ಜಿಲ್ಲೆ

ಬಿಜೆಪಿ, ಎಚ್‌ಡಿಕೆ ಭ್ರಷ್ಟಾಚಾರ ತನಿಖೆಗೆ ಆಗ್ರಹಿಸಿ ಪಾದಯಾತ್ರೆ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಪ್ರತಿ ಸವಾಲು

ಮೈಸೂರು: ಮುಡಾ ಹಗರಣದ ಬಗ್ಗೆ ಬಿಜೆಪಿಯವರು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡಿದರೆ ಅದೇ ದಿನ ಬಿಜೆಪಿ ಮತ್ತು ಎಚ್.ಡಿ.ಕುಮಾರಸ್ವಾಮಿ ಅವಧಿಯಲ್ಲಿ ನಡೆದಿರುವ 20 ಪ್ರಮುಖ ಭ್ರಷ್ಟಾಚಾರದ ತನಿಖೆಯನ್ನು ನಡೆಸುವಂತೆ ಆಗ್ರಹಿಸಿ ಮೈಸೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡುವುದಾಗಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಪ್ರತಿ ಸವಾಲು ಹಾಕಿದರು.


ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಕುಟುಂಬ ದಾಖಲೆ ಕೊಟ್ಟು ಬದಲಿ ನಿವೇಶನ ಪಡೆದಿದ್ದಾರೆ. ದಾಖಲೆ ಇಲ್ಲದೆ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತು ಅವರ ಕುಟುಂಬ ಮುಡಾದಿಂದ ನಿವೇಶನ ಪಡೆದಿದ್ದಾರೆ. ಅದರ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದರು.


ಬಿಜೆಪಿಯ 4 ವರ್ಷ, ಎಚ್.ಡಿ.ಕುಮಾರಸ್ವಾಮಿ ಅವರ ಒಂದು ವರ್ಷದ ಆಡಳಿತ ಸೇರಿ 5 ವರ್ಷದಲ್ಲಿ ಸಾವಿರಾರು ಕೋಟಿ ರೂ. ಭ್ರಷ್ಟಾಚಾರ ನಡೆದಿದೆ. ಈ ಭ್ರಷ್ಟಾಚಾರದ ತನಿಖೆಯನ್ನು ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಿ ಸಾರ್ವಜನಿಕ ಹಣವನ್ನು ವಾಪಸ್ ಪಡೆದುಕೊಳ್ಳಬೇಕು ಎಂದು ಒತ್ತಾಯಿಸಿ ಜು.29ರಂದು ನಾವು ಕೂಡ ಪ್ರಗತಿಪರ, ರೈತ, ಕನ್ನಡಪರ, ಸಾಮಾಜಿಕ ಕಳಕಳಿಯುಳ್ಳ ನಾಗರಿಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಮೈಸೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗುವುದು ಎಂದರು.


ಬಿಜೆಪಿ-ಜೆಡಿಎಸ್ ಅವಧಿಯಲ್ಲೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಆದರೆ, ಬಿಜೆಪಿಯವರು ಮತ್ತು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರು ‘ಸಿದ್ದರಾಮಯ್ಯ ಅವಧಿಯಲ್ಲಿ ಮುಡಾದಲ್ಲಿ 3-4 ಸಾವಿರ ಕೋಟಿ ರೂ.ಭ್ರಷ್ಟಾಚಾರ ಆಗಿದೆ’ ಎಂದು ಆರೋಪಿಸಿದ್ದಾರೆ. ಸಿದ್ದರಾಮಯ್ಯ ಭ್ರಷ್ಟಾಚಾರ ಮಾಡಿದ್ದರೆ ದಾಖಲೆ ಬಿಡುಗಡೆ ಮಾಡಲಿ. ಸುಳ್ಳು ಆರೋಪ ಮಾಡುವುದಲ್ಲ ಎಂದು ಹರಿಹಾಯ್ದರು.


ಮುಡಾ ಹಗರಣಕ್ಕೂ, ಸಿದ್ದರಾಮಯ್ಯ ಅವರಿಗೂ ಏನು ಸಂಬಂಧ ಇಲ್ಲ. ಅವರ ಕುಟುಂಬದ 3.16 ಎಕರೆ ಜಮೀನನ್ನು ಅಕ್ರಮವಾಗಿ ಮುಡಾದಿಂದ ವಶಪಡಿಸಿಕೊಂಡು ಸೈಟ್‌ಗಳನ್ನು ಹಂಚಲಾಗಿದೆ. ಅದಕ್ಕೆ ಪರ್ಯಾಯವಾಗಿ ಬದಲಿ 14 ನಿವೇಶನ ನೀಡಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.