ಆನೇಕಲ್​ ತಾಲೂಕಿನ ಖಾಸಗಿ ಶಾಲೆಗಳ ಒಕ್ಕೂಟದಿಂದ ಅತ್ತಿಬೆಲೆಯ ಸೆಂಟ್​ ಫಿಲೋಮಿನಾಸ್​ ಸಂಸ್ಥೆ ಆವರಣದಲ್ಲಿ ಆಯೋಜಿಸಿದ್ದ 6ನೇ ವಾರ್ಷಿಕೋತ್ಸವ, ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ, ಆನೇಕಲ್​ ವಿಧಾನಸಭಾ ಕ್ಷೇತ್ರದ ಶಾಸಕ ಶಿವಣ್ಣ, ವಿಧಾನ ಪರಿಷತ್​ ಸದಸ್ಯರಾದ ಪುಟ್ಟಣ್ಣ, ರಾಮೋಜಿ ಗೌಡ, ಕಾಮ್ಸ್​ ಕಾರ್ಯದರ್ಶಿ ಶಶಿಕುಮಾರ್​, ಬೆಂಗಳೂರು ದಕ್ಷಿಣ ಡಿಡಿಪಿಐ ಜಯಪ್ರಕಾಶ್​ ಇತರರಿದ್ದರು.  
ಬೆಂಗಳೂರು ಗ್ರಾಮಾಂತರ

