ಜಿಲ್ಲೆ

ಶಿಕ್ಷಕಕರ ಪ್ರಾಮಾಣಿಕ ಪ್ರಯತ್ನದಿಂದ ಬದಲಾವಣೆ ಸಾಧ್ಯ

ಮಂಜುನಾಥ ಅಂಗಡಿ

ವಿಜಯವಾಣಿ ಸುದ್ದಿಜಾಲ ಧಾರವಾಡ

ಸಮಾಜದಲ್ಲಿ ಶಿಕ್ಷಕರಿಗೆ ಅಪಾರ ಗೌರವವಿದೆ. ಪ್ರತಿಯೊಬ್ಬ ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ಮಾಡಿದರೆ ನಿರೀಕ್ಷಿತ ಬದಲಾವಣೆ ಸಾಧ್ಯ. ಈ ದಿಶೆಯಲ್ಲಿ ಶಿಕ್ಷಕರು ಮಕ್ಕಳ ಭವಿಷ್ಯ ರೂಪಿಸಲು ಶ್ರಮಿಸಬೇಕು ಎಂದು ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ನಗರದ ಜೆಎಸ್‌ಎಸ್ ಕಾಲೇಜಿನ ಸನ್ನಿಧಿ ಕಲಾ ಕ್ಷೇತ್ರದಲ್ಲಿ ಭಾರತರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆ ಅಂಗವಾಗಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಕ ವೃತ್ತಿ ಪರಮ, ಪವಿತ್ರವಾದುದು. ವ್ಯಕ್ತಿ ಏಷ್ಟೇ ಎತ್ತರಕ್ಕೆ ಏರಿದರೂ ಕಲಿಸಿದ ಶಿಕ್ಷಕರ ಬಗ್ಗೆ ಅಪಾರ ಗೌರವ ಇರುತ್ತದೆ. ಜಿಲ್ಲಾಡಳಿತವು ಮಿಷನ್ ವಿದ್ಯಾಕಾಶಿ ಮೂಲಕ ಜಿಲ್ಲೆಯಲ್ಲಿ ಫಲಿತಾಂಶ ಸುಧಾರಣೆಗೆ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಆದರೆ, ಕಳೆದ ಸಾಲಿನಲ್ಲಿ ನಿರೀಕ್ಷಿತ ಎಸ್‌ಎಸ್‌ಎಲ್‌ಸಿ ಫಲಿತಾಂಶ ಲಭಿಸಲಿಲ್ಲ. ಇದಕ್ಕೆ ಶಿಕ್ಷಕರು ಕಾರಣರಾಗಿದ್ದಾರೆ. ಈ ವರ್ಷ ಜಿಲ್ಲೆ ರಾಜ್ಯದ 10 ಜಿಲ್ಲೆಗಳಲ್ಲಿ ಇರಬೇಕು ಎಂದರು.

ಶಾಸಕ ಎನ್.ಎಚ್. ಕೋನರೆಡ್ಡಿ ಮಾತನಾಡಿ, ಶಿಕ್ಷಕರು ಪಠ್ಯಕ್ರಮ ಮುಗಿಸುವುದು, ವಿದ್ಯಾರ್ಥಿಗಳು ಅಂಕ ಗಳಿಸಲು ಸೀಮಿತವಾಗಬಾರದು ಎಂದರು.

ಧಾರವಾಡ ಮುರುಘಾಮಠದ ಡಾ. ಮಲ್ಲಿಕಾರ್ಜುನ ಮಹಾಸ್ವಾಮೀಜಿ ಆಶೀರ್ವಚನ ನೀಡಿದರು. ಜಿಲ್ಲಾಧಿಕಾರಿ ದಿವ್ಯ ಪ್ರಭು, ಪಾಲಿಕೆ ಮೇಯರ್ ಜ್ಯೋತಿ ಪಾಟೀಲ, ಜಿ.ಪಂ. ಸಿಇಒ ಭುವನೇಶ ಪಾಟೀಲ ಮಾತನಾಡಿದರು.

ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ವಿಜೇತರನ್ನು ಸನ್ಮಾನಿಸಲಾಯಿತು. ಡಿಡಿಪಿಐ ಎಸ್.ಎಸ್. ಕೆಳದಿಮಠ ಸ್ವಾಗತಿಸಿದರು.

ಸರ್ಕಾರಿ ನೌಕರ ಸಂಘದ ಜಿಲ್ಲಾ ಅಧ್ಯಕ್ಷ ಎಸ್.ಎಫ್. ಸಿದ್ದನಗೌಡರ, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬಿ.ಎಫ್. ಚುಳಕಿ, ಪದಾಧಿಕಾರಿಗಳು, ಮುಖ್ಯಾಧ್ಯಾಪಕರು, ಶಿಕ್ಷಕರು ಭಾಗವಹಿಸಿದ್ದರು.