World Day Against Child Labor
ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಪ್ರತಿ ವರ್ಷ ಜೂ.12 ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಿಸಲಾಗುತ್ತಿದ್ದು, ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್.ಅನುರಾಧಾ ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿಯ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು 2002 ರಲ್ಲಿ ಜೂ.12 ದಿನವನ್ನು ವಿಶ್ವ ಬಾಲಕಾರ್ಮಿಕ ವಿರೋಧಿ ದಿನ ಎಂದು ಘೋಷಣೆ ಮಾಡಿದೆ, ಅಂದಿನಿಂದ ಪ್ರತಿ ವರ್ಷಜೂ.12 ರಂದು ವಿಶ್ವ ಬಾಲಕಾರ್ಮಿಕ ವಿರೋಧಿ ದಿನ ಆಚರಿಸಲಾಗುತ್ತಿದೆ. ಬಾಲಕಾರ್ಮಿಕತೆಗೆ ರೆಡ್‌ಕಾರ್ಡ್, ಮಕ್ಕಳಿಗೆ ನ್ಯಾಯಯುತ ಬಾಲ್ಯ, ವಯಸ್ಕರಿಗೆ ಘನತೆಯ ಕೆಲಸ ಎಂಬುದು ಈ ವರ್ಷದ ಘೋಷವಾಕ್ಯ ಎಂದು ಹೇಳಿದರು. ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯನ್ನು ಜಿಲ್ಲಾಮಟ್ಟದಲ್ಲಿ ಆಚರಿಸಲು ತೀರ್ಮಾನಿಸಲಾಗಿದೆ. ಅಲ್ಲಿ ಸಾಕಷ್ಟು ಕೈಗಾರಿಕೆಗಳು, ಕಾರ್ಮಿಕರು ಇರುವುದರಿಂದ ಅಂದು ಜಾಗೃತಿ ಜಾಥಾ ನಡೆಯಲಿದ್ದು ಕಾರ್ಮಿಕರಿಗೆ, ಸಾರ್ವಜನಿಕರಿಗೆ ಅರಿವು ಮೂಡಿಸಲಾಗುವುದು ಎಂದರು.
ವಿದ್ಯಾರ್ಥಿಗಳಿಗೆ ಟಿ-ಶರ್ಟ್ ವಿತರಣೆ:
ಜಾಥಾ ಕಾರ್ಯಕ್ರಮದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಲಿದ್ದು ಅವರಿಗೆ ಟಿ-ಶರ್ಟ್ ಮತ್ತು ಟೋಪಿ ವಿತರಣೆ ಹಾಗೂ ಕಾರ್ಯಕ್ರಮಕ್ಕೆ ಲಘು ಉಪಹಾರದ ವ್ಯವಸ್ಥೆ ಸೇರಿ ಅಗತ್ಯ ಸಿದ್ಧತೆ ಕೈಗೊಳ್ಳಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಾದ್ಯಂತ ಕೈಗಾರಿಕೆ, ಕಾರ್ಖಾನೆ, ವಿವಿಧ ವಾಣಿಜ್ಯ ಸಂಸ್ಥೆಗಳ ಮೇಲೆ ಅಧಿಕಾರಿಗಳು ಜಂಟಿ ದಾಳಿ ನಡೆಸಿ 28 ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ. ರಕ್ಷಿಸಲ್ಪಟ ಬಾಲ ಹಾಗೂ ಕಿಶೋರ ಕಾರ್ಮಿಕರಿಗೆ ಪುನರ್ವಸತಿ ಒದಗಿಸಲಾಗಿ ಮಕ್ಕಳ ಶಿಕ್ಷಣ, ಕುಟುಂಬ ನಿರ್ವಹಣೆ, ಜತೆಗೆ ಮೂಲಸೌಕರ್ಯಗಳನ್ನು ಒದಗಿಸಿ ಅವರ ಜೀವನ ಸುಧಾರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ತಿಳಿಸಿದರು.
ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು 18 ವರ್ಷದೊಳಗಿನ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಕೆಲಸಕ್ಕೆ ನೇಮಿಸಿ ಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಮತ್ತು ಪೊಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ 112 ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಕಾರ್ಮಿಕ ಅಧಿಕಾರಿ ಮುಕುಂದ ತಿಳಿಸಿದರು.