ಉಡುಪಿ: ಸಮಾಜದಲ್ಲಿ ಹೆಣ್ಣು ಮಕ್ಕಳು ಜನಿಸಿದಾಗ ಸಂಭ್ರಮ ಪಡುವುದರ ಜೊತೆಗೆ ಅವಳಿಗೆ ಉನ್ನತ ಶಿಕ್ಷಣ ನೀಡಬೇಕೆಂಬುದು ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಮುಖ್ಯ ಗುರಿ. ಇದನ್ನು ಸಕಾರಗೊಳಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.
ಬುಧವಾರ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಹಯೋಗದೊಂದಿಗೆ ನಡೆದ ಬೇಟಿ ಬಚಾವೋ ಬೇಟಿ ಪಡಾವೋ ಕುರಿತ ಜಿಲ್ಲಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿ ಅತೀ ಹೆಚ್ಚು ಗೌರವ ಪಡೆಯುತ್ತಿರುವವರು ಮಹಿಳೆಯರು. ಹೆಣ್ಣುಮಕ್ಕಳಿಗೆ ಪ್ರಥಮವಾಗಿ ಪ್ರಾತಿನಿಧ್ಯ ನೀಡಲಾಗುತ್ತಿದೆ. ಮಹಿಳೆಯರ ಸಬಲೀಕರಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಿವಿಧ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗಿದ್ದು, ಇದರ ಸದುಪಯೋಗವನ್ನು ಪ್ರತಿಯೊಬ್ಬ ಹೆಣ್ಣುಮಕ್ಕಳು ಪಡೆದುಕೊಳ್ಳಬೇಕು ಎಂದರು.
ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಮಾತನಾಡಿ, ಹೆಣ್ಣು ಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸಾಧನೆ ಮಾಡಿದ್ದರೂ ಸಹ ಅವರು ಕ್ರಮಿಸುವ ಹಾದಿ ಇನ್ನು ಕೂಡ ಬಹಳಷ್ಟಿದೆ. ಶೇ. 24 ರಷ್ಟು ಹೆಣ್ಣು ಮಕ್ಕಳು ಮಾತ್ರ ಉನ್ನತ ಶಿಕ್ಷಣ ಪಡೆಯುತ್ತಿದ್ದು, ಶೇ.76 ರಷ್ಟು ಮಂದಿ ಕೂಡ ಉನ್ನತ ಶಿಕ್ಷಣಕ್ಕೆ ತೆರೆದುಕೊಂಡಿಲ್ಲ. ಶೇ.13 ರಷ್ಟು ಮಂದಿ ಹೆಣ್ಣುಮಕ್ಕಳು ಮಾತ್ರ ಐಎಎಸ್ ಪದವಿ ಪಡೆದಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿವಿಧ ಯೋಜನೆಗಳೇ ಹೆಣ್ಣು ಮಕ್ಕಳ ಸಾಧನೆಗೆ ಮೈಲುಗಲ್ಲು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಮಾತನಾಡಿ, ಪ್ರತಿಯೊಬ್ಬ ಪುರುಷನ ಬದುಕಿನ ಅವಿಭಾಜ್ಯ ಅಂಗ ಮಹಿಳೆ. ಆ ಹೆಣ್ಣು ಮಗುವನ್ನು ಗುರುತಿಸಿ, ಗೌರವಿಸುವ ಸಲುವಾಗಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ. ಹೆಣ್ಣು ಮಕ್ಕಳ ಮೇಲೆ ಉಂಟಾಗುತ್ತಿರುವ ದೌರ್ಜನ್ಯಗಳನ್ನು ತಡೆಯುವಲ್ಲಿ ಪ್ರತಿಯೊಬ್ಬ ಅಧಿಕಾರಿಗಳ ಹಾಗೂ ಸಾರ್ವಜನಿಕರ ಪಾತ್ರ ಬಹಳ ಮುಖ್ಯ ಎಂದರು.
ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ಎ.ಆರ್ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಮಹತ್ವ ಮತ್ತು ಮಕ್ಕಳ ಹಕ್ಕುಗಳ ಕುರಿತು ಹಾಗೂ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶ್ರೀರಾಮ್ರಾವ್ ಪ್ರಸವಪೂರ್ವ ಲಿಂಗಪತ್ತೆ ನಿಷೇಧಕಾಯ್ದೆ ಮತ್ತು ನಿಯಂತ್ರಣ ಕುರಿತು ಮಾಹಿತಿ ನೀಡಿದರು. ಎಎಸ್ಪಿ ಸಿದ್ಧಲಿಂಗಪ್ಪ ಟಿ, ಮಕ್ಕಳ ಕಲ್ಯಾಣ ಸಮಿತಿಯ ಜಿಲ್ಲಾ ಅಧ್ಯಕ್ಷ ರೊನಾಲ್ಡ್ ಬಿ. ಫುರ್ಟಾಡೋ ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ. ಸ್ವಾಗತಿಸಿ, ದೀಪಾ ನಿರೂಪಿಸಿ, ಪ್ರಭಾರ ನಿರೂಪಣಾಧಿಕಾರಿ ಅನುರಾಧ ಹಾದಿಮನೆ ವಂದಿಸಿದರು.