ಜಿಲ್ಲೆ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನ: ರಾಹುಲ್‌ಗಾಂಧಿ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಕೆ.ಎನ್.ರಾಘವೇಂದ್ರ

ಮಂಡ್ಯ: ಪ್ರಧಾನಮಂತ್ರಿ ನರೇಂದ್ರಮೋದಿ ಹಾಗೂ ಹಿಂದುಳಿದ ವರ್ಗ(ಒಬಿಸಿ)ದವರನ್ನು ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಅವಮಾನಿಸಿದ್ದಾರೆಂದು ಆರೋಪಿಸಿ ಮಂಗಳವಾರ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯ ಜಿಲ್ಲಾ ಉಸ್ತುವಾರಿ ಸುನೀಲ್ ಸುಬ್ರಮಣ್ಯ ಹಾಗೂ ಸಂಚಾಲಕ ಸಿ.ಪಿ.ಉಮೇಶ್ ನೇತೃತ್ವದಲ್ಲಿ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ರಾಹುಲ್‌ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಭಾರತ ಜೋಡೊ ಯಾತ್ರೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಕುರಿತು ರಾಹುಲ್ಗಾಂಧಿ ಅವಹೇಳನ ಮಾಡಿದ್ದಾರೆ. ಹಿಂದುಳಿದ ವರ್ಗದ(ಒಬಿಸಿ) ಕುಟುಂಬದಲ್ಲಿ ಜನಿಸದ ಪ್ರಧಾನಿ ನರೇಂದ್ರ ಮೋದಿ ಅವರು, ತಮ್ಮನ್ನು ತಾವು ಒಬಿಸಿ ಎಂದು ಗುರುತಿಸಿಕೊಳ್ಳುವ ಮೂಲಕ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಮೋದಿ ಅವರು ಘಾಂಚಿ ಜಾತಿಗೆ ಸೇರಿದವರು. ಗುಜರಾತ್‌ನಲ್ಲಿ 2000ದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಈ ಜಾತಿಯನ್ನು ಒಬಿಸಿ ಪಟ್ಟಿಗೆ ಸೇರಿಸಲಾಯಿತು. ಆಗ ಅಲ್ಲಿ ಸ್ವತಃ ಅವರೇ ಮುಖ್ಯಮಂತ್ರಿ ಆಗಿದ್ದರು. ಅಂದರೆ, ಅವರೇ ತನ್ನ ಜಾತಿಯನ್ನು ಒಬಿಸಿಗೆ ಸೇರಿಸಿದ್ದಾರೆ. ಹೀಗಾಗಿ ಹುಟ್ಟಿನಿಂದ ಮೋದಿ ಅವರು ಒಬಿಸಿ ಅಲ್ಲ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆಂದು ಪ್ರತಿಭಟನಾಕಾರರು ಆರೋಪಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಕೆ.ಎಸ್.ನಂಜುಂಡೇಗೌಡ, ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್, ಪ್ರಧಾನ ಕಾರ್ಯದರ್ಶಿ ಟಿ.ಶ್ರೀಧರ್, ಮನ್‌ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ, ಮುನಿರಾಜು, ಸಿ.ಟಿ.ಮಂಜುನಾಥ್, ಶಿವಕುಮಾರ್ ಆರಾಧ್ಯ, ಹೊಸಹಳ್ಳಿ ಶಿವು, ವಿವೇಕ್ ಇತರರಿದ್ದರು.