ಚಂದ್ರಗುತ್ತಿ: ಶ್ರಾವಣ ಮಾಸದ ನೂಲು ಹುಣ್ಣಿಮೆ ನಿಮಿತ್ತ ಗುರುವಾರ ಲಕ್ಷಾಂತರ ಭಕ್ತರು ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬೆ ದೇವಸ್ಥಾನಕ್ಕೆ ಆಗಮಿಸಿ, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಸೊರಬ, ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್, ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಹಾವೇರಿ, ರಾಯಚೂರು, ಶಿವಮೊಗ್ಗ, ಚಿಕ್ಕಮಗಳೂರು, ಭದ್ರಾವತಿ, ಸಿದ್ದಾಪುರ ಸೇರಿದಂತೆ ಉತ್ತರ ಕರ್ನಾಟಕ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದರು. ಮಲೆನಾಡಿನ ಆರಾಧ್ಯ ದೇವಿ ರೇಣುಕಾದೇವಿಯ ದರ್ಶನ ಪಡೆದು ಉದೋ ಉದೋ ಎಂದು ಜೈಕಾರ ಕೂಗಿ ಭಕ್ತಿ ಸಮರ್ಪಿಸಿದರು.
ಪರಿವಾರ ದೇವರಾದ ನಾಗದೇವತೆ, ಮಾತಂಗಿ, ಕಾಲಭೈರವ, ಪರಶುರಾಮ ತ್ರಿಶೂಲದ ಭೈರಪ್ಪ ದೇವರಿಗೆ ಹಾಗೂ ತೊಟ್ಟಿಲು ಬಾವಿಗೆ ಹುಣ್ಣಿಮೆಯ ವಿಶೇಷ ಪೂಜೆ ಸಲ್ಲಿಸಲಾಯಿತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ ಹಿನ್ನೆಲೆಯಲ್ಲಿ ರಥಬೀದಿಯಲ್ಲಿ ಅಂಗಡಿ ಮುಂಗಟ್ಟುಗಳ ವ್ಯಾಪಾರ ವಹಿವಾಟು ಜೋರಾಗಿಯೇ ನಡೆಯಿತು. ಕೆಲ ಭಕ್ತರು ಕುಟುಂಬ ಸಮೇತರಾಗಿ ಸಹ ಭೋಜನ ಮಾಡುವ ದೃಶ್ಯ ಕಂಡು ಬಂತು. ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿತ್ತು.