suspend 
ಬೀದರ್

ಡಿಎಚ್‌ಒ, ಟಿಎಚ್‌ಒ ಅಮಾನತು

ರೇವಣಸಿದ್ದಪ್ಪ ಪಾಟೀಲ್

ಬೀದರ್: ಶಿಷ್ಟಾಚಾರ ಉಲ್ಲಂಘಿಸಿ ಕರ್ತವ್ಯಲೋಪ ಎಸಗಿದ್ದಕ್ಕಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ (ಡಿಎಚ್‌ಒ) ಡಾ.ಧ್ಯಾನೇಶ್ವರ ನೀರಗುಡೆ ಹಾಗೂ ಬಸವಕಲ್ಯಾಣದ ತಾಲೂಕು ಆರೋಗ್ಯ ಅಧಿಕಾರಿ (ಟಿಎಚ್‌ಒ) ಡಾ.ಅಶೋಕ ಮೈಲಾರೆ ಅವರನ್ನು ಅಮಾನತುಗೊಳಿಸಲಾಗಿದೆ. ಬಸವಕಲ್ಯಾಣ ನಗರದಲ್ಲಿ ಸೆ.16ರಂದು ಆಯೋಜಿಸಿದ ಉಪವಿಭಾಗ ಆಸ್ಪತ್ರೆಯ ಕಟ್ಟಡ ಕಾಮಗಾರಿಯ ಭೂಮಿ ಪೂಜೆ ಸಮಾರಂಭದಲ್ಲಿ ಶಿಷ್ಟಾಚಾರ ನಿಯಮಗಳನ್ನು ಉಲ್ಲಂಘಿಸಿ ನಿರ್ಲಕ್ಷ್ಯ ತೋರಿಸಿದ್ದಕ್ಕಾಗಿ ಇಲಾಖೆ ವಿಚಾರಣೆ ಬಾಕಿ ಇರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಗುರುದತ್ತ ಹೇಗಡೆ ಆದೇಶ ಹೊರಡಿಸಿದ್ದಾರೆ. ಅಮಾನತು ಅವಧಿಯಲ್ಲಿ ಜೀವನಾಂಶ ಭತ್ಯೆಯನ್ನು ಪಡೆಯುವ ಸಲುವಾಗಿ ನೀರಗುಡೆ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ಸಾರ್ವಜನಿಕ ಆಸ್ಪತ್ರೆಗೆ, ಮೈಲಾರೆ ಅವರನ್ನು ಕಲಬುರಗಿ ಜಿಲ್ಲೆಯ ಅಫಜಲಪುರ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಭೂಮಿಪೂಜೆಯ ಫ್ಲೆಕ್ಸ್ ಮತ್ತು ಬ್ಯಾನರ್‌ನಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಭಾವಚಿತ್ರ ಕೈಬಿಟ್ಟು ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದರು.