ಜಿಲ್ಲೆ

3ರಂದು ಬಿಜೆಪಿ ಕಚೇರಿ ಮುತ್ತಿಗೆ

ಅವಿನಾಶ್ ಜೈನಹಳ್ಳಿ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ಹಗರಣ ಸಂಬಂಧ ಬಿಜೆಪಿ ನಾಯಕರು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿರುವುದಕ್ಕೆ ಅಹಿಂದ ಸಂಘಟನೆಗಳು ವಿರೋಧ ವ್ಯಕ್ತ ಪಡಿಸಿವೆ. ಈ ಸಂಬಂಧ ಆಗಸ್ಟ್ 3 ರಂದು ಮೈಸೂರು ಜಿಲ್ಲಾ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಅಹಿಂದ ಸಂಘಟನೆಗಳು ನಿರ್ಧರಿಸಿವೆ.

ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ, ದಲಿತ ಸಂಘರ್ಷ ಸಮಿತಿ ಮತ್ತು ಅಹಿಂದ ಸಂಘಟನೆಗಳ ಒಕ್ಕೂಟದ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣದ ಹೆಸರಿನಲ್ಲಿ ವಿನಾಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತೇಜೋವಧೆ ಮಾಡಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ರಾಜಕೀಯ ಹುನ್ನಾರ ಮಾಡುತ್ತಿವೆ. ಹೇಗಾದರೂ ಮಾಡಿ ಸಿದ್ದರಾಮಯ್ಯ ವರ್ಚಸ್ಸಿಗೆ ಧಕ್ಕೆ ಉಂಟು ಮಾಡಿ, ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಒಂದೇ ಉದ್ದೇಶವಿದೆ. ಮುಡಾ ಪ್ರಕರಣ ಮುಂದಿಟ್ಟುಕೊಂಡು ಬಿಜೆಪಿ, ಜೆಡಿಎಸ್ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುತ್ತಿರುವುದು ಸರಿಯಲ್ಲ ಎಂದು ಸಭೆಯಲ್ಲಿ ವಿರೋಧ ವ್ಯಕ್ತವಾಯಿತು.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಕೆ.ಎಸ್.ಶಿವರಾಮು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮಣಿಸುವ ಹುನ್ನಾರದಿಂದ ಬಿಜೆಪಿ-ಜೆಡಿಎಸ್ ರೂಪಿಸಿರುವ ಆ.3ರ ಬೆಂಗಳೂರು-ಮೈಸೂರು ಪಾದಯಾತ್ರೆ ವಿರೋಧಿಸಿ ಅಂದು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ. ಕೋಮುವಾದಿ ರಾಜಕೀಯವನ್ನು ದಿಟ್ಟತನದಿಂದ ಎದುರಿಸುತ್ತಿರುವ ಅಹಿಂದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಲ್ಲಿರುವುದನ್ನು ಸಹಿಸಲಾಗದೇ ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಮುಂದಾಗಿದೆ. ಹೀಗಾಗಿ ಬಹುಜನರ ನಾಯಕ ಸಿದ್ದರಾಮಯ್ಯ ಅವರನ್ನು ಸಮರ್ಥಿಸಿಕೊಂಡು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದರು.

ಆ.3ರಂದು ಬೆಳಗ್ಗೆ 11 ಗಂಟೆಗೆ ಅಹಿಂದ ಸಮುದಾಯಗಳ 500ಕ್ಕೂ ಹೆಚ್ಚು ಮುಖಂಡರು ನಗರದ ಚಾಮರಾಜಪುರಂನಲ್ಲಿರುವ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲಿದ್ದೇವೆ. ಸಿದ್ದರಾಮಯ್ಯ ಬೆಂಬಲಿಗರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.