ಮಂಡ್ಯ: ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರು ಮತ್ತು ಮಕ್ಕಳ ಸರಣಿ ಸಾವಿನ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೆಂದು ಆರೋಪಿಸಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ, ಆರೋಗ್ಯ ಸಚಿವರ ವಿರುದ್ಧ ಘೋಷಣೆ ಕೂಗಿದರು. ಮೃತಪಟ್ಟ ಬಾಣಂತಿಯರ ಕುಟುಂಬಕ್ಕೆ ತಲಾ 25 ಲಕ್ಷ ರೂ ಪರಿಹಾರ ನೀಡುವಂತೆ ಒತ್ತಾಯಿಸಿದರು.
ಸಾವನ್ನಪ್ಪಿದ ಬಾಣಂತಿಯರ ಅನಾಥ ಮಕ್ಕಳ ಭವಿಷ್ಯ ರೂಪಿಸಲು ಸರ್ಕಾರ ಆ ಮಕ್ಕಳನ್ನು ದತ್ತು ತೆಗೆದುಕೊಳ್ಳಬೇಕು. ಇದಕ್ಕಾಗಿ ಕೂಡಲೇ ಸರ್ಕಾರ ನಿಯಮಾವಳಿ ರೂಪಿಸಬೇಕು.(ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಭದ್ರತೆಯನ್ನು ಒದಗಿಸಬೇಕು ಹಾಗೂ ಇದನ್ನು ಖಾತ್ರಿಪಡಿಸಲು ಮೇಲ್ವಿಚಾರಣೆ ಸಮಿತಿಯನ್ನು ರಚಿಸಬೇಕು. ಬಾಣಂತಿಯರ ಸಾವಿಗೆ ನೈಜ ಕಾರಣಗಳನ್ನು ತಿಳಿದು ಅದನ್ನು ನಿಯಂತ್ರಿಸಲು ಉಚ್ಚ ನ್ಯಾಯಾಲಯದ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು. ಬಳ್ಳಾರಿ, ಬೆಳಗಾವಿ, ತಿಪಟೂರು, ಬೆಂಗಳೂರು, ಕೊಪ್ಪಳ, ರಾಯಚೂರು, ಕಲಬುರಗಿಯಿಂದ ಬರುತ್ತಿರುವ ವರದಿಗಳ ಪ್ರಕಾರ ಈ ಸಾವುಗಳಿಗೆ ಸರ್ಕಾರ ಬಳಸುತ್ತಿರುವ ಕಳಪೆ ಗುಣಮಟ್ಟದ ಔಷಧ ಕಾರಣವಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರ ಕಾರಣವಾಗಿದೆ ಎಂದು ಆರೋಪಿಸಿದರು.
ಗರ್ಭಿಣಿಯರ ಆರೈಕೆಗಾಗಿ ಕೇಂದ್ರ ಸರ್ಕಾರ ನೀಡುತ್ತಿರುವ ಯೋಜನೆಗಳನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಬಾಣಂತಿಯರಿಗೆ ಪೋಷನ್ ಅಭಿಯಾನ್, ಜನನಿ ಸುರಕ್ಷಾ ಯೋಜನೆ, ಆಹಾರದ ಕಿಟ್ ಕ್ಯಾಲ್ಸಿಯಂ, ಪ್ರೋಟೀನ್ ನೀಡುವುದು. ನಿಯಮಿತ ತಪಾಸಣೆ ನಡೆಸುವುದು ಹಾಗೂ ಮಾತ್ರವಂದನೆ ಯೋಜನೆಯ ಹಣ ತಲುಪಿಸುವುದರಲ್ಲಿ ರಾಜ್ಯ ಸರ್ಕಾರದ ಎರಡು ಇಲಾಖೆಗಳು ವಿಫಲವಾಗಿವೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದರು.
ರಾಜ್ಯದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯವಸ್ಥೆ ಸರ್ಕಾರದ ಹೊಣೆಗೇಡಿತನದಿಂದ ಸಂಪೂರ್ಣ ಹದಗೆಟ್ಟಿದೆ. ಸಿಬ್ಬಂದಿ ಕೊರತೆಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೊರಗುತ್ತಿವೆ. ಆ್ಯಂಬುಲೆನ್ಸ್ ಚಾಲಕರಿಗೆ ಸರ್ಕಾರ ವೇತನ ನೀಡುತ್ತಿಲ್ಲ. ಸರ್ಕಾರಿ ಆಸ್ಪತ್ರೆಯ ಐಸಿಯು, ಬ್ಲಡ್ ಬ್ಯಾಂಕ್ ಕೊರತೆ ಇದೆ. ಸರ್ಕಾರ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸರ್ಕಾರಿ ಆಸ್ಪತ್ರೆಗಳ ವ್ಯವಸ್ಥೆಯನ್ನು ಸುವ್ಯವಸ್ಥಿತಗಳಿಸಬೇಕು. ಮೇಲ್ದರ್ಜೆಗೇರಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಗಳಾ, ಪ್ರಧಾನ ಕಾರ್ಯದರ್ಶಿ ಶಿಲ್ಪಾ, ಮನ್‌ಮುಲ್ ನಿರ್ದೇಶಕಿ ರೂಪಾ, ಮುಖಂಡರಾದ ಸೌಮ್ಯಾ, ಶ್ರುತಿ, ಶೋಭಾ, ಮಂಜುಳಾ, ಜಾನಕಿ, ವಿದ್ಯಾ ನಾಗೇಂದ್ರ, ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ಭೀಮೇಶ್, ನಿತ್ಯಾನಂದ, ನವೀನ್‌ಕುಮಾರ್ ಇತರರಿದ್ದರು.