ಜಿಲ್ಲೆ

ಕಾಂಗ್ರೆಸ್ ವಿರುದ್ಧ ಹೋರಾಟಕ್ಕೆ ಬಿಜೆಪಿ ನಿರ್ಧಾರ

ಆನಂದಕುಮಾರ ಅಂಗಡಿ

ಹುಬ್ಬಳ್ಳಿ : ಇಲ್ಲಿನ ಅರವಿಂದ ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲೆ ಹಾಗೂ ಧಾರವಾಡ ಗ್ರಾಮಾಂತರ ಜಿಲ್ಲೆಯ ಪ್ರಮುಖರ ಸಭೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಹೋರಾಟ ಕೈಗೊಳ್ಳುವ ಹಾಗೂ ಪಕ್ಷದ ಸಂಘಟನಾತ್ಮಕ ವಿಷಯಗಳ ಕುರಿತು ರ್ಚಚಿಸಲಾಯಿತು.

ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸದನದಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗಿತ್ತು. ಅದರ ಮುಂದುವರೆದ ಭಾಗವಾಗಿ ಮೂರು ದಿನಗಳವರೆಗೆ ಹುಬ್ಬಳ್ಳಿ- ಧಾರವಾಡದಲ್ಲಿ ಮತ್ತು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ಹನಿಟ್ರಾ್ಯಪ್, ಮುಸ್ಲಿಂರಿಗೆ ಶೇ.4 ರಷ್ಟು ಮೀಸಲಾತಿ, ಡಿ.ಕೆ. ಶಿವಕುಮಾರ ಸಂವಿಧಾನ ವಿರೋಧಿ ಹೇಳಿಕೆಗಳನ್ನು ವಿರೋಧಿಸಿ ಸದನದಲ್ಲಿ 18 ಶಾಸಕರ ಅಮಾನತು ವಾಪಸ್ ಪಡೆಯುವ ಕುರಿತು ರಾಜ್ಯಾದ್ಯಂತ ಪ್ರತಿಭಟನೆ ನಡೆಯಲಿವೆ ಎಂದರು.

ರಾಜ್ಯದ ನಾಲ್ಕು ನಗರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು. ಮೈಸೂರು, ತುಮಕೂರು, ಹುಬ್ಬಳ್ಳಿಧಾರವಾಡ, ಕೊಪ್ಪಳದಲ್ಲಿ ಬೃಹತ್ ಮಟ್ಟದ ಪ್ರತಿಭಟನೆಗಳು ನಡೆಯಲಿದ್ದು, ಅಹೋರಾತ್ರಿ ಧರಣಿ ಮಾಡಲಾಗುವುದು. ಈ ಪ್ರತಿಭಟನೆಯಲ್ಲಿ ಬೇರೆ ಜಿಲ್ಲೆಗಳಿಂದಲೂ ಜನರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಮಾತನಾಡಿ, ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಕೆಲಸಗಳು ಆಗುತ್ತಿದ್ದವು ಎಂದರು.

ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಮಾತನಾಡಿದರು. ಮಹಾನಗರ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಗ್ರಾಮೀಣ ಜಿಲ್ಲಾಧ್ಯಕ್ಷ ನಿಂಗಪ್ಪ ಸುತಗಟ್ಟಿ, ಮಾಜಿ ಶಾಸಕರಾದ ಅಶೋಕ ಕಾಟವೆ, ಸೀಮಾ ಮಸೂತಿ, ನಾಗರಾಜ ಛಬ್ಬಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.