ಉಡುಪಿ: ಗ್ರಾಪಂಗಳಲ್ಲಿ ಸರಾಗವಾಗಿ ಸಿಗುತ್ತಿದ್ದ 9/11 ಅಥವಾ ಏಕ ವಿನ್ಯಾಸ ನಕ್ಷೆ ಕೊಡುವ ಜವಾಬ್ದಾರಿಯನ್ನು ನಗರ ಪ್ರಾಧಿಕಾರಕ್ಕೆ ಹಸ್ತಾಂತರಿಸಿ ಅಧಿಕೃತ ಆದೇಶ ಮಾಡಿದ ಹಿನ್ನೆಲೆಯಲ್ಲಿ 9/11 ದಾಖಲೆಗಾಗಿ ಸಾರ್ವಜನಿಕರು ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಜುಲೈ 28ರಂದು ಸೋಮವಾರ ಬೆಳಗ್ಗೆ 11ಕ್ಕೆ ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾವಿರಾರು ಕಡತ ವಿವಿಧ ತಾಲೂಕಿನ ಪ್ರಾಧಿಕಾರಗಳಲ್ಲಿ ತುಂಬಿ ತುಳುಕುತ್ತಿದ್ದು, ಅದನ್ನು ಸರಿಪಡಿಸುವ ಬದಲು ಕಾಂಗ್ರೆಸ್ ಪಕ್ಷ ಜನರಿಗೆ ತಪ್ಪು ಮಾಹಿತಿ ಒದಗಿಸುತ್ತಿದೆ. ಈ ಜನಪರ ಹೋರಾಟಕ್ಕೆ ಪಕ್ಷದ ಎಲ್ಲಾ ಮೋರ್ಚಾಗಳು ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರು, ಸಂಸದರು, ಶಾಸಕರು ಬೆಂಬಲ ನೀಡಲಿದ್ದಾರೆ ಎಂದರು.
ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಏಕ ವಿನ್ಯಾಸ ನಕ್ಷೆ ಗೊಂದಲ ಇಡೀ ಜಿಲ್ಲೆಯ ಜ್ವಲಂತ ಸಮಸ್ಯೆಯಾಗಿದೆ. ಈ ಸಮಸ್ಯೆಯ ಮೂಲವನ್ನು ಜನತೆಗೆ ಮನವರಿಕೆ ಮಾಡಿಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬಲವಾದ ಹೋರಾಟ ಅತ್ಯಗತ್ಯ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ವಿಜಯ ಕೊಡವೂರು, ರಾಜ್ಯ ಒಬಿಸಿ ಮೋರ್ಚಾ ಉಪಾಧ್ಯಕ್ಷ ವಿಠಲ ಪೂಜಾರಿ, ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರವೀಂದ್ರ ತಿಂಗಳಾಯ ಉಪಸ್ಥಿತರಿದ್ದರು.