ಮೈಸೂರು: ಕೇಂದ್ರ ಸರ್ಕಾರ ನೀಡಿದ ರಸಗೊಬ್ಬರವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಕಾಳಸಂತೆಯಲ್ಲಿ ಮಾರಾಟ ಮಾಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎನ್.ಸುಬ್ಬಣ್ಣ ಆರೋಪಿಸಿದರು.
ಮುಂಗಾರು ಹಂಗಾಮಿಗೆ ರಾಜ್ಯಕ್ಕೆ 6.30 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಅವಶ್ಯಕತೆ ಇದ್ದು, ಕೇಂದ್ರ ಸರ್ಕಾರ 8.73 ಲಕ್ಷ ಮೆಟ್ರಿನ್ ಟನ್ ಪೂರೈಕೆ ಮಾಡಿದೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ರಸಗೊಬ್ಬರ ಪೂರೈಕೆ ಮಾಡಿದರೂ ರೈತರಿಗೆ ಗೊಬ್ಬರದ ಕೊರತೆ ಉಂಟಾಗಲು ಹೇಗೆ ಸಾಧ್ಯ? ರಾಜ್ಯ ಸರ್ಕಾರ ಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವ ಮೂಲಕ ರೈತರಿಗೆ ದ್ರೋಹ ಬಗೆದಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಪಾದಿಸಿದರು.
ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮತ್ತು ವಿ.ಸೋಮಣ್ಣ ಅವರು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಜೆ.ಪಿ. ನಡ್ಡಾ ಅವರೊಂದಿಗೆ ಮಾತುಕತೆ ನಡೆಸಿ ರಾಜ್ಯಕ್ಕೆ ಬೇಕಾಗಿರುವ ರಸಗೋಬ್ಬರವನ್ನು ನೀಡುವಂತೆ ಮನವಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ ರಸಗೊಬ್ಬರ ನೀಡುವ ಭರವಸೆಯನ್ನು ಕೇಂದ್ರ ಸರ್ಕಾರ ನೀಡಿದ್ದು, ರೈತರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ರೈತರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿವೇತನ ನೀಡುವುದನ್ನು ನಿಲ್ಲಿಸಲಾಗಿದೆ. ರಾಜ್ಯದಲ್ಲಿ ಬಿತ್ತನೆ ಬೀಜದ ಬೆಲೆಯನ್ನು ಪ್ರತಿ ಕ್ವಿಂಟಾಲ್‌ಗೆ ಶೇ.20 ರಷ್ಟು ಏರಿಕೆ ಮಾಡಲಾಗಿದೆ. ಬರ ಪರಿಹಾರಕ್ಕೆ ಕೇಂದ್ರ ಸರ್ಕಾರ ನೀಡಿದ 3454 ಕೋಟಿ ರೂ.ಗಳನ್ನು ಸಹ ಸರಿಯಾಗಿ ವಿತರಣೆ ಮಾಡುತ್ತಿಲ್ಲ. ಡೈರಿಗೆ ಹಾಲನ್ನು ಹಾಕುವ ರೈತರಿಗೆ ಸರಿಯಾದ ಪ್ರೋತ್ಸಾಹ ಧನ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮೈಸೂರಿನಲ್ಲಿ ಡ್ರಗ್ಸ್ ಮಾಫೀಯ ಕಣ್ಣೆದುರೆ ನಡೆಯುತ್ತಿದ್ದರೂ ಸರ್ಕಾರ ಕ್ರಮ ಕೈಗೊಳ್ಳಲಿಲ್ಲ. ಮಹಾರಾಷ್ಟ್ರ ಪೋಲಿಸರು ಬಂದು ದಾಳಿ ನಡೆಸಿದ ನಂತರ ಮಾಹಿತಿ ಬಹಿರಂಗವಾಯಿತು. ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ನಿಷ್ಕ್ರೀಯವಾಗಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದರು.
ಮೈಸೂರು ಸಂಸ್ಥಾನದ ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ಗಿಂತ ಹೆಚ್ಚು ಅಭಿವೃದ್ಧಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮ್ಯ ಹೇಳಿಕೆ ನೀಡಿರುವುದು ಖಂಡನೀಯ ಎಂದರು.
ತಿ.ನರಸೀಪುರ ಪುರಸಭೆಯಲ್ಲಿ 40 ಕೋಟಿ ರೂ. ಅವ್ಯವಹಾರ ನಡೆದಿದೆ. ಈ ಹಗರಣವನ್ನು ನಾವು ಬಯಲಿಗೆ ತಂದ ನಂತರ ಪುರಸಭೆ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ನಂಜುಂಡಸ್ವಾಮಿಯನ್ನು ಬಂಧಿಸಲಾಗಿದೆ. ಮುಖ್ಯಮಂತ್ರಿ ಆಪ್ತರಾದ ಪುರಸಭೆ ನಂಜುಂಡಸ್ವಾಮಿ ಏನು ಮಾಡುತ್ತಿದ್ದಾರೆ ಎಂಬುದು ಮುಖ್ಯಮಂತ್ರಿಗಳಿಗೂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೂ ತಿಳಿದಿರುತ್ತದೆ. ಹೀಗಾಗಿ ಮುಂದಿನ ದಿನಗಳಲ್ಲಿ ಈ ವಿಚಾರವಾಗಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಮಡವಾಡಿ ಮಹೇಶ್, ಮಿರ್ಲೆ ಶ್ರೀನಿವಾಸಗೌಡ, ದೇವರಾಜು, ವೆಂಕಟೇಶ್, ಮಹೇಶ್ ಬಾಬು, ರಮೇಶ್ ಕುಮಾರ್, ಮಹದೇವ ಸ್ವಾಮಿ, ಸಂತೋಷ್ ಕುಮಾರ್ ಇದ್ದರು.