ಗ್ರಾಪಂ ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಆಯ್ಕೆಯಾದ ಹಿನ್ನೆಲೆಯಲ್ಲಿ ಸಕಲೇಶಪುರದಲ್ಲಿ ಶಾಸಕ ಸಿಮೆಂಟ್ ಮಂಜು ಅವರನ್ನು ಸನ್ಮಾನಿಸಲಾಯಿತು.  
ಜಿಲ್ಲೆ

ಸಕಲೇಶಪುರದಲ್ಲಿ ಬಿಜೆಪಿ ಬಲಿಷ್ಠ

ಅಭಿನಯ್ ಎಚ್.ಎಂ

ಸಕಲೇಶಪುರ: ಭಾರತೀಯ ಜನತಾ ಪಕ್ಷ ಸಕಲೇಶಪುರ ವಿಧಾನಸಭಾ ಕ್ಷೇತ್ರದಲ್ಲಿ ಅತ್ಯಂತ ಬಲಿಷ್ಠವಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ತಾಲೂಕಿನ 2 ಗ್ರಾಮ ಪಂಚಾಯಿತಿಗಳ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ಗೆದ್ದ ಅಭ್ಯರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು.

ಸಕಲೇಶಪುರ ವಿಧಾನಸಭಾ ಕ್ಷೇತ್ರದ ಚಂಗಡಿಹಳ್ಳಿ ಗ್ರಾಪಂ ವ್ಯಾಪ್ತಿಯ ಹೇರೂರು, ಕುರುಭತ್ತೂರು ಗ್ರಾಪಂ ವ್ಯಾಪ್ತಿಯ ಆದರಗೆರೆ ಗ್ರಾಪಂಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಅತ್ಯಧಿಕ ಮತಗಳಿಂದ ಆಯ್ಕೆಯಾಗಿರುವುದು ಸಂತೋಷದ ವಿಷಯ. ಪ್ರತಿ ಗ್ರಾಮಕ್ಕೆ ಮೂಲಸೌಕರ್ಯ ಕಲ್ಪಿಸಬೇಕು, ಬಡವರಿಗೆ ನೆರವಾಗಬೇಕು ಎಂಬುದು ನನ್ನ ಇಚ್ಛೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಲಭ್ಯವಾಗುವ ಅನುದಾನದಲ್ಲಿ ಪ್ರಾಮಾಣಿಕವಾಗಿ ಅಭಿವೃದ್ಧಿ ಕಾರ್ಯ ಮಾಡಲಾಗುವುದು ಎಂದರು.

ಬಿಜೆಪಿ ಮಂಡಲ ಅಧ್ಯಕ್ಷ ವಳಲಹಳ್ಳಿ ಅಶ್ವಥ್ ಮಾತನಾಡಿ, ಸಿಮೆಂಟ್ ಮಂಜು ಅವರು ಶಾಸಕರಾಗಿ ಆಯ್ಕೆಯಾದ ನಂತರ ಬಹುತೇಕ ಎಲ್ಲ ಚುನಾವಣೆಗಳಲ್ಲೂ ಗೆಲುವು ದೊರಕಿದೆ. ಈ ನಡುವೆ ಶಾಸಕರ ಕಾರ್ಯವೈಖರಿಯಿಂದಾಗಿ ಮತ್ತೆ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಲಾಗಿದೆ ಎಂದರು.

ಹೇರೂರು ಸಾಮಾನ್ಯ ಕ್ಷೇತ್ರದಿಂದ ಗ್ರಾಪಂ ಸದಸ್ಯರಾಗಿ ಆಯ್ಕೆಯಾದ ಮಧು ಹಾಗೂ ಕುರುಭತ್ತೂರು ಗ್ರಾಪಂ ವ್ಯಾಪ್ತಿಯ ಆದರಗೆರೆ ಕ್ಷೇತ್ರದಿಂದ ಆಯ್ಕೆಯಾದ ಸತ್ಯಜಿತ್ ಅವರನ್ನು ಶಾಸಕರು ಸನ್ಮಾನಿಸಿದರು. ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಗ್ನಿ ಸೋಮಶೇಖರ್, ಮುಖಂಡರಾದ ರಾಜೇಗೌಡ, ಕೌಶಿಕ್,ಸವಿನ್, ನವೀನ್, ಕಿರಣ್, ಸಂತೋಷ್, ಜಗತ್, ಸುದರ್ಶನ್, ಲೋಕೇಶ್, ಜೀವನ್, ನಿರಂಜನ್, ರಾಜ್ ಕುಮಾರ್ ಇತರರು ಹಾಜರಿದ್ದರು.