ಜಿಲ್ಲೆ

ಅನುದಾನ ಬಿಡುಗಡೆಗೆ ಆಗ್ರಹ: ನಗರದಲ್ಲಿ ಬಿಜೆಪಿ ಪ್ರತಿಭಟನೆ

ಕೆ.ಎನ್.ರಾಘವೇಂದ್ರ

ಮಂಡ್ಯ: ಹಿಂದುಳಿದ ವರ್ಗಗಳ ನಿಗಮಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಡಿಸಿ ಕಚೇರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ರವಾನಿಸಿದರು.

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ 1 ಸಾವಿರ ಕೋಟಿ ರೂ ಅನುದಾನವನ್ನು ಡಿ.ದೇವರಾಜ ಅರಸು ನಿಗಮ, ಒಕ್ಕಲಿಗರ ಅಭಿವೃದ್ಧಿ ನಿಗಮ, ಮರಾಠ, ವಿಶ್ವಕರ್ಮ, ವೀರಶೈವ ಲಿಂಗಾಯತ, ನಿಜಶರಣ ಅಂಬಿಗರ ಚೌಡಯ್ಯ, ಸವಿತಾ ಸಮಾಜ, ಅಲೆಮಾರಿ, ಅರೆ ಅಲೆಮಾರಿ, ಮಡಿವಾಳ ಮಾಚಿದೇವ, ಕಾಡುಗೊಲ್ಲ ಅಭಿವೃದ್ಧಿ ನಿಗಮಗೆ ಬಿಡುಗಡೆ ಮಾಡಲಾಯಿತು. ಆದರೆ ಕಾಂಗ್ರೆಸ್ ಸರ್ಕಾರ ಬಜೆಟ್‌ನಲ್ಲಿ ಹಿಂದುಳಿದ ವರ್ಗಕ್ಕೆ 1,600 ಕೋಟಿ ರೂ ಘೋಷಣೆ ಮಾಡಿ ಕೇವಲ 57.04 ಕೋಟಿ ರೂ ವೆಚ್ಚ ಮಾಡಿ ಮೋಸ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದುಳಿದ ವರ್ಗಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಶೈಕ್ಷಣಿಕ ಸಾಲಕ್ಕೆ 6,065 ಅರ್ಜಿ ಸಲ್ಲಿಕೆಯಾಗಿದ್ದರೂ ನಯಾ ಪೈಸೆ ಬಿಡುಗಡೆ ಮಾಡಿಲ್ಲ. ಅತ್ಯಂತ ಹಿಂದುಳಿದ ಸಮುದಾಯಗಳಾದ ಹೂಗಾರ, ಕಂಬಾರ, ಗಾಣಿಗ, ಹಡಪದ, ಈಡಿಗ,ಮಾಳಿ ಸಮುದಾಯದ ನಿಗಮ ಗಳಿಗೂ ಸಹ ಹಣ ನೀಡಿಲ್ಲ. ಹಿಂದುಳಿದ ವರ್ಗ ನಿಗಮಗಳಿಗೆ ಬಜೆಟ್‌ನಲ್ಲಿ ಘೋಷಣೆ ಮಾಡಿರುವ 1,600 ಕೋಟಿ ರೂಗಳನ್ನು ಕೂಡಲೇ ಬಿಡುಗಡೆ ಮಾಡಿ ಹಿಂದುಳಿದವರ ಆರ್ಥಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾಧ್ಯಕ್ಷ ನರಸಿಂಹಾಚಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ್, ವಾಸು, ನರಸಿಂಹಮೂರ್ತಿಗೌಡ, ಸಿ.ಟಿ.ಮಂಜುನಾಥ್, ಸಿದ್ದರಾಜುಗೌಡ, ಮಹಿಳಾಧ್ಯಕ್ಷೆ ಮಂಗಳಾ, ಮಲ್ಲಿಕಾರ್ಜುನ್, ಲಕ್ಷ್ಮಣಗೌಡ, ಧರಣಿ, ಕಲ್ಲಳ್ಳಿ ರಾಜು, ಪ್ರಸನ್ನ, ಚಂದ್ರು ಇತರರಿದ್ದರು.