿಧಾನಸೌಧ ಹೊರತಾಗಿ, ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಮುಂದಿನ 28 ವರ್ಷಗಳ ಕಾಲ ಒಂದೊಂದು ಕ್ಷೇತ್ರದಲ್ಲಿ ರಾಜ್ಯಮಟ್ಟದಲ್ಲಿ ಆಚರಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು.
ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಬೃಹತ್ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ 517 ನೇ ಕೆಂಪೇಗೌಡ ಜಯಂತಿಗೆ ಚಾಲನೆ ನೀಡಿ ಮಾತನಾಡಿದರು. ಯಶವಂತಪುರದಲ್ಲಿ ಮೊದಲ ಕಾರ್ಯಕ್ರಮ ಮಾಡುತ್ತಿದ್ದು, ಮುಂದಿನ ವರ್ಷ ಶಾಸಕರೊಂದಿಗೆ ಚರ್ಚಿಸಿ ಬ್ಯಾಟರಾಯನಪುರ, ಯಲಹಂಕ, ಕೆ.ಆರ್.ಪುರ ಅಥವಾ ಬೇರೆ ಕ್ಷೇತ್ರಗಳಲ್ಲಿ ಜಯಂತಿ ಆಚರಿಸಲಾಗುವುದು. ಅದೇ ರೀತಿ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಾಗೂ ವಾರ್ಡ್ ಮಟ್ಟದಲ್ಲಿ ಈ ಕಾರ್ಯಕ್ರಮ ಆಚರಣೆಗೆ ಜಿಬಿಎ ವತಿಯಿಂದ ಆದೇಶ ಮಾಡಲಾಗಿದೆ ಎಂದು ತಿಳಿಸಿದರು.
ಮಾಗಡಿಯಲ್ಲಿ 10 ಎಕರೆ ಸ್ವಾಧೀನ:
ಕೆಂಪೇಗೌಡರ ಚಿಂತನೆ, ಆಚಾರ, ವಿಚಾರ ಎಲ್ಲವನ್ನು ಗಮನಲ್ಲಿಟ್ಟುಕೊಂಡು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮ್ಯಾರಥಾನ್ ಓಟ, ಬೆಂಗಳೂರಿನಲ್ಲಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ, ಮಾಗಡಿಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಕೆಂಪೇಗೌಡರ ಕೋಟೆ ಸಮಗ್ರ ಅಭಿವೃದ್ಧಿ ಕಾರ್ಯ ಹಮ್ಮಿಕೊಂಡಿದ್ದೇವೆ. ಮಾಗಡಿಯಲ್ಲಿರುವ ಕೆಂಪೇಗೌಡರ ಸಮಾಧಿ ಬಳಿ 10 ಎಕರೆ ಜಮೀನು ಸ್ವಾಧೀನ ಪ್ರಕ್ರಿಯೆ ಆರಂಭವಾಗಿದ್ದು, ಈಗಾಗಲೇ ಐದೂವರೆ ಎಕರೆ ಖರೀದಿ ಮಾಡಲಾಗಿದೆ ಎಂದು ಸಿಎಂ ಮಾಹಿತಿ ನೀಡಿದರು.
