ಕೇರಳ ಕೇಂದ್ರೀಯ ವಿಶ್ವವಿದ್ಯಾಲಯ ವತಿಯಿಂದ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಎಂ.ಎಲ್ ಅಶ್ವಿನಿ ಕೇಂದ್ರ ಸಚಿವ ಸುರೇಶ್‌ಗೋಪಿ ಅವರಿಗೆ ಮನವಿ ಸಲ್ಲಿಸಿದರು. 
ಜಿಲ್ಲೆ

ಕೇಂದ್ರೀಯ ವಿವಿಯಡಿ ಮೆಡಿಕಲ್ ಕಾಲೇಜು: ಬಿಜೆಪಿ ಬೇಡಿಕೆ ಮತ್ತೊಮ್ಮೆ ಮುನ್ನೆಲೆಗೆ

ವಿಜಯವಾಣಿ ಸುದ್ದಿಜಾಲ ಕಾಸರಗೋಡು

ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಅಧೀನದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ಕುರಿತು ಹಲವು ವರ್ಷಗಳ ಬೇಡಿಕೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು, ಕಾಸರಗೋಡು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಎಂ.ಎಲ್ ಅಶ್ವಿನಿ ಒಳಗೊಂಡ ಕಾಸರಗೋಡು ಬಿಜೆಪಿಯು ಕೇಂದ್ರ ಸಚಿವ ಸುರೇಶ್ ಗೋಪಿ ಅವರಿಗೆ ಈ ಸಂಬಂಧ ಮನವಿ ಸಲ್ಲಿಸಿದೆ.

ವಿಶ್ವವಿದ್ಯಾಲಯದ ಪ್ರಾರಂಭದಿಂದಲೂ ಚರ್ಚೆಯಲ್ಲಿರುವ ವೈದ್ಯಕೀಯ ಕಾಲೇಜು ಅದರ ಮಾಸ್ಟರ್ ಪ್ಲಾನ್ ಪ್ರಕಾರ ನಡೆಯಲಿದ್ದು, 50 ಎಕರೆ ಜಾಗ ಮೀಸಲಿಡಲಾಗಿದೆ. ಮಹಿಳಾ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯೆಯಾಗಿರುವ ಅಶ್ವಿನಿ ರಾಷ್ಟ್ರೀಯ ನಾಯಕರ ಜತೆಗೂ ಸಂಪರ್ಕದಲ್ಲಿದ್ದು, ಯೋಜನೆಗೆ ಶಕ್ತಿ ತುಂಬುವ ಪ್ರಯತ್ನ ಮಾಡಲಾಗಿದೆ. ವೈದ್ಯಕೀಯ ಕಾಲೇಜು ಆಸ್ಪತ್ರೆ ಸ್ಥಾಪಿಸುವ ನಿಟ್ಟಿನಲ್ಲಿ ಶಕ್ತಿ ಮೀರಿ ಪ್ರಯತ್ನಿಸುವುದಾಗಿ ಅಶ್ವಿನಿ ಎಂ.ಎಲ್. ತಿಳಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯ ಪಿ.ಕೆ.ಕೃಷ್ಣದಾಸ್, ರಾಜ್ಯ ಕಾರ್ಯದರ್ಶಿ ಕೆ. ರಂಜಿತ್ ಉಪಸ್ಥಿತರಿದ್ದರು.
ಸಚಿವ ಸುರೇಶ್‌ಗೋಪಿ ಭರವಸೆ

ಕಣ್ಣೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಎಂ.ಎಲ್ ಅಶ್ವಿನಿ ಈ ಕುರಿತು ಚರ್ಚಿಸಿ ಮನವಿ ಸಲ್ಲಿಸಿದರು. ಲೋಕಸಭಾ ಚುನಾವಣೆ ಪ್ರಚಾರ ಸಂದರ್ಭ ವೈದ್ಯಕೀಯ ಕಾಲೇಜು ಸ್ಥಾಪಿಸುವುದಾಗಿ ಎಂ.ಎಲ್.ಅಶ್ವಿನಿ ಭರವಸೆ ನೀಡಿದ್ದು, ವೈದ್ಯಕೀಯ ಕಾಲೇಜು ಆಸ್ಪತ್ರೆ ನಿರ್ಮಾಣ ವಿಚಾರದಲ್ಲಿ ಮಧ್ಯಪ್ರವೇಶಿಸುವುದಾಗಿ ಸುರೇಶ್‌ಗೋಪಿ ಭರವಸೆ ನೀಡಿದ್ದಾರೆ.