ಭಾಲ್ಕಿ ಬಿಕೆಐಟಿ ಸಭಾಂಗಣದಲ್ಲಿ ಆಯೋಜಿಸಿದ್ದ ಎಸ್ಐಆರ್ ಜನಜಾಗೃತಿ ಮತ್ತು ತರಬೇತಿ ಕಾರ್ಯಕ್ರಮದಲ್ಲಿ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಹಣಮಂತರಾವ ಚವ್ಹಾಣ್ ನೇತೃತ್ವದಲ್ಲಿ ಸಚಿವ ಈಶ್ವರ ಖಂಡ್ರೆ ಅವರನ್ನು ಸನ್ಮಾನಿಸಲಾಯಿತು. ಸಂಸದ ಸಾಗರ ಖಂಡ್ರೆ, ಪ್ರಕಾಶ ಮಾಶೆಟ್ಟೆ, ಮಲ್ಲಿಕಾರ್ಜುನ ಪಾಟೀಲ್, ಅಶೋಕರಾವ ಸೋನಜಿ ಇತರರಿದ್ದರು.
ಭಾಲ್ಕಿ: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಯಾವೊಬ್ಬ ಅರ್ಹ ಮತದಾರ ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರ ವಹಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಬಿಕೆಐಟಿ ಸಭಾಂಗಣದಲ್ಲಿ ತಾಲೂಕು ಕಾಂಗ್ರೆಸ್ ಸಮಿತಿಯಿಂದ ಎಸ್ಐಆರ್ ಕುರಿತು ಆಯೋಜಿಸಿದ್ದ ಜನಜಾಗೃತಿ ಮತ್ತು ತರಬೇತಿ ಕಾರ್ಯಕ್ರಮ ಉದ್ಘಾಟಿಸಿದ ಅವರು, ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬಿಎಲ್ಎ-2 ಪ್ರತಿನಿಧಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಿ ಎಸ್ಐಆರ್ ಕುರಿತು ಸಾರ್ವಜನಿಕರಲ್ಲಿ ತಿಳಿವಳಿಕೆ ಮೂಡಿಸುವುದರ ಜತೆಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಲು ಸಹಕರಿಸಬೇಕು ಎಂದು ಕರೆ ನೀಡಿದರು.
ಪ್ರಜಾಪ್ರಭುತ್ವದ ಭದ್ರ ಅಡಿಪಾಯವೇ ಮತದಾರರಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕರ ಮತದಾನದ ಹಕ್ಕು ಸುರಕ್ಷಿತವಾಗಿರಲು ಎಸ್ಐಆರ್ ಪ್ರಕ್ರಿಯೆಯಲ್ಲಿ ಸಂಘಟಿತ ಮತ್ತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.
ಚುನಾವಣಾ ಆಯೋಗ ಜೂ.30ರಿಂದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಆರಂಭಿಸುತ್ತಿದ್ದು, ಜನರಲ್ಲಿ ಜಾಗೃತಿ ಮೂಡಿಸಲು ಕಾಂಗ್ರೆಸ್ ಬೂತ್ ಮಟ್ಟದ ಏಜೆಂಟರ ನೇಮಕ ಮಾಡುತ್ತಿದೆ. ಯಾವುದೇ ಮತದಾರನ ಹಕ್ಕು ಕಸಿಯದಂತೆ ಸೂಕ್ತ ಮಾಹಿತಿ ನೀಡಲು ಪಕ್ಷ ಈ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.
ಸಂಸದ ಸಾಗರ ಖಂಡ್ರೆ ಮಾತನಾಡಿ, ಮತದಾರರ ಹಕ್ಕುಗಳ ರಕ್ಷಣೆಗೆ ಎಸ್ಐಆರ್ ಪ್ರಕ್ರಿಯೆಯಲ್ಲಿ ಕಾರ್ಯಕರ್ತರು ಸಕ್ರಿಯ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಪಕ್ಷದ ತಾಲೂಕು ಅಧ್ಯಕ್ಷರೂ ಆದ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಹಣಮಂತರಾವ ಚವ್ಹಾಣ್ ಪ್ರಾಸ್ತಾವಿಕ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ ಮಾಶೆಟ್ಟೆ, ಮಲ್ಲಿಕಾರ್ಜುನ ಪಾಟೀಲ್ ಮುಗನೂರ, ಡಿಸಿಸಿ ಬ್ಯಾಂಕ್ ನಿರ್ದೇಶಕ ಅಶೋಕರಾವ ಸೋನಜಿ, ಜಿಪಂ ಮಾಜಿ ಅಧ್ಯಕ್ಷ ಶಿವರಾಜ ಹಾಸನಕರ್, ಪುರಸಭೆ ಮಾಜಿ ಅಧ್ಯಕ್ಷ ಬಸವರಾಜ ವಂಕೆ, ಅಬ್ದುಲ್ ನಸೀರ್ ಇತರರಿದ್ದರು.