Constitution Day Celebration 
ಬೆಂಗಳೂರು ಗ್ರಾಮಾಂತರ

ಸಂವಿಧಾನದ ಆಶಯಗಳಿಗೆ ಧ್ವನಿಯಾಗೋಣ-

Constitution Day Celebration

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ

ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಿದ್ದು, ನಾವೆಲ್ಲರೂ ಸಂವಿಧಾನದ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುಂದೆ ಸಾಗಬೇಕು ಎಲ್ಲರೂ ಸಂವಿಧಾನದ ಆಶಯಗಳಿಗೆ ಧ್ವನಿಯಾಗೋಣ ಎಂದು ಜಿಲ್ಲಾಧಿಕಾರಿ ಡಾ. ಕೆ. ಎನ್​ ಅನುರಾಧಾ ಹೇಳಿದರು.

ಸಂವಿಧಾನ ದಿನಾಚರಣೆಯ ಅಂಗವಾಗಿ ಗುರುವಾರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಾ. ಬಿ.ಆರ್​. ಅಂಬೇಡ್ಕರ್​ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಸಂವಿಧಾನ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು. ಸಂವಿಧಾನ ದಿನಾಚರಣೆ ಕೇವಲ ಆಚರಣೆ, ಭಾಷಣ ಹಾಗೂ ಕಾರ್ಯಕ್ರಮಗಳಿಗೆ ಸೀಮಿತವಾಗಬಾರದು. ಸಂವಿಧಾನವು ವ್ಯಕ್ತಿ ಅಥವಾ ಪಕ್ಷಕ್ಕೆ ಅನ್ವಯಿಸುವುದಲ್ಲ, ಎಲ್ಲರ ಹಕ್ಕು, ಸಂವಿಧಾನದ ಆಶಯಗಳನ್ನು ಸರಿಯಾಗಿ ಅರ್ಥಮಾಡಿಕೊಂಡು ಅವುಗಳನ್ನು ನಮ್ಮ ಆಲೋಚನೆ, ನಡವಳಿಕೆ ಮತ್ತು ಕಾರ್ಯಗಳಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಅಪಾರ್ಥ ಪ್ರವೃತ್ತಿ ಕಳವಳಕಾರಿ:

ಸಂವಿಧಾನವನ್ನು ಓದಿ ಅರ್ಥಮಾಡಿಕೊಳ್ಳುವ ಬದಲು ಅಪಾರ್ಥ ಮಾಡಿಕೊಳ್ಳುವ ಪ್ರವೃತ್ತಿ ಕಂಡುಬರುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದ ಜಿಲ್ಲಾಧಿಕಾರಿ ಆದ್ದರಿಂದ ವಿದ್ಯಾರ್ಥಿಗಳು ಸೇರಿ ಪ್ರತಿಯೊಬ್ಬರೂ ಸಂವಿಧಾನವನ್ನು ಅಧ್ಯಯನ ಮಾಡಿ, ಅದರಲ್ಲಿನ ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಸಹೋದರತ್ವದ ಮೌಲ್ಯಗಳನ್ನು ಜೀವನದಲ್ಲಿ ಪಾಲಿಸಬೇಕು ಎಂದು ಹೇಳಿದರು. ಭಾರತದಲ್ಲಿ ಪ್ರತಿ ವರ್ಷ ನ.26 ರಂದು ಸಂವಿಧಾನ ದಿನ (ಸಂವಿಧಾನ್​ ದಿವಸ್​) ಆಚರಿಸಲಾಗುತ್ತದೆ. 1949ರ ನ. 26ರಂದು ಭಾರತದ ಸಂವಿಧಾನ ಸಭೆಯು ಸಂವಿಧಾನವನ್ನು ಅಂಗೀಕರಿಸಿದ ಸ್ಮರಣಾರ್ಥ ಈ ದಿನವನ್ನು ಆಚರಿಸಲಾಗುತ್ತದೆ ಎಂದರು. ಡಾ. ಬಿ.ಆರ್​. ಅಂಬೇಡ್ಕರ125ನೇ ಜನ್ಮದಿನದ ಅಂಗವಾಗಿ 2015ರಲ್ಲಿ ಭಾರತ ಸರ್ಕಾರ ಈ ದಿನವನ್ನು ಅಧಿಕೃತವಾಗಿ ಆಚರಿಸಲು ಪ್ರಾರಂಭಿಸಿತು.ಸಂವಿಧಾನದ ಮೂಲ ಆಶಯಗಳಾದ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸ್ಮರಿಸುವುದು ಹಾಗೂ ನಾಗರಿಕರಲ್ಲಿ ಸಾಂವಿಧಾನಿಕ ಮೌಲ್ಯಗಳು ಮತ್ತು ಹಕ್ಕು-ಕರ್ತವ್ಯಗಳ ಬಗ್ಗೆ ಅರಿವು ಮೂಡಿಸುವುದು ಇದರ ಉದ್ದೇಶ ನಮ್ಮೆಲ್ಲರ ಉದ್ದೇಶವಾಗಿದೆ ಎಂದು ಹೇಳಿದರು.