ಹನೂರು : ಪ್ರತಿಯೊಬ್ಬರೂ ಮನೆಮನೆಗೆ ತೆರಳಿ ಸಮೀಕ್ಷೆ ನಡೆಸುವುದರ ಮೂಲಕ ಯಾವುದೇ ಮಗು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ತಿಳಿಸಿದರು.
ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ಕೈಗೊಳ್ಳುವ ಸಂಬಂಧ ಮಂಗಳವಾರ ತಾಲೂಕಿನ ಪಿ.ಜಿ. ಪಾಳ್ಯ, ಹುತ್ತೂರು ಹಾಗೂ ಬೈಲೂರು ಶಾಲೆಗಳಿಗೆ ಭೇಟಿ ನೀಡಿ ಅಧಿಕಾರಿಗಳು, ಜನಪ್ರತಿನಿಧಿಗಳು, ಶಿಕ್ಷಕರು ಹಾಗೂ ಆಶಾ, ಅಂಗನವಾಡಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಮಾತನಾಡಿದರು.
6-14 ವರ್ಷದೊಳಗಿನ ಪ್ರತಿಯೊಂದು ಮಗು ಕಡ್ಡಾಯವಾಗಿ ಶಿಕ್ಷಣವನ್ನು ಪಡೆಯುವುದು ಸರ್ಕಾರದ ಉದ್ದೇಶ. ಈ ದಿಸೆಯಲ್ಲಿ ಮಕ್ಕಳಿಗೆ ಹಲವು ಸವಲತ್ತು ಒದಗಿಸುವುದರ ಜತೆಗೆ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಆದರೆ ಕೆಲ ಪಾಲಕರು ಬಡತನ ಹಾಗೂ ಇನ್ನಿತರೆ ಕಾರಣಗಳಿಂದ ಮಕ್ಕಳ ಶಿಕ್ಷಣವನ್ನು ಮೊಟಕುಗೊಳಿಸಿದ್ದಾರೆ. ಇದರಿಂದ ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಹಾಗಾಗಿ ಮಕ್ಕಳನ್ನು ಸಮಾಜದ ಮುಖ್ಯ ವಾಹಿನಿಗೆ ಕರೆ ತರುವುದು ನಮ್ಮೆಲ್ಲರ ಕರ್ತವ್ಯ. ಈ ದಿಸೆಯಲ್ಲಿ ಮನೆಮನೆಗೆ ತೆರಳಿ ಸಮೀಕ್ಷೆ ನಡೆಸುವುದರ ಮೂಲಕ ಗ್ರಾಮ ಪಂಚಾಯಿತಿವಾರು ಮಕ್ಕಳ ಪಟ್ಟಿ ತಯಾರಿಸಬೇಕು. ಜತೆಗೆ ಪಾಲಕರನ್ನು ಮನವೊಲಿಸಿ ಮಕ್ಕಳನ್ನು ಶಾಲೆಗೆ ಕರೆತರುವ ಕೆಲಸವಾಗಬೇಕು. ಈ ಕಾರ್ಯಕ್ಕೆ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು ಸಹಕಾರ ನೀಡಬೇಕು. ಇನ್ನು ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸುವುದರ ಮೂಲಕ ಶಾಲಾಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಗ್ರಾಪಂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ತಿಳಿಸಿದರು.