ಮುಂದಿನ ಪೀಳಿಗೆಗೆ ಕೆಂಪೇಗೌಡರ ಇತಿಹಾಸ ತಿಳಿಸುವ ಕಾರ್ಯಯೋಜನೆ:
ಬೆಂಗಳೂರಿಗೆ ಬರುವವರಿಗೆ ಹಾಗೂ ಮುಂದಿನ ಪೀಳಿಗೆಗೆ ಕೆಂಪೇಗೌಡರ ಗುರುತು ಪರಿಚಯಿಸಲು, ದೇವನಹಳ್ಳಿ ಹಾಗೂ ಏರ್‌ಪೋರ್ಟ್ ಹತ್ತಿರದ ಟ್ರಂಪೆಟ್ ವೃತ್ತದಲ್ಲಿ ಕ್ರಮ ಕೈಗೊಳ್ಳುವಂತೆ ವಿಮಾನ ನಿಲ್ದಾಣ ಪ್ರಾಧಿಕಾರದವರಿಗೆ ಸೂಚನೆ ನೀಡಿದ್ದೇವೆ. ಈ ಮೂಲಕ ಬೆಂಗಳೂರಿಗೆ ಬರುವವರು ಕೆಂಪೇಗೌಡರನ್ನು ಸ್ಮರಿಸುವಂತೆ ಮಾಡಲಾಗುವುದು ಎಂದು ಸಿಎಂ ತಿಳಿಸಿದರು. ಕಳೆದ ವರ್ಷ ಸುಮನಹಳ್ಳಿ ಬಳಿ ಕೆಂಪೇಗೌಡ ಭವನ ನಿರ್ಮಾಣಕ್ಕೆ 5 ಎಕರೆ ನೀಡಿ ಭೂಮಿ ಪೂಜೆ ಮಾಡಿದ್ದೆವು. ಅಲ್ಲಿ ಕೆಂಪೇಗೌಡರ ಹೆಸರಿನಲ್ಲಿ ಟೌನ್ ಪ್ಲಾನಿಂಗ್ ಕಾಲೇಜು ಮಾಡಲು ತಿಳಿಸಲಾಗಿದೆ. ಹಿಂದಿನ ಸರ್ಕಾರ ಈ ಪ್ರತಿಮೆಯನ್ನು ಚೆನ್ನಾಗಿ ಕಟ್ಟಿದೆ. ಆದರೆ ವಿಮಾನ ನಿಲ್ದಾಣಕ್ಕೆ ಬರುವವರಿಗೆ ಈ ಪ್ರತಿಮೆ ಕಾಣುತ್ತಿಲ್ಲ. ಇದರ ಬಗ್ಗೆ ಯಾವ ಕ್ರಮ ಕೈಗೊಳ್ಳಬಹುದು ಎಂದು ಸ್ವಾಮೀಜಿಗಳು ಹಾಗೂ ಕೃಷ್ಣ ಬೈರೇಗೌಡರೊಂದಿಗೆ ಚರ್ಚಿಸಿ ವಿಮಾನ ನಿಲ್ದಾಣ ಪ್ರಾಧಿಕಾರವರಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ಕೆಂಪೇಗೌಡರು ಎಲ್ಲ ವರ್ಗದ ಆಸ್ತಿ:
ಬೆಂಗಳೂರಿನಲ್ಲಿ 1.40 ಕೋಟಿ ಜನಸಂಖ್ಯೆ ಇದ್ದು, 1.30 ಕೋಟಿ ವಾಹನಗಳಿವೆ. ಮುಂದಿನ ವರ್ಷದಲ್ಲಿ ವಿಮಾನ ನಿಲ್ದಾಣಕ್ಕೆ ಮೆಟ್ರೋ ಸಂಪರ್ಕ ಸಾಧಿಸಲು ಮುಂದಾಗಿದ್ದೇವೆ. ಮುಂದಿನ 2 ವರ್ಷಗಳ ಅವಧಿಯಲ್ಲಿ 500 ಕಿ.ಮೀ ಉದ್ದದ ಮೆಟ್ರೋ ವಿಸ್ತರಣೆಗೆ ಆಲೋಚನೆ ಮಾಡಿದ್ದು, ಕೃಷ್ಣ ಬೈರೇಗೌಡರು ಈ ಬಗ್ಗೆ ಚಿಂತನೆ ಮಾಡಲಿದ್ದಾರೆ ಎಂದ ಸಿಎಂ ಈ ಕಾರ್ಯಕ್ರಮ ಒಂದು ಜಾತಿಗೆ ಸೀಮಿತವಲ್ಲ. ಇದು ಕೆಂಪೇಗೌಡರ ದೂರದೃಷ್ಟಿ, ಆಚಾರ, ವಿಚಾರಗಳ, ನೀತಿ ಬಿಂಬಿಸುವ ಮಹತ್ವದ ಕಾರ್ಯಕ್ರಮವಾಗಿದೆ. ಕೆಂಪೇಗೌಡರು ರಾಜ್ಯದ ಎಲ್ಲ ವರ್ಗದ ಆಸ್ತಿಯಾಗಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.