ಮಂಗಳೂರು : ರಾಜ್ಯದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತು ಹಗರಣಗಳ ವಿರುದ್ಧ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಆ.3ರಿಂದ ಬೆಂಗಳೂರಿನಿಂದ ಮೈಸೂರುವರೆಗೆ ಬೃಹತ್ ಪಾದಯಾತ್ರೆ ನಡೆಯಲಿದೆ. ಈ ಪಾದಯಾತ್ರೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ 5 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪಕ್ಷದ ಜಿಲ್ಲಾಧ್ಯಕ್ಷರು, ಜನಪ್ರತಿನಿಧಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. 200 ಮಂದಿಯ ತಂಡ ಈಗಾಗಲೇ ಬೆಂಗಳೂರಿಗೆ ತೆರಳಿದೆ ಎಂದರು.
ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಸಮರ ಸಾರಿದೆ. ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಯಾವುದೇ ರೀತಿಯ ಅಭಿವೃದ್ಧಿಗೆ ಆದ್ಯತೆ ನೀಡದ ಸರ್ಕಾರ ಕೇವಲ ಭ್ರಷ್ಟಾಚಾರದಲ್ಲಿ ಮುಳುಗಿದೆ. ಬೆಲೆ ಏರಿಕೆಯಿಂದ ಜನತೆ ಕಂಗಾಲಾಗುವಂತಾಗಿದೆ ಎಂದು ಸತೀಶ್ ಕುಂಪಲ ಹೇಳಿದರು.
ವಾಲ್ಮೀಕಿ ನಿಗಮದ 187 ಕೋಟಿ ರೂ.ಗಳನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿದ್ದು, ಈ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಅನೇಕ ಆಘಾತಕಾರಿ ಮಾಹಿತಿಗಳು ಹೊರಬಂದಿವೆ. ಇದರ ಬಗ್ಗೆ ವಿಧಾನಸಭೆಯಲ್ಲಿ ಮತ್ತು ಹೊರಗೆ ಅನೇಕ ಹೋರಾಟಗಳನ್ನು ಬಿಜೆಪಿ ನಡೆಸಿದೆ. ಈ ಪ್ರಕರಣದಲ್ಲಿ ನೈಜ ಆರೋಪಿಗಳನ್ನು ಪತ್ತೆ ಮಾಡಿ ಶಿಕ್ಷೆಗೆ ಗುರಿಪಡಿಸಬೇಕಾದರೆ ಸಿಬಿಐ ತನಿಖೆಯೇ ನಡೆಯಬೇಕೆಂದು ಅವರು ಒತ್ತಾಯಿಸಿದರು.
ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರ, ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಖಜಾಂಜಿ ಸಂಜಯ್ ಪ್ರಭು, ಮಹೇಶ್ ಜೋಗಿ ಉಪಸ್ಥಿತರಿದ್ದರು.