ಮಂಡ್ಯ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಉತ್ತಮ ಆಡಳಿತವನ್ನು ಜನರು ಮೆಚ್ಚಿಕೊಂಡಿದ್ದಾರೆ. ಅದರಂತೆ ಪಕ್ಷದ ಕಡೆಗೆ ಒಲವು ತೋರುತ್ತಿದ್ದಾರೆ ಎಂದು ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ ಹೇಳಿದರು.
ಇಲ್ಲಿನ ಅಶೋಕನಗರದಲ್ಲಿ ಬಿಜೆಪಿ ವತಿಯಿಂದ ಆಯೋಜಿಸಿದ್ದ ಬೂತ್ ವಿಜಯ ಅಭಿಯಾನದ ಅಂಗವಾಗಿ ಮನೆ ಮನೆಗೆ ಪಕ್ಷದ ಬಾವುಟ ಕಟ್ಟುವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಬಿಜೆಪಿ ಸರ್ಕಾರದ ಕಾರ್ಯವೈಖರಿಯನ್ನು ಗಮನಿಸುತ್ತಿರುವ ಜನರು ಬಿಜೆಪಿಯತ್ತ ವಾಲುತ್ತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯಾದ್ಯಂತ ಬೂತ್ ವಿಜಯ ಅಭಿಯಾನ ನಡೆಸಲಾಗಿದೆ. ಅದರಂತೆ ಮಂಡ್ಯದಲ್ಲೂ ನಾವು ಅತ್ಯಂತ ಯಶಸ್ವಿಯಾಗಿ ನಡೆಸಿದ್ದೇವೆ. ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ಜನಪರ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವುದು ಹಾಗೂ ಪಕ್ಷವನ್ನು ಸಂಘಟಿಸುವ ದೃಷ್ಟಿಯಿಂದ ನಡೆಯುತ್ತಿರುವ ಅಭಿಯಾನಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದರು.
ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್ ಮಾತನಾಡಿ, ಎಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಜಿಲ್ಲೆಯ ಅಭಿವೃದ್ಧಿಗೆ 8,500 ಕೋಟಿ ರೂ. ಘೋಷಣೆ ಮಾಡಿದ್ದರು. ನಂತರ ನಡೆದ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮಗ ನಿಖಿಲ್‌ಕುಮಾರಸ್ವಾಮಿ ಅವರನ್ನು ಸೋಲಿಸಿದರೆಂಬ ಕಾರಣಕ್ಕೆ ಘೋಷಣೆ ಮಾಡಿದ್ದ ಹಣವನ್ನು ವಾಪಸ್ ಪಡೆದು ಜಿಲ್ಲೆಯ ಜನತೆಗೆ ದ್ರೋಹವೆಸಗಿದರು ಎಂದು ದೂರಿದರು.
ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಎಚ್.ಪಿ.ಮಹೇಶ್, ಮುಡಾ ಮಾಜಿ ಅಧ್ಯಕ್ಷೆ ವಿದ್ಯಾ ನಾಗೇಂದ್ರ, ಮುಡಾ ನಿರ್ದೇಶಕ ಪುಟರ್‌ಮಲ್‌ಜೈನ್, ಕಿಯಾನಿಕ್ಸ್ ನಿರ್ದೇಶಕ ಎಚ್.ಎನ್.ಮಂಜುನಾಥ್, ಮುಖಂಡರಾದ ಮಲ್ಲಿಕಾರ್ಜುನ, ಕೃಷ್ಣ ಅಂಕಪ್ಪ, ನಿತ್ಯಾನಂದ, ಪೂಜಾರಿ ಬೋರಪ್ಪ, ಕೋಣನಹಳ್ಳಿ ಕುಮಾರ್ ಇತರರಿದ್ದರು.