ಬೀದರ್ ನ ಯಲ್ಲಾಲಿಂಗ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಮುರಳಿಧರ ಎಕಲಾರಕರ್ ಅವರಿಗೆ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಪ್ರದಾನ ಮಾಡಿದರು.
ಬೀದರ್: ಇಲ್ಲಿಯ ಯಲ್ಲಾಲಿಂಗ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಮುರಳಿಧರ ಎಕಲಾರಕರ್ ಅವರಿಗೆ ಬೆಂಗಳೂರಿನ ಸನಾತನ ಫೌಂಡೇಷನ್ ವತಿಯಿಂದ ಕೊಡಲಾಗುವ ಪ್ರಸಕ್ತ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಲಭಿಸಿದೆ.
ಶಿಕ್ಷಣ, ಸಮಾಜ ಸೇವೆ ಸೇರಿದಂತೆ ವಿವಿಧ ಕ್ಷೇತ್ರಕ್ಕೆ ನೀಡಿದ ಗಣನೀಯ ಕೊಡುಗೆಗಾಗಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಬೆಂಗಳೂರಿನ ಸರ್.ಎಂ.ವಿ. ಆಡಿಟೋರಿಯಂನಲ್ಲಿ ಗುರುವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಪ್ರಶಸ್ತಿ ಪ್ರದಾನ ಮಾಡಿದರು.
ಎಕಲಾರಕರ್ ಅವರು ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಂಯೋಜಕರಾಗಿದ್ದಾರೆ. ಎಕಲಾರಕರ್ ಅವರಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ದೊರೆತಿದ್ದಕ್ಕೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ ಇತರರು ಸಂತಸ ವ್ಯಕ್ತಪಡಿಸಿದ್ದಾರೆ.