ಬಸವಕಲ್ಯಾಣ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಕರೆದಿದ್ದ ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಾಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷ ನೀಲಕಂಠ ರಾಠೋಡ್​ ಮಾತನಾಡಿದರು. ತಾಪಂ ಇಒ ರಮೇಶ ಸುಲ್ಪಿ ಇದ್ದರು. 
ಬೀದರ್

ಗ್ಯಾರಂಟಿ ಯೋಜನೆ ನಿಜ ಫಲಾನುಭವಿಗಳಿಗೆ ತಲುಪಲಿ

ಬಸವಕಲ್ಯಾಣ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ನಿಜವಾದ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮಾಡಬೇಕು ಎಂದು ಗ್ಯಾರಂಟಿ ಯೋಜನೆಗಳ ತಾಲೂಕು ಸಮಿತಿ ಅಧ್ಯಕ್ಷ ನೀಲಕಂಠ ರಾಠೋಡ್​ ಹೇಳಿದರು.

ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಕರೆದಿದ್ದ ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅರ್ಹ ಫಲಾನುಭವಿಗಳಿಗೆ ಯಾವುದೇ ಸಮಸ್ಯೆ ಆಗದಂತೆ ಗ್ಯಾರಂಟಿ ಯೋಜನೆಗಳು ಮುಟ್ಟಬೇಕು. ಅರ್ಹರಲ್ಲದವರಿಗೆ ಸರ್ಕಾರದ ಯಾವುದೇ ಯೋಜನೆಗಳ ಸೌಲಭ್ಯ ಹೋಗದಂತೆ ನೋಡಿಕೊಳ್ಳಬೇಕು. ಇದರಿಂದ ಸರ್ಕಾರಕ್ಕೆ ತುಂಬಾ ಸಹಾಯವಾಗುತ್ತದೆ ಎಂದರು.

ಗ್ಯಾರಂಟಿ ಯೋಜನೆಗಳ ಸದಸ್ಯರು ಸಭೆಯಲ್ಲಿ ತರುವ ಸಮಸ್ಯೆಗಳನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ರ್ನಿಲಕ್ಷಿಸದೆ ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಮಹಿಳೆಯರ ಮತ್ತು ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಸಮಯಕ್ಕೆ ಸರಿಯಾಗಿ ಬಸ್​ ಸಂಚಾರ ವ್ಯವಸ್ಥೆ ಕಲ್ಪಿಸಬೇಕು ಮತ್ತು ನ್ಯಾಯ ಬೆಲೆ ಅಂಗಡಿಯಲ್ಲಿ ನೀಡುವ ಆಹಾರ ಧಾನ್ಯಗಳು ಸಮಯಕ್ಕೆ ಸರಿಯಾಗಿ ವಿತರಣೆ ಮಾಡಬೇಕು ಎಂದು ಸೂಚಿಸಿದರು.

ತಾಪಂ ಇಒ ರಮೇಶ ಸುಲ್ಪಿ ಮಾತನಾಡಿ, ಸಮಸ್ಯೆ ಇದ್ದಲ್ಲಿ ನಮ್ಮ ಗಮನಕ್ಕೆ ತನ್ನಿ ನಾವು ಅದನ್ನು ಮೇಲಧಿಕಾರಿ ಗಮನಕ್ಕೆ ತಂದು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೆವೆ. ಆದರೆ ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳು ಮಾತ್ರ ನಿಜವಾದ ಫಲಾನುಭವಿಗಳಿಗೆ ಮುಟ್ಟಿಸುವ ಮೂಲಕ ಯೋಜನೆ ಯಶಸ್ವಿ ಗೊಳಿಸಬೇಕು ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಯ ಸದುಪಯೋಗ ಪಡೆದುಕೊಂಡ ಫಲಾನುಭವಿಗಳ ಜತೆ ಸಂವಾದ ನಡೆಸಿದರು.