‘
ಬೆಳಗಾವಿ: ‘ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ ತುರ್ತು ಪರಿಸ್ಥಿತಿಯನ್ನು ಜನರು ಮರೆಯಬೇಕು ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ತುರ್ತು ಪರಿಸ್ಥಿತಿಯಲ್ಲಿ ಜನರು ಸಾಕಷ್ಟು ನೋವು ಅನುಭವಿಸಿದ್ದಾರೆ. ಸಂತ್ರಸ್ತರು ಮತ್ತು ಅವರ ಕುಟುಂಬ ಸದಸ್ಯರ ಮೇಲೆ ನಡೆದ ದೌರ್ಜನ್ಯವನ್ನು ಮರೆಯಲಾಗದು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದರು.
ನಗರದ ಹಿಂದವಾಡಿಯ ಮಹಾವೀರ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಸಾಮಾಜಿಕ ನ್ಯಾಯಕ್ಕಾಗಿ ನಾಗರಿಕರು ಮತ್ತು ತುರ್ತು ಪರಿಸ್ಥಿತಿಯಲ್ಲಿ ಸಂವಿಧಾನಕ್ಕೆ ಮಾಡಿದ ಅಪಚಾರ’ ವಿಷಯ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತುರ್ತು ಪರಿಸ್ಥಿತಿ ಘೋಷಿಸಿದ್ದನ್ನು ಮತ್ತು ಜನರಿಗೆ ಮಾಡಿದ ಅನ್ಯಾಯವನ್ನು ಕಾಂಗ್ರೆಸ್‌ನವರು ಮರೆಯಬಹುದು. ಆದರೆ, ಇಂದಿರಾ ಗಾಂಧಿ ಸಂವಿಧಾನದ ಹತ್ಯೆ ಮಾಡಿದ ಕರಾಳ ದಿನವನ್ನು ನಾವು ಮರೆಯಲು ಸಾಧ್ಯವಿಲ್ಲ. ಇದಕ್ಕಾಗಿ ಕಾಂಗ್ರೆಸ್‌ನವರು ದೇಶದ ಜನರ ಕ್ಷಮೆಯಾಚಿಸಬೇಕು’ ಎಂದು ಒತ್ತಾಯಿಸಿದರು.
ವಿಧಾನ ಪರಿಷತ್ ಸದಸ್ಯ ಚಲವಾದಿ ನಾರಾಯಣಸ್ವಾಮಿ, ‘ಇಂದು ಕಾಂಗ್ರೆಸ್ ತನ್ನನ್ನು ಸಂವಿಧಾನದ ರಕ್ಷಕ ಎಂಬಂತೆ ಬಿಂಬಿಸಿಕೊಳ್ಳುತ್ತಿದೆ. ನರೇಂದ್ರ ಮೋದಿ ಸಂವಿಧಾನ ಬದಲಿಸುತ್ತಾರೆ ಎನ್ನುತ್ತಿದೆ. ಆದರೆ, ಸ್ವತಃ ಅಂಬೇಡ್ಕರ್ ಅವರೇ ಮರಳಿ ಬಂದರೂ ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ ಎಂದು ಮೋದಿ ಸ್ಪಷ್ಟಪಡಿಸಿದ್ದಾರೆ. ಆದರೆ, ಈ ವಿಚಾರದಲ್ಲಿ ಕಾಂಗ್ರೆಸ್ ನಾಟಕವಾಡುತ್ತಿದೆ. ತುರ್ತು ಪರಿಸ್ಥಿತಿ ಘೋಷಣೆ ಕುರಿತು ಇಂದು ಆತ್ಮಾವಲೋಕನದ ಅಗತ್ಯವಿದೆ’ ಎಂದರು.
‘ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ,ನಿವೃತ್ತ ಕ್ಯಾಪ್ಟನ್ ಚಾಂಗಪ್ಪ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಅಭಯ ಪಾಟೀಲ, ವಿಠ್ಠಲ ಹಲಗೇಕರ, ಬಿಜೆಪಿ ರಾಜ್ಯ ಘಟಕ ಉಪಾಧ್ಯಕ್ಷ ಅನಿಲ ಬೆನಕೆ ಇದ್ದರು.