ಖಾಸಗಿ ಶಾಲಾ ಶಿಕ್ಷಕರಿಗೂ ಪ್ರಶಸ್ತಿ ನೀಡಲು ಚಿಂತನೆ

ಬೆಂಗಳೂರು ಗ್ರಾಮಾಂತರ ಡೆಸ್ಕ್

ಪ್ರಮುಖ ಮುಖ್ಯಾಂಶಗಳು

  • ಖಾಸಗಿ ಶಾಲಾ ಶಿಕ್ಷಕರಿಗೂ ಪ್ರಶಸ್ತಿ ನೀಡಲು ಚಿಂತನೆ
ಖಾಸಗಿ ಶಾಲಾ ಶಿಕ್ಷಕರಿಗೂ ಪ್ರಶಸ್ತಿ ನೀಡಲು ಚಿಂತನೆ
ಆನೇಕಲ್​: ಖಾಸಗಿ ಶಾಲಾ ಶಿಕ್ಷಕರನ್ನು ಸಹ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿಗೆ ಪರಿಗಣಿಸುವ ಕುರಿತು ಸರ್ಕಾರದಲ್ಲಿ ಗಂಭೀರ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಚರ್ಚಿಸಿ ಸೂಕ್ತ ತೀಮಾರ್ನ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ತಾಲೂಕಿನ ಖಾಸಗಿ ಶಾಲೆಗಳ ಒಕ್ಕೂಟದಿಂದ ಅತ್ತಿಬೆಲೆಯ ಸೆಂಟ್​ ಫಿಲೋಮಿನಾಸ್​ ಸಂಸ್ಥೆ ಆವರಣದಲ್ಲಿ ಆಯೋಜಿಸಿದ್ದ 6ನೇ ವಾರ್ಷಿಕೋತ್ಸವ, ಶಿಕ್ಷಕರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬೆಂಗಳೂರಿನಲ್ಲಿ ವಿಪರೀತ ಸಂಚಾರ ದಟ್ಟಣೆ ಹಿನ್ನೆಲೆಯಲ್ಲಿ ಶಾಲಾಸಮಯ ಬದಲಾವಣೆಗೆ ಒತ್ತಾಯವಿದ್ದು, ಈ ಕುರಿತು ವಿವಿಧ ಇಲಾಖೆಗಳೊಂದಿಗೆ ಸಮಾಲೋಚಿಸಿ ತೀಮಾರ್ನ ಕೈಗೊಳ್ಳಲಾಗುವುದು ಎಂದ ಸಚಿವರು, ಖಾಸಗಿ ಶಾಲೆಗಳ ಆರ್​ಆರ್​ ನವೀಕರಣ ಹಾಗೂ ಬೆಂಗಳೂರು ನಗರದಲ್ಲಿ ಸರ್ಕಾರಿ ನೌಕರರಿಗೆ ನೀಡುತ್ತಿರುವ ಮನೆ ಬಾಡಿಗೆ ಭತ್ಯೆಯನ್ನು (ಎಚ್​ಆರ್​ಎ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರಿಗೂ ವಿಸ್ತರಿಸುವಂತೆ ವಿಧಾನ ಪರಿಷತ್​ ಸದಸ್ಯ ಪುಟ್ಟಣ್ಣ ನೇತೃತ್ವದ ಸಮಿತಿ ಶಿಫಾರಸು ಮಾಡಿದ್ದು, ಇದರ ಬಗ್ಗೆಯೂ ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಖಾಸಗಿ ಶಾಲೆಗಳು ಹಣ ಪಾವತಿಸಿ ಸರ್ಕಾರಿ ಪಠ್ಯ ಪುಸ್ತಕ ಪಡೆದುಕೊಳ್ಳುವ ಕುರಿತ ಮನವಿಯನ್ನೂ ಪರಿಶೀಲಿಸಲಾಗುವುದು ಎಂದರು.
ಸರ್ಕಾರಿ ಶಾಲೆಗಳ ಬಲವರ್ಧನೆಗೆ ಜಾರಿಗೊಳಿಸಿದ ಅಕ್ಷಯ ಯೋಜನೆಯಡಿ ಪ್ರತಿದಿನ ಶಾಲೆಗೆ ಹಾಜರಾಗುವ ಪ್ರತಿ ಮಗುವಿಗೂ ಒಂದು ರೂಪಾಯಿ ಪ್ರೋತ್ಸಾಹ ಧನ ನೀಡುವ ಮೂಲಕ ಮಕ್ಕಳನ್ನು ಶಾಲೆಯತ್ತ ಆಕರ್ಷಿಸಲಾಗಿತ್ತು ಎಂದರು.
ವಿಧಾನ ಪರಿಷತ್​ ಸದಸ್ಯ ಪುಟ್ಟಣ್ಣ ಮಾತನಾಡಿ, ಮಧು ಬಂಗಾರಪ್ಪ ಶಿಕ್ಷಣ ಸಚಿವರಾಗಿ ಕ್ರಾಂತಿಕಾರಿ ಬದಲಾವಣೆ ತಂದಿದ್ದು, ವಿದ್ಯಾರ್ಥಿಗಳ ಫಲಿತಾಂಶದಲ್ಲೂ ಗಣನೀಯ ಪ್ರಗತಿ ಕಂಡುಬಂದಿದೆ. ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅನುತ್ತೀರ್ಣರಾಗುವ ವಿದ್ಯಾರ್ಥಿಗಳ ಸಂಖ್ಯೆ ಇಳಿಕೆಯಾಗಿರುವುದು ಉತ್ತಮ ಬೆಳವಣಿಗೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಖಾಸಗಿ ಶಾಲೆಗಳ ಪ್ರಥಮ ಮಾನ್ಯತೆ ಹಾಗೂ ನವೀಕರಣ ನಿಯಮಗಳನ್ನು ಸಡಿಲಿಸುವ ಕುರಿತು ವಿಶೇಷ ಸದನ ಸಮಿತಿ ನೀಡಿರುವ ಮಧ್ಯಂತರ ವರದಿಯ ಶಿಫಾರಸು ಕೂಡಲೇ ಜಾರಿಗೆ ತರಬೇಕು ಎಂದು ಸಚಿವರಿಗೆ ಪುಟ್ಟಣ್ಣ ಮನವಿಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸಮಿತಿ ಶಿಫಾರಸುಗಳನ್ನು ಇಲಾಖೆಗೆ ಕಳುಹಿಸಲಾಗಿದ್ದು, ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಆನೇಕಲ್​ ವಿಧಾನಸಭಾ ಕ್ಷೇತ್ರದ ಶಾಸಕ ಶಿವಣ್ಣ, ವಿಧಾನ ಪರಿಷತ್​ ಸದಸ್ಯರಾದ ಪುಟ್ಟಣ್ಣ, ರಾಮೋಜಿ ಗೌಡ, ಕಾಮ್ಸ್​ ಕಾರ್ಯದರ್ಶಿ ಶಶಿಕುಮಾರ್​, ಬೆಂಗಳೂರು ದಕ್ಷಿಣ ಡಿಡಿಪಿಐ ಜಯಪ್ರಕಾಶ್​, ಖಾಸಗಿ ಶಾಲೆಗಳ ಒಕ್ಕೂಟದ ಪದಾಧಿಕಾರಿಗಳು, ಶಿಕ್ಷಕರು ಇದ್ದರು.
ಆನೇಕಲ್​ ಪ್ರತಿಭಾ ಪುರಸ್ಕಾರ&12